
ತಿಥಿ ಊಟ ಸೇವಿಸಿ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಭದ್ರಾವತಿ| ತಿಥಿ ಕಾರ್ಯಕ್ರಮದ ಊಟ ಸೇವಿಸಿ ಮಕ್ಕಳು ಅಸ್ವಸ್ಥ
ಭದ್ರಾವತಿಯಲ್ಲಿ ತಿಥಿ ಕಾರ್ಯಕ್ರಮದ ಊಟ ಸೇವಿಸಿದ 15ಕ್ಕೂ ಹೆಚ್ಚು ವಿಶೇಷಚೇತನ ವಿದ್ಯಾರ್ಥಿಗಳು ಹಾಗೂ 8 ಮಂದಿ ಸಾರ್ವಜನಿಕರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಆಹಾರ ಸೇವಿಸಿದ 15ಕ್ಕೂ ಹೆಚ್ಚು ವಿಶೇಷಚೇತನ ವಿದ್ಯಾರ್ಥಿಗಳು ಸೇರಿದಂತೆ ಹಲವರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ತಯಾರಿಸಿದ್ದ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಹಾಗೂ 8 ಮಂದಿ ಸಾರ್ವಜನಿಕರಿಗೆ ವಾಂತಿ, ಭೇದಿ ಸೇರಿದಂತೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ.
ಅಸ್ವಸ್ಥರಾದ ಎಲ್ಲರನ್ನೂ ತಕ್ಷಣವೇ ಭದ್ರಾವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ತಿಥಿ ಕಾರ್ಯಕ್ರಮದ ಊಟ ಸೇವಿಸಿದ್ದ ವಿದ್ಯಾರ್ಥಿಗಳು
ಭದ್ರಾವತಿಯ ವೇಲೂರು ಶೆಡ್ ಪ್ರದೇಶದ ಮನೆಯೊಂದರಲ್ಲಿ ತಿಥಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸಿದ್ದ ಆಹಾರವನ್ನು ನ್ಯೂಟೌನ್‌ನ ತರಂಗ ಕಿವುಡು ಮತ್ತು ಮೂಗರ ವಸತಿ ಶಾಲೆಯ ವಿದ್ಯಾರ್ಥಿಗಳು ಸೇವಿಸಿದ್ದರು.
ಊಟ ಮಾಡಿದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿಗಳಲ್ಲಿ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಯ ಸಿಬ್ಬಂದಿ ಹಾಗೂ ಸ್ಥಳೀಯರು ಅಸ್ವಸ್ಥರಾದವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸಾರ್ವಜನಿಕರಿಗೂ ಆರೋಗ್ಯದಲ್ಲಿ ಏರುಪೇರು
ವಿದ್ಯಾರ್ಥಿಗಳಷ್ಟೇ ಅಲ್ಲದೆ ಅದೇ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಮೃತರ ಕುಟುಂಬದ ಸಂಬಂಧಿಕರು ಹಾಗೂ ಸ್ಥಳೀಯರಲ್ಲೂ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಸುಮಾರು 7ರಿಂದ 8 ಮಂದಿ ಸಾರ್ವಜನಿಕರು ಕೂಡ ಅಸ್ವಸ್ಥರಾಗಿದ್ದು, ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ವೈದ್ಯರ ನಿಗಾದಲ್ಲಿ ವಿದ್ಯಾರ್ಥಿಗಳು
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ವಿಭಾಗದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ವಿದ್ಯಾರ್ಥಿಗಳು ವಿಶೇಷಚೇತನರಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಿದ್ದಾರೆ. ಮುಂದಿನ ಎರಡು-ಮೂರು ದಿನಗಳ ಕಾಲ ಅವರ ಆರೋಗ್ಯದ ಮೇಲೆ ನಿಗಾ ಇರಿಸಿ ಚಿಕಿತ್ಸೆ ಮುಂದುವರಿಸಲು ವೈದ್ಯಕೀಯ ಸಿಬ್ಬಂದಿ ನಿರ್ಧರಿಸಿದ್ದಾರೆ. ಸದ್ಯ ಯಾರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸುವ ಅಗತ್ಯ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ.
ಆಹಾರ ಸುರಕ್ಷತಾ ಅಧಿಕಾರಿಗಳಿಂದ ತನಿಖೆ
ಒಂದೇ ಕಾರ್ಯಕ್ರಮದಲ್ಲಿ ಊಟ ಸೇವಿಸಿದ ಹಲವು ಮಂದಿ ಏಕಕಾಲದಲ್ಲಿ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಆಹಾರ ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಆಹಾರ ತಯಾರಿಸುವ ಸಂದರ್ಭದಲ್ಲಿ ಸಮಸ್ಯೆಯಾಗಿತ್ತೇ? ಅಥವಾ ಕಾರ್ಯಕ್ರಮದ ಬಳಿಕ ಉಳಿದ ಆಹಾರವನ್ನು ಮತ್ತೆ ಸೇವನೆಗೆ ನೀಡಲಾಗಿತ್ತೇ? ಎಂಬುದು ಸೇರಿದಂತೆ ಹಲವು ಆಯಾಮಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ತಯಾರಿಸಲಾಗಿದ್ದ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷಾ ವರದಿ ಬಂದ ಬಳಿಕ ಆಹಾರ ವಿಷಬಾಧೆಗೆ ನಿಖರ ಕಾರಣ ಏನೆಂಬುದು ಸ್ಪಷ್ಟವಾಗಲಿದೆ.

