
ಹೆತ್ಯೆಗೀಡಾಗಿದ್ದ ಪ್ರವೀಣ್ ನೆಟ್ಟಾರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಮರ್ ಫಾರೂಕ್‌ನನ್ನು ಎನ್‌ಐಎ ಕೊಚ್ಚಿಯಲ್ಲಿ ಬಂಧಿಸಿದೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್. ಅವರನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಲಾಗಿದೆ. ಈ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಎನ್‌ಐಎಗೆ ಲಭಿಸಿದ್ದ ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಬುಧವಾರ ಉಮರ್ ಫಾರೂಕ್‌ನನ್ನು ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ಧ ಈಗಾಗಲೇ ಜಾಮೀನು ರಹಿತ ವಾರಂಟ್ ಹಾಗೂ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿತ್ತು. ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ ಎನ್‌ಐಎ 4 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.
ಪಿಎಫ್‌ಐ ಪಿತೂರಿ ಸಭೆಯಲ್ಲಿ ಭಾಗಿಯಾಗಿದ್ದ ಆರೋಪ
ತನಿಖೆ ವೇಳೆ ಸಂಗ್ರಹಿಸಲಾದ ಮಾಹಿತಿಯ ಪ್ರಕಾರ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಸುಳ್ಯ ಕಚೇರಿಯಲ್ಲಿ ನಡೆದ ಪಿತೂರಿ ಸಭೆಯಲ್ಲಿ ಉಮರ್ ಫಾರೂಕ್ ಭಾಗವಹಿಸಿದ್ದಾನೆ ಎನ್ನಲಾಗಿದೆ. ಪ್ರವೀಣ್ ನೆಟ್ಟಾರು ಮೇಲೆ ದಾಳಿ ನಡೆಸುವ ಮುನ್ನ ಬೆಳ್ಳಾರೆ ಪ್ರದೇಶದಲ್ಲಿ ಸ್ಥಳ ಪರಿಶೀಲನೆ ನಡೆಸುವುದು ಹಾಗೂ ಸಹ ಆರೋಪಿಗಳಿಗೆ ತನ್ನ ಮೋಟಾರ್‌ಸೈಕಲ್ ಬಳಕೆ ಮಾಡಲು ಅವಕಾಶ ನೀಡಿದ್ದಾನೆ ಎಂಬ ಆರೋಪವೂ ಇದೆ.
ಸಾಕ್ಷಿಯ ಮೇಲೆ ದಾಳಿ ಯತ್ನದಲ್ಲೂ ಪಾತ್ರದ ಆರೋಪ
ಪ್ರಕರಣದ ಪ್ರಮುಖ ಸಾಕ್ಷಿಯನ್ನು ಹತ್ಯೆ ಮಾಡಲು ನಡೆದ ಯತ್ನದಲ್ಲಿಯೂ ಉಮರ್ ಫಾರೂಕ್ ಇತರ ಆರೋಪಿಗಳೊಂದಿಗೆ ಕೈಜೋಡಿಸಿದ್ದಾನೆ ಎಂಬ ಆರೋಪ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಎನ್‌ಐಎ ಆರೋಪಪಟ್ಟಿ ಸಲ್ಲಿಸಿದೆ.
ಇತ್ತೀಚೆಗೆ ಮತ್ತಿಬ್ಬರು ಆರೋಪಿಗಳ ಬಂಧನ
ಇದಕ್ಕೂ ಮುನ್ನ ಇದೇ ವರ್ಷದ ಜುಲೈ ತಿಂಗಳಲ್ಲಿ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಬ್ದುಲ್ ನಾಸಿರ್ ಮತ್ತು ನೌಶಾದ್ ಎಂಬ ಇಬ್ಬರು ಆರೋಪಿಗಳನ್ನು ಕ್ರಮವಾಗಿ ಕೇರಳದ ಕೊಚ್ಚಿ ಮತ್ತು ತಮಿಳುನಾಡಿನ ಹೊಸೂರಿನಲ್ಲಿ ಎನ್‌ಐಎ ಬಂಧಿಸಿತ್ತು. ಆಂಧ್ರಪ್ರದೇಶ ಪೊಲೀಸರಿಂದ ದೊರೆತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ಯಶಸ್ವಿಯಾಗಿತ್ತು.
2022ರಲ್ಲಿ ನಡೆದಿದ್ದ ಪ್ರವೀಣ್ ನೆಟ್ಟಾರು ಹತ್ಯೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು 2022ರ ಜುಲೈ 26ರಂದು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ನಂತರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿತ್ತು. ತನಿಖೆ ಮುಂದುವರಿದಿರುವ ನಡುವೆ ಮತ್ತೊಬ್ಬ ಪ್ರಮುಖ ಆರೋಪಿಯ ಬಂಧನವು ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

