
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ರ್ಯಾಗಿಂಗ್ ಆರೋಪ ಮತ್ತೆ ಬೆಳಕಿಗೆ ಬಂದಿದೆ.
ಮಂಗಳೂರಿನಲ್ಲಿ ರ‍್ಯಾಗಿಂಗ್ ಆರೋಪ; 6 ವಿದ್ಯಾರ್ಥಿಗಳು ವಶಕ್ಕೆ
ಕಪ್ಪು ಶೂ ಧರಿಸಿದ್ದ ವಿಚಾರಕ್ಕೆ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಆರು ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಮಂಗಳೂರಿನಲ್ಲಿ ಮತ್ತೊಮ್ಮೆ ರ‍್ಯಾಗಿಂಗ್ ಆರೋಪ ಕೇಳಿಬಂದಿದೆ. ಕಪ್ಪು ಬಣ್ಣದ ಶೂ ಧರಿಸಿ ಬಂದಿದ್ದ ವಿಚಾರಕ್ಕೆ ಸೀನಿಯರ್ ವಿದ್ಯಾರ್ಥಿಗಳು ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಘಟನೆ ಕಾಲೇಜು ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಾಯಗೊಂಡ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿಪ್ಲೊಮಾ ಮೊದಲ ವರ್ಷದ ವ್ಯಾಸಂಗ ಮಾಡುತ್ತಿರುವ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ನಗರದ ಗುಜ್ಜರಕೆರೆ ಪ್ರದೇಶದಲ್ಲಿ ಇದ್ದ ವೇಳೆ, ಅದೇ ಕಾಲೇಜಿನ ಕೆಲವು ಹಿರಿಯ ವಿದ್ಯಾರ್ಥಿಗಳು ಅವರನ್ನು ತಡೆದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಕಪ್ಪು ಶೂ ಧರಿಸಿದ್ದನ್ನು ನೆಪವನ್ನಾಗಿ ಮಾಡಿಕೊಂಡು ವಾಗ್ವಾದ ಆರಂಭಿಸಿದ ಬಳಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಹಲ್ಲೆಯಲ್ಲಿ ಆದರ್ಶ್ ಹಾಗೂ ಜಾಸೀನ್ ಖಾದರ್ ಎಂಬ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳ ಕುತ್ತಿಗೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಆರು ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು
ಘಟನೆ ಕುರಿತು ಮಾಹಿತಿ ಸಿಕ್ಕ ತಕ್ಷಣ ಪಾಂಡೇಶ್ವರ ಠಾಣೆ ಪೊಲೀಸರು ಕಾಲೇಜಿಗೆ ಭೇಟಿ ನೀಡಿ ತನಿಖೆ ನಡೆಸಿದರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ರ್ಯಾಗಿಂಗ್ ಕುರಿತು ಬೆಚ್ಚಿಬೀಳಿಸುವ ಆರೋಪ
ಗಾಯಗೊಂಡ ವಿದ್ಯಾರ್ಥಿಗಳು ರ‍್ಯಾಗಿಂಗ್ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕೆಲವು ಹಿರಿಯ ವಿದ್ಯಾರ್ಥಿಗಳು ಜೂನಿಯರ್‌ಗಳನ್ನು ತಮ್ಮ ವಾಸದ ಕೊಠಡಿಗಳಿಗೆ ಕರೆದುಕೊಂಡು ಹೋಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ಅವಮಾನಕರ ರೀತಿಯಲ್ಲಿ ವರ್ತಿಸಲು ಒತ್ತಾಯಿಸುವುದು, ಒಳಉಡುಪಿನಲ್ಲಿ ಕೂರಿಸುವುದು, ವಿಚಿತ್ರ ಮತ್ತು ಅಮಾನವೀಯ ಕೃತ್ಯಗಳನ್ನು ಮಾಡಿಸುವ ಮೂಲಕ ಮಾನಸಿಕ ಹಿಂಸೆ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಕೇರಳ ಮೂಲದ ವಿದ್ಯಾರ್ಥಿಗಳೇ ತಮ್ಮದೇ ರಾಜ್ಯದ ಜೂನಿಯರ್ ವಿದ್ಯಾರ್ಥಿಗಳಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಕಠಿಣ ಕ್ರಮಕ್ಕೆ ಒತ್ತಾಯ
ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಕಾಲೇಜುಗಳಲ್ಲಿ ರ‍್ಯಾಗಿಂಗ್ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪ್ರತಿ ಶಿಕ್ಷಣ ಸಂಸ್ಥೆಯಲ್ಲಿರುವ ಆ್ಯಂಟಿ-ರ‍್ಯಾಗಿಂಗ್ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದ್ದು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕಾಲೇಜು ಆಡಳಿತ ಮತ್ತು ಪೊಲೀಸರು ಸಮನ್ವಯದಿಂದ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

