
ಕೆಎಸ್‌ಆರ್‌ಟಿಸಿ ಬಸ್ ಹರಿದು ಇಬ್ಬರು ಮೃತಪಟ್ಟಿದ್ದಾರೆ.
ಭೀಕರ ರಸ್ತೆ ಅಪಘಾತ: ಎರಡು ಬೈಕ್‌ಗಳ ಡಿಕ್ಕಿ, ಇಬ್ಬರ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್
ಮೃತರು ರಾಜಸ್ಥಾನ ಮೂಲದವರು ಎನ್ನಲಾಗಿದ್ದು, ಅವರ ಹೆಸರು ಮತ್ತು ವಿಳಾಸ ಇನ್ನೂ ಖಚಿತವಾಗಿಲ್ಲ. ಡಿಕ್ಕಿಯಾಗಿದ್ದ ಮತ್ತೊಂದು ಬೈಕ್‌ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾದ ಬಳಿಕ ಸವಾರರು ರಸ್ತೆಗೆ ಬಿದ್ದಿದ್ದು, ಅದೇ ವೇಳೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಅವರ ಮೇಲೆ ಹರಿದಿದೆ.
ಕಡೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ನಡುವೆ ಹಳೇಹಟ್ಟಿ ಗೇಟ್ ಬಳಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಅವರನ್ನು ತಪ್ಪಿಸಲು ಸಾಧ್ಯವಾಗದೆ ಅವರ ಮೇಲೆ ಹರಿದಿದೆ ಎಂದು ವರದಿಯಾಗಿದೆ.
ತೀವ್ರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ರಾಜಸ್ಥಾನ ಮೂಲದವರು ಎನ್ನಲಾಗಿದ್ದು, ಅವರ ಹೆಸರು ಮತ್ತು ವಿಳಾಸ ಇನ್ನೂ ಖಚಿತವಾಗಿಲ್ಲ. ಪೊಲೀಸರು ಗುರುತು ಪತ್ತೆಹಚ್ಚಲು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಪಘಾತಗೊಂಡಿದ್ದ ಮತ್ತೊಂದು ಬೈಕ್‌ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸಖರಾಯಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ತನಿಖೆ ಮುಂದುವರಿದಿದೆ.

