
ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ ಕೇಳಿಬಂದಿದೆ.
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಮೇಲೆ ಕಲ್ಲು ತೂರಾಟ ಆರೋಪ; ಭಟ್ಕಳದಲ್ಲಿ ಬಿಗಿ ಬಂದೋಬಸ್ತ್
ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ಅದರ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಕಟ್ಟಡದತ್ತ ಅಪರಿಚಿತರು ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಕಟ್ಟಡದ ಮೇಲೆ ಕಲ್ಲು ತೂರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬುಧವಾರ ರಾತ್ರಿ ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ಘಟನೆ ಬಳಿಕ ಭಟ್ಕಳದಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಭಟ್ಕಳ ತಾಲೂಕಿನ ತಲಾಂದ ಪ್ರದೇಶದಿಂದ ಗಣೇಶ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಆರಂಭವಾಗಿತ್ತು. ಗುಳ್ಮಿ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ಅದರ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಕಡೆಗೆ ಅಪರಿಚಿತರು ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ.
ಎರಡು ಕಿಟಕಿ ಗಾಜುಗಳಿಗೆ ಹಾನಿ
ಕಲ್ಲು ತೂರಾಟದಿಂದ ಮಸೀದಿ ಕಟ್ಟಡದ ಎರಡು ಕಿಟಕಿ ಗಾಜುಗಳು ಒಡೆದಿವೆ ಎಂದು ದೂರು ನೀಡಲಾಗಿದೆ. ಈ ಸಂಬಂಧ ಸ್ಥಳೀಯ ಅಬ್ದುಲ್ ಅಲಿಂ ಎಂಬವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.
ಪೊಲೀಸ್ ಠಾಣೆ ಎದುರು ಸ್ಥಳೀಯರ ಜಮಾವಣೆ
ಘಟನೆ ತಿಳಿದ ಬಳಿಕ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಮುಸ್ಲಿಂ ಸಮುದಾಯದ ಕೆಲವರು ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದರು. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸದಂತೆ ಪೊಲೀಸರು ಸ್ಥಳದಲ್ಲಿದ್ದವರೊಂದಿಗೆ ಮಾತುಕತೆ ನಡೆಸಿದರು.
ಸ್ಥಳಕ್ಕೆ ಎಸ್‌ಪಿ ಭೇಟಿ
ವಿಷಯ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಭಟ್ಕಳಕ್ಕೆ ತೆರಳಿ ಪರಿಸ್ಥಿತಿ ಪರಿಶೀಲಿಸಿದರು. ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ ಬಳಿಕ ಠಾಣೆ ಎದುರು ಸೇರಿದ್ದ ಜನರು ಸ್ಥಳದಿಂದ ತೆರಳಿದರು.
ಭಟ್ಕಳದಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆ
ಘಟನೆ ಹಿನ್ನೆಲೆಯಲ್ಲಿ ಭಟ್ಕಳದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟದ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಮಾಹಿತಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.
ಸದ್ಯ ಭಟ್ಕಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದ ಆರೋಪಗಳು ತನಿಖೆಯಲ್ಲಿರುವುದರಿಂದ ಅಂತಿಮವಾಗಿ ಕಲ್ಲುತೂರಾಟ ನಡೆಸಿದವರು ಯಾರು ಎಂಬುದು ಪೊಲೀಸ್ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.

