
ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಮಲೆನಾಡು ಸೇರಿದಂತೆ ಒಳನಾಡಿನ ವಿವಿಧ ಭಾಗಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ಕರ್ನಾಟಕ ಮಳೆ| ಕರಾವಳಿಯ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಮಲೆನಾಡು ಸೇರಿದಂತೆ ಒಳನಾಡಿನ ವಿವಿಧ ಭಾಗಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೊಮ್ಮೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಮಲೆನಾಡು ಸೇರಿದಂತೆ ವಿವಿಧ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿಯ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಕೆಲವು ದಿನಗಳ ಕಾಲ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಶುಕ್ರವಾರದಂದು ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗಲಿದ್ದು, ಜೂನ್ 27 ಮತ್ತು 28 ರವರೆಗೆ ಬಿಡುವಿಲ್ಲದೆ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಮತ್ತು ದಿಢೀರ್ ಪ್ರವಾಹ ಉಂಟಾಗುವ ಭೀತಿ ಇರುವುದರಿಂದ ಸ್ಥಳೀಯರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಯಾವುದೇ ಕಾರಣಕ್ಕೂ ಕಡಲಿಗೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ಮಲೆನಾಡು ಮತ್ತು ಒಳನಾಡಿನ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿಯೂ ಮುಂಗಾರು ಮಳೆ ಚುರುಕಾಗಲಿದ್ದು, ಇಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 25 ರಿಂದ ಈ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರಗೊಳ್ಳಲಿದ್ದು, ನಿರಂತರವಾಗಿ ಜಿಟಿಜಿಟಿ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ ಉತ್ತರ ಕರ್ನಾಟಕದ ರಾಯಚೂರು, ಬಿದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಮೈಸೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು ಮತ್ತು ಕರಾವಳಿ ಭಾಗಕ್ಕೆ ಪ್ರಯಾಣಿಸುವ ವಾಹನ ಸವಾರರು ಹಾಗೂ ಪ್ರವಾಸಿಗರು ಹವಾಮಾನ ಮುನ್ಸೂಚನೆ ಗಮನಿಸಿ ಪ್ರಯಾಣ ಬೆಳೆಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

