
ಸಾಂದರ್ಭಿಕ ಚಿತ್ರ (ಎಐ ಆಧಾರಿತ)
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸಿದ್ದತೆ!
ಖಾಯಂ ಶಿಕ್ಷಕರು ಭರ್ತಿಯಾಗುವವರೆಗೆ ಅಥವಾ 2026-27ನೇ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಅನ್ವಯವಾಗಲಿದೆ. ಮೇ 20 ರಂದು ಆರ್ಥಿಕ ಇಲಾಖೆಯು ನೀಡಿದ ಸಹಮತಿಯ ಮೇರೆಗೆ ಈ ಆದೇಶವನ್ನು ಹೊರಡಿಸಲಾಗಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ಸಾಲಿಗೆ ಒಟ್ಟು 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಮಂಜೂರಾತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ.
ಜೂನ್ ಆರಂಭದಲ್ಲಿ ಶಾಲೆಗಳು ಆರಂಭವಾಗುತ್ತಿರುವುದರಿಂದ, ಶಾಲಾ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಬೋಧನಾ ಪ್ರಕ್ರಿಯೆ ಸುಲಲಿತವಾಗಿ ಸಿಗಬೇಕು ಎನ್ನುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ತಕ್ಷಣವೇ ಸ್ಪಂದಿಸಿದ್ದು, ತಾತ್ಕಾಲಿಕ ನೇಮಕಕ್ಕೆ ಅನುಮತಿ ನೀಡಿದೆ.
ಷರತ್ತುಗಳೇನು ?
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 40,000 ಹುದ್ದೆಗಳು ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 11,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ. ಖಾಯಂ ಶಿಕ್ಷಕರು ಭರ್ತಿಯಾಗುವವರೆಗೆ ಅಥವಾ 2026-27ನೇ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಅನ್ವಯವಾಗಲಿದೆ. ಮೇ 20 ರಂದು ಆರ್ಥಿಕ ಇಲಾಖೆಯು ನೀಡಿದ ಸಹಮತಿಯ ಮೇರೆಗೆ ಈ ಆದೇಶವನ್ನು ಹೊರಡಿಸಲಾಗಿದೆ.
ಜಿಲ್ಲಾವಾರು ವಿವರಕ್ಕೆ ಸೂಚನೆ
ನೇಮಕಗೊಳ್ಳಲಿರುವ 51,000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅಗತ್ಯವಿರುವ ಅನುದಾನ ಹಾಗೂ ಜಿಲ್ಲಾ ಮತ್ತು ತಾಲ್ಲೂಕುವಾರು ಹುದ್ದೆಗಳ ಸಂಪೂರ್ಣ ವಿವರಗಳೊಂದಿಗೆ ತಕ್ಷಣವೇ ಪ್ರಸ್ತಾವನೆ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸರ್ಕಾರ ಸೂಚನೆ ನೀಡಿದೆ. ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಸುಮಾರು 61 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 49,729 ಹುದ್ದೆಗಳು ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಒಟ್ಟು 11,796 ಹುದ್ದೆಗಳು ಖಾಲಿ ಇವೆ. ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಒಳಗೊಂಡಂತೆ ಒಟ್ಟು ಮಂಜೂರಾದ ಶಿಕ್ಷಕರ ಹುದ್ದೆಗಳ ಸಂಖ್ಯೆ ಸುಮಾರು 2.5 ಲಕ್ಷಕ್ಕೂ ಹೆಚ್ಚಿದೆ. ಇದರಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಖಾಯಂ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಹುದ್ದೆಗಳು ಖಾಲಿ ಉಳಿದಿವೆ.
ಹೊಸ ನೇಮಕಕ್ಕೆ ಸಿದ್ಧತೆ
ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಠಿಯಿಂದ ರಾಜ್ಯ ಸರ್ಕಾರವು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 61,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಪೈಕಿ 15,000 ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.

