
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮೃತಪಟ್ಟಿದ್ದಾರೆ.
ಮಂಡ್ಯದಲ್ಲಿ ಭೀಕರ ಅಪಘಾತ; ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು
ಕಬ್ಬಿಣದ ಕಂಬಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಕೆಎಸ್‌ಆರ್‌ಟಿಸಿ ಬಸ್ ಹಿಂದಿಕ್ಕಲು ಮುಂದಾದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಅಪರಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿದೆ.
ಕಬ್ಬಿಣದ ಕಂಬಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಿಂದಿಕ್ಕಲು ಮುಂದಾದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ಎರಡೂ ವಾಹನಗಳ ನಡುವೆ ಡಿಕ್ಕಿಯಾಗಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಕಂಬಗಳು ಬಸ್‌ನೊಳಗೆ ನುಗ್ಗಿವೆ. ಡಿಕ್ಕಿಯ ತೀವ್ರತೆಗೆ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಲವು ಪ್ರಯಾಣಿಕರಿಗೆ ಗಾಯ
ಅಪಘಾತದಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಗಾಯಾಳುಗಳನ್ನು ತಕ್ಷಣವೇ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ.
ಸ್ಥಳಕ್ಕೆ ಪೊಲೀಸರ ಭೇಟಿ
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಹಾಗೂ ವಾಹನಗಳ ಚಲನೆಯ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

