
ಕೊಟ್ಟಿಗೆಹಾರ ಬಳಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಟ್ಟಿಗೆಹಾರ ಬಳಿ ಭೀಕರ ಅಪಘಾತ; ಮೂವರು ಯುವಕರು ಸ್ಥಳದಲ್ಲೇ ಸಾವು
ಕೊಟ್ಟಿಗೆಹಾರ ಬಳಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್‌ವೊಂದರ ಮುಂಭಾಗದಲ್ಲಿ ರಸ್ತೆ ಬದಿಯಲ್ಲಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ನಿಲ್ಲಿಸಲಾಗಿತ್ತು. ಈ ವೇಳೆ ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂವರು ಯುವಕರ ದುರ್ಮರಣ
ಅಪಘಾತದಲ್ಲಿ ಮೃತಪಟ್ಟವರನ್ನು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಧರ್ಮಸ್ಥಳ ಪ್ರವಾಸ ದುರಂತ
ಮೃತರು ಹಾಗೂ ಗಾಯಾಳುಗಳು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು ಎಂದು ತಿಳಿದುಬಂದಿದೆ. ಐವರು ಸ್ನೇಹಿತರು ಕಾರಿನಲ್ಲಿ ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬಣಕಲ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

