
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಜಮ್ಮು- ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಎನ್‌ಕೌಂಟರ್
ಗುರುವಾರ ಮುಂಜಾನೆ ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಇಬ್ಬರು ಉಗ್ರರ ಮೃತದೇಹಗಳು ಪತ್ತೆಯಾಗಿವೆ. ಅವರು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಬುಧವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದವರಿರಬಹುದು ಎಂದು ಶಂಕಿಸಲಾಗಿರುವ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಉಧಂಪುರದ ಸೋಹನ್ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನದ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ರಾಷ್ಟ್ರೀಯ ರೈಫಲ್ಸ್, ಪ್ಯಾರಾ (ಸ್ಪೆಷಲ್ ಫೋರ್ಸಸ್) ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ.
ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ
ಗುರುವಾರ ಮುಂಜಾನೆ ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಇಬ್ಬರು ಉಗ್ರರ ಮೃತದೇಹಗಳು ಪತ್ತೆಯಾಗಿವೆ. ಅವರು ವಿದೇಶಿಯರು ಮತ್ತು ಜೈಷ್-ಎ-ಮೊಹಮ್ಮದ್‌ಗೆ ಸೇರಿದವರಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಮೃತರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರ ಗುರುತು ಹಾಗೂ ಇತರ ವಿವರಗಳ ಕುರಿತು ತನಿಖೆ ಮುಂದುವರಿದಿದೆ.
ಇತ್ತೀಚೆಗಷ್ಟೇ ಲಷ್ಕರ್ ಕಮಾಂಡರ್ ಹತ್ಯೆ
ಉಧಂಪುರದ ಈ ಎನ್‌ಕೌಂಟರ್‌ಗೆ ಮುನ್ನ ಸೆಪ್ಟೆಂಬರ್ 5ರಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಕಮಾಂಡರ್ ಯಾಸಿರ್ ಹತನಾಗಿದ್ದ. ಭದ್ರತಾ ಸಂಸ್ಥೆಗಳು ಆತನ ಚಲನವಲನದ ಮೇಲೆ ನಿಗಾ ಇರಿಸಿದ್ದವು ಎಂದು ವರದಿ ತಿಳಿಸಿದೆ.

