ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ಏನಾಗುತ್ತೆ? ತೀರ್ಪು ಕಾಯ್ದಿರಿಸಿದ ಹೈಕೋರ್ಟ್!
x

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ಏನಾಗುತ್ತೆ? ತೀರ್ಪು ಕಾಯ್ದಿರಿಸಿದ ಹೈಕೋರ್ಟ್!

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಮೇಲಿನ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.


ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ರಾಜಕೀಯ ಹಾಗೂ ಜಾಮೀನಿನ ಭವಿಷ್ಯ ಸದ್ಯ ಹೈಕೋರ್ಟ್ ಅಂಗಳ ತಲುಪಿದೆ. ತಮಗೆ ವಿಧಿಸಿರುವ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹಾಗೂ ಜಾಮೀನು ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯ ವಿರುದ್ಧ ವಿನಯ್ ಕುಲಕರ್ಣಿ ಸಲ್ಲಿಸಿರುವ ಈ ಮೇಲ್ಮನವಿಯ ಪರ-ವಿರೋಧ ವಾದ-ಪ್ರತಿವಾದಗಳು ಈಗಾಗಲೇ ಪೂರ್ಣಗೊಂಡಿವೆ. ಹೈಕೋರ್ಟ್‌ನ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಪ್ರಮುಖ ತೀರ್ಪನ್ನು ಕಾಯ್ದಿರಿಸಿದ್ದು, ಇಡೀ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಶಿಕ್ಷೆಗೆ ತಡೆ ನೀಡಿದರೆ ಶಾಸಕ ಸ್ಥಾನ ಮರಳುತ್ತಾ?

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಕೂಡ ಅನರ್ಹಗೊಂಡಿತ್ತು. ಸುಪ್ರೀಂ ಕೋರ್ಟ್ ನಿಯಮಾವಳಿಗಳ ಪ್ರಕಾರ, ಯಾವುದೇ ಜನಪ್ರತಿನಿಧಿಗೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಶಿಕ್ಷೆಯಾದರೆ ಅವರ ಶಾಸಕ ಸ್ಥಾನ ತಕ್ಷಣವೇ ರದ್ದಾಗುತ್ತದೆ.

ಹೀಗಾಗಿ, ವಿನಯ್ ಕುಲಕರ್ಣಿ ತಮಗೆ ವಿಧಿಸಿರುವ ಶಿಕ್ಷೆಗೆ ತಡೆಯಾಜ್ಞೆ ಹಾಗೂ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಒಂದು ವೇಳೆ ಹೈಕೋರ್ಟ್ ಈ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ ಮಾತ್ರ ವಿನಯ್ ಕುಲಕರ್ಣಿ ಅವರಿಗೆ ಶಾಸಕ ಸ್ಥಾನ ಮರಳುವ ಸಾಧ್ಯತೆಯಿದೆ. ಇಲ್ಲದಿದ್ದರೆ ಅವರಿಗೆ ಮತ್ತಷ್ಟು ದಿನಗಳ ಕಾಲ ಜೈಲು ವಾಸ ಹಾಗೂ ರಾಜಕೀಯ ಹಿನ್ನಡೆ ಅನಿವಾರ್ಯವಾಗಲಿದೆ.

ಏನಿದು ಪ್ರಕರಣ?

ಪ್ರಕರಣದ ಹಿನ್ನೆಲೆಯನ್ನು ನೋಡುವುದಾದರೆ, 2016ರ ಜೂನ್ ತಿಂಗಳಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರೂ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಹೈಪ್ರೊಫೈಲ್ ಪ್ರಕರಣವನ್ನು ಸಿಬಿಐಗೆ (CBI) ವಹಿಸಲಾಗಿತ್ತು. ಪ್ರಕರಣದ ಆಳಕ್ಕಿಳಿದು ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು.

16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಸುದೀರ್ಘ ವಿಚಾರಣೆಯ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿತ್ತು. ಪ್ರಕರಣದ ಇಬ್ಬರು ಆರೋಪಿಗಳಾದ ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿ ಅವರನ್ನು ನ್ಯಾಯಾಲಯ ನಿರ್ದೋಷಿ ಎಂದು ಖುಲಾಸೆಗೊಳಿಸಿತ್ತು.

ಆದರೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಇದರೊಂದಿಗೆ ಕೊಲೆಗೆ ಸಾಕ್ಷ್ಯ ನಾಶಪಡಿಸಲು ಹಾಗೂ ತನಿಖೆ ಹಾದಿ ತಪ್ಪಿಸಲು ಯತ್ನಿಸಿದ ಆರೋಪದ ಮೇಲೆ ಪೊಲೀಸ್ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಗರಿಕರ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಪ್ರಸ್ತುತ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಅಪರಾಧಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದ್ದು, ಶಾಸಕ ಸ್ಥಾನ ಮತ್ತು ಮುಕ್ತಿಗಾಗಿ ಹೈಕೋರ್ಟ್ ಆದೇಶದ ಮೇಲೆ ವಿನಯ್ ಕುಲಕರ್ಣಿ ಕಣ್ಣಿಟ್ಟಿದ್ದಾರೆ.

Read More
Next Story