
ಯಾದಗಿರಿಯ ಸುರಪುರ ಬಳಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಜೀವ ದಹನವಾಗಿದ್ದಾರೆ.
Yadgiri Accident| ಕಾರು-ಬಸ್ ನಡುವೆ ಭೀಕರ ರಸ್ತೆ ಅಪಘಾತ: ಮಕ್ಕಳು ಸೇರಿ ಆರು ಮಂದಿ ಸಜೀವ ದಹನ
ಯಾದಗಿರಿಯ ಸುರಪುರ ಬಳಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಜೀವ ದಹನವಾಗಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ವಿಆರ್‌ಎಲ್ ಸಂಸ್ಥೆಯ ಖಾಸಗಿ ಬಸ್ ಮತ್ತು ಯಾದಗಿರಿಯಿಂದ ಲಿಂಗಸಗೂರಿನತ್ತ ಹೊರಟಿದ್ದ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಡಿಕ್ಕಿಯಾದ ತಕ್ಷಣವೇ ಎರಡೂ ವಾಹನಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದರಿಂದ ಬಾಗಿಲುಗಳು ಲಾಕ್ ಆಗಿದ್ದವು. ಇದರಿಂದಾಗಿ ಒಳಗಿದ್ದವರಿಗೆ ಹೊರಬರಲು ಸಾಧ್ಯವಾಗದೆ ಕಾರಿನೊಳಗೆ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರು ಮತ್ತು ಬಸ್ಸಿಗೆ ತಗುಲಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಅಷ್ಟರಲ್ಲಾಗಲೇ ಕಾರಿನಲ್ಲಿದ್ದ ಆರೂ ಮಂದಿ ಸುಟ್ಟು ಕರಕಲಾಗಿದ್ದರು. ಇನ್ನೊಂದೆಡೆ, ಖಾಸಗಿ ಬಸ್ಸಿನಲ್ಲಿದ್ದ ಸುಮಾರು 40 ಪ್ರಯಾಣಿಕರ ಪೈಕಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.

