
ಸಾಂದರ್ಭಿಕ ಚಿತ್ರ (ಎಐ ಆಧಾರಿತ)
Job News| ಕೆಇಎ ಗ್ರೂಪ್-ಸಿ ಹುದ್ದೆಗಳ ನೇಮಕಾತಿ; ಪದವಿ, ಪಿಯುಸಿ ಆಗಿದ್ದವರು ಇಂದೇ ಅರ್ಜಿ ಸಲ್ಲಿಸಿ!
ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 750 ರೂ. ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ. ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಸಿಬ್ಬಂದಿ ಕೊರತೆಯನ್ನು ನೀಗಿಸುವ ಗುರಿಯನ್ನು ಹೊಂದಿದೆ.
ಒಟ್ಟು 6 ಹುದ್ದೆಗಳು ಭರ್ತಿಯಾಗಲಿದ್ದು, ಅವುಗಳಲ್ಲಿ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ಸೇರಿವೆ. ಎಫ್‌ಡಿಎ ಹುದ್ದೆಗಳಿಗೆ 44,425 ರೂ. ಮೂಲ ವೇತನವಿದ್ದು, ಎಸ್‌ಡಿಎ ಹುದ್ದೆಗಳಿಗೆ 34,100 ರೂ. ಮಾಸಿಕ ಮೂಲ ವೇತನ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ
ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಾನೂನು ರಿತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಯುಜಿಸಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಡೆದ ಪದವಿಗಳನ್ನು ಪರಿಗಣಿಸಲಾಗುವುದು. ದೂರ ಶಿಕ್ಷಣದ ಮೂಲಕ ಪಡೆದ ಪದವಿಗಳ ಬಗ್ಗೆ ಉದ್ಯೋಗ ನೀಡುವ ಪ್ರಾಧಿಕಾರವು ತೀರ್ಮಾನ ಕೈಗೊಳ್ಳಲಿದೆ. ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಿಬಿಎಸ್‌ಇ ಮತ್ತು ಐಸಿಎಸ್‌ಸಿ ಮಂಡಳಿಗಳ 12ನೇ ತರಗತಿ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್ ಅನ್ನು ಪರಿಗಣಿಸಲಾಗುತ್ತದೆ.
ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳು ನಿಗದಿಪಡಿಸಲಾಗಿದ್ದು, ಸರ್ಕಾರಿ ಆದೇಶದಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಕೆ ವಿಧಾನ
ಅಭ್ಯರ್ಥಿಗಳು ಆನ್‌ಲೈನ್ ಮೂಲಕ https://cetonline.karnataka.gov.in/kea/ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನಾಂಕವಾಗಿದ್ದು, ಶುಲ್ಕವನ್ನು ಪಾವತಿ ಮಾಡಲು ಜೂ. 4 ಕೊನೆಯ ದಿನಾಂಕವಾಗಿದೆ.
ಶುಲ್ಕದ ವಿವರ
ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 750 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳಿಗೆ 500 ರೂ. ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಪರೀಕ್ಷಾ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ನಡೆಸಲಾಗುವುದು. ಪರೀಕ್ಷೆಗಳನ್ನು ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಿದ್ದು, ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸುವ ಅಧಿಕಾರವನ್ನು ಪ್ರಾಧಿಕಾರವು ಹೊಂದಿದೆ. ಅಭ್ಯರ್ಥಿಗಳಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು. ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸಿದವರಿಗೆ ವಿನಾಯಿತಿ ನೀಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

