
ಸಾಂದರ್ಭಿಕ ಚಿತ್ರ
Job News | ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ್ದೀರಾ ? 731 ಗ್ರೂಪ್ ʼಸಿʼ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ!
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಕೌಶಲ್ಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೂಪ್ 'ಸಿ' ಮತ್ತು ಗ್ರೂಪ್ 'ಡಿ' ಹುದ್ದೆಗಳನ್ನು ಭರ್ತಿ ಮಾಡಲು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದೆ.
ಒಟ್ಟು 731 ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದು ಅಖಿಲ ಭಾರತ ಮಟ್ಟದ ಉದ್ಯೋಗ ಅವಕಾಶವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 12ನೇ ತರಗತಿ ಪೂರ್ಣಗೊಳಿಸಿರಬೇಕು ಎಂದು ಎಸ್‌ಎಸ್‌ಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆ.1 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ರಿಂದ ಗರಿಷ್ಠ 30 ವರ್ಷದೊಳಗಿರಬೇಕು. ಮೀಸಲಾತಿ ನಿಯಮದಂತೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಮಹಿಳಾ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಶುಲ್ಕ ಅನ್ವಯಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹಣ ಪಾವತಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಕೌಶಲ್ಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಒಟ್ಟು 200 ಅಂಕಗಳನ್ನು ಹೊಂದಿರಲಿದ್ದು, ತಪ್ಪು ಉತ್ತರಗಳಿಗೆ ತಲಾ 0.50 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ ?
ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ. ʼಸ್ಟೆನೋಗ್ರಾಫರ್ ಗ್ರೂಪ್ ಸಿ, ಡಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿʼ ಲಿಂಕ್ ಅನ್ನು ಕ್ಲಿಕ್ ಮಾಡಿ.
ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ. ನಿಮ್ಮ ಇತ್ತೀಚಿನ ಭಾವಚಿತ್ರ, ಅಗತ್ಯ ಪ್ರಮಾಣಪತ್ರಗಳು, ಸ್ಕ್ಯಾನ್ ಮಾಡಿದ ದಾಖಲೆಗಳ ಪ್ರತಿಗಳನ್ನು ಅಪ್‌ಲೋಡ್ ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. ಕೊನೆಯದಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್‌ಮಿಟ್ ಬಟನ್ ಕ್ಲಿಕ್ ಮಾಡುವಂತೆ ಎಸ್‌ಎಸ್‌ಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು, ಅರ್ಜಿ ತಿದ್ದುಪಡಿಗಾಗಿ ಮೇ 20 ಹಾಗೂ 21 ರಂದು ಕಾಲಾವಕಾಶ ನೀಡಿದೆ.

