ಕರ್ತವ್ಯ ನಿರತ ಕಾನ್‌ಸ್ಟೆಬಲ್ ಮೇಲೆ ಹಲ್ಲೆ: ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಂಧನ
x

ಕರ್ತವ್ಯ ನಿರತ ಕಾನ್‌ಸ್ಟೆಬಲ್ ಮೇಲೆ ಹಲ್ಲೆ: ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಂಧನ

ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಆರೋಪದಡಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜಣ್ಣ ಅವರನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.


Click the Play button to hear this message in audio format

ಕರ್ತವ್ಯ ನಿರತ ಸಂಚಾರ ಪೊಲೀಸ್​​ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜಣ್ಣ ಅವರನ್ನು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ತಡರಾತ್ರಿ ಅವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ.

ಗೊಟ್ಟಿಗೆರೆ ಪ್ರದೇಶದಲ್ಲಿ ಸಂಚಾರ ನಿಯಂತ್ರಣಕ್ಕಾಗಿ ಹಲ್ಲೆಗೆ ಒಳಗಾದ ಕಾನ್‌ಸ್ಟೆಬಲ್ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಮಂಜಣ್ಣ ಅವರ ವಾಹನ ಅಲ್ಲಿಗೆ ಬಂದಿದ್ದು, ಸಂಚಾರ ನಿಯಂತ್ರಣದ ಭಾಗವಾಗಿ ಕಾನ್‌ಸ್ಟೆಬಲ್ ಹ್ಯಾಂಡ್ ಸಿಗ್ನಲ್ ನೀಡಿ ವಾಹನವನ್ನು ನಿಲ್ಲಿಸಿದ್ದಾರೆ ಎನ್ನಲಾಗಿದೆ. ವಾಹನವನ್ನು ನಿಲ್ಲಿಸಿದ ವಿಚಾರಕ್ಕೆ ಮಂಜಣ್ಣ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ, ‘ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ’ ಎಂದು ಪ್ರಶ್ನಿಸಿ ಕಾನ್‌ಸ್ಟೆಬಲ್ ಅವರ ಕೊರಳಪಟ್ಟಿ ಹಿಡಿದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​

ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವ್ಯಕ್ತಿಯೊಬ್ಬರು ವಾಗ್ವಾದ ನಡೆಸುತ್ತಿರುವುದು ಹಾಗೂ ಹಲ್ಲೆ ನಡೆಸಿರುವುದು ಕಂಡುಬರುತ್ತದೆ ಎಂದು ಮೂಲಗಳು ತಿಳಿಸಿವೆ. ವಿಡಿಯೊ ವೈರಲ್ ಆದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಘಟನೆಯ ಕುರಿತು ಪೊಲೀಸ್ ಸಿಬ್ಬಂದಿಯಿಂದ ದೂರು ಪಡೆದು, ಹಲ್ಲೆಯ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಂಜಣ್ಣ ಅವರ ಪತ್ತೆಗೆ ಮುಂದಾಗಿದ್ದರು. ಹಲ್ಲೆಯ ಬಳಿಕ ಅವರು ಸ್ಥಳದಿಂದ ತೆರಳಿದ್ದು, ಬಳಿಕ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

ತಡರಾತ್ರಿ ಬಂಧನ

ಮಂಜಣ್ಣ ಅವರು ಇರುವ ಸ್ಥಳದ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು, ಭಾನುವಾರ ತಡರಾತ್ರಿ ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ಠಾಣೆಗೆ ಕರೆತಂದು ಪ್ರಕರಣದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅಂಶಗಳ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Read More
Next Story