ಪ್ರೇಮ ನಿರಾಕರಿಸಿದ್ದಕ್ಕೆ ಬ್ಯೂಟಿಷಿಯನ್ ಮೇಲೆ ಹಲ್ಲೆ; ಆರೋಪಿ ವಿರುದ್ಧ ಪ್ರಕರಣ ದಾಖಲು
x

ಪ್ರೇಮ ನಿರಾಕರಿಸಿದ್ದಕ್ಕೆ ಬ್ಯೂಟಿಷಿಯನ್ ಮೇಲೆ ಹಲ್ಲೆ; ಆರೋಪಿ ವಿರುದ್ಧ ಪ್ರಕರಣ ದಾಖಲು

ಪ್ರೇಮ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬ್ಯೂಟಿಷಿಯನ್ ಮೇಲೆ ಹಲ್ಲೆ, ಜೀವ ಬೆದರಿಕೆ ಹಾಗೂ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ಕಿರುಕುಳ ನೀಡಿದ ಆರೋಪದಡಿ ಎಚ್‌ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Click the Play button to hear this message in audio format

ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ 26 ವರ್ಷದ ಬ್ಯೂಟಿಷಿಯನ್‌ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಎಚ್‌ಎಎಲ್‌ ಪೊಲೀಸರು ಮೊಹಮ್ಮದ್ ರಫೀಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಎಸಿಎಸ್ ಲೇಔಟ್ ನಿವಾಸಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಮೂಲತಃ ಅಸ್ಸಾಂ ಮೂಲದ ಯುವತಿ ನೀಡಿದ ದೂರಿನ ಪ್ರಕಾರ, ಕಳೆದ ಸುಮಾರು ಎರಡು ವರ್ಷಗಳಿಂದ ರಫೀಕ್ ತನ್ನ ಪ್ರೇಮ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ. ಯುವತಿ ನಿರಾಕರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಬೆದರಿಕೆ ಹಾಕುವುದು ಸೇರಿದಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದೇ ವೇಳೆ, ಯುವತಿಯ ಫೋಟೋಗಳನ್ನು ಬಳಸಿಕೊಂಡು ನಕಲಿ ಇನ್‌ಸ್ಟಾಗ್ರಾಂ ಖಾತೆ ತೆರೆದು ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಕಳೆದ ವಾರ ಕೆಲಸ ಮುಗಿಸಿ ಯುವತಿ ತನ್ನ ಸಹೋದರಿ ಮತ್ತು ಸ್ನೇಹಿತೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಮಾರತ್ತಹಳ್ಳಿ ಸ್ಕೈವಾಕ್ ಸಮೀಪದ ರೈಲ್ವೆ ಹಳಿ ಬಳಿ ರಫೀಕ್ ಹಿಂಬಾಲಿಸಿ ಅವರ ವಾಹನವನ್ನು ಅಡ್ಡಗಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಯುವತಿಯ ಮೇಲೆ ಹಲ್ಲೆ ನಡೆಸಿದ್ದು, ತಡೆಯಲು ಬಂದ ಸಹೋದರಿ ಮತ್ತು ಸ್ನೇಹಿತೆಯ ಮೇಲೂ ಮರದ ದೊಣ್ಣೆಯಿಂದ ಹಲ್ಲೆ ನಡೆಸಿ, ಮೂವರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ಬಳಿಕ ಯುವತಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲಿ ಮೊದಲು ಜೀರೋ ಎಫ್‌ಐಆರ್ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಎಚ್‌ಎಎಲ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Read More
Next Story