
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದೆ.
34ನೇ ದಿನಕ್ಕೆ ಕಾಲಿಟ್ಟ ಸಿಜೆಪಿ ಪ್ರತಿಭಟನೆ; ಜಂತರ್ ಮಂತರ್‌ನಲ್ಲಿ ಇಂಟರ್ನೆಟ್ ಸ್ಥಗಿತ ಆರೋಪ
ಜುಲೈ 20ರಂದು ನಡೆದ ‘ಸಂಸದ್ ಚಲೋ’ ಮೆರವಣಿಗೆಯ ಬಳಿಕವೂ ಸಿಜೆಪಿ ಬೆಂಬಲಿಗರು ಜಂತರ್ ಮಂತರ್‌ನಲ್ಲಿ ಮೂರನೇ ದಿನವೂ ಧರಣಿ ಮುಂದುವರಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆ ಗುರುವಾರ (ಜುಲೈ 23) 34ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಬುಧವಾರ ರಾತ್ರಿ ಜಂತರ್ ಮಂತರ್ ಸುತ್ತಮುತ್ತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಜೆಪಿ ಆರೋಪಿಸಿದ್ದು, ಸರ್ಕಾರ ಮತ್ತೊಮ್ಮೆ ಪ್ರತಿಭಟನಾಕಾರರ ಮೇಲೆ ಪೊಲೀಸ್ ದಮನಕ್ಕೆ ಸಿದ್ಧತೆ ನಡೆಸುತ್ತಿದೆಯೇ ಎಂದು ಪ್ರಶ್ನಿಸಿದೆ.
ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಜಂತರ್ ಮಂತರ್‌ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಸರ್ಕಾರ ಮತ್ತೊಮ್ಮೆ ಕ್ರೂರ ದಮನಕ್ಕೆ ಮುಂದಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ ಪ್ರತಿಭಟನಾ ಸ್ಥಳದಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಹಾಗೂ ಅರೆಸೈನಿಕ ಪಡೆಗಳಿಗೆ ಮನವಿ ಮಾಡಿದ ಅವರು, ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಅಕ್ರಮ ಆದೇಶಗಳನ್ನು ಪಾಲಿಸಬೇಡಿ. ಜನರ ಪರ ನಿಲ್ಲುತ್ತೀರಾ ಅಥವಾ ಸರ್ವಾಧಿಕಾರಿ ಧೋರಣೆಯ ಪರ ನಿಲ್ಲುತ್ತೀರಾ ಎಂಬುದು ನಿಮ್ಮ ಪರೀಕ್ಷೆಯಾಗಿದೆ ಎಂದು ಹೇಳಿದ್ದಾರೆ.
ಸಿಜೆಪಿ ವಕ್ತಾರ ಸೌರವ್ ದಾಸ್ ಕೂಡ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಶಾಂತಿಯುತ ಪ್ರತಿಭಟನಾಕಾರರ ಮೇಲೆ ದಮನ ನಡೆಸುವ ಅಪಾಯವನ್ನು ಸರ್ಕಾರ ಕೈಗೊಳ್ಳಬಾರದು. ಪ್ರತಿಭಟನೆಯನ್ನು ನಿರ್ಲಕ್ಷಿಸುವುದರಿಂದ ಸರ್ಕಾರವೇ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಜುಲೈ 20ರಂದು ನಡೆದ ‘ಸಂಸದ್ ಚಲೋ’ ಮೆರವಣಿಗೆಯ ಬಳಿಕವೂ ಸಿಜೆಪಿ ಬೆಂಬಲಿಗರು ಜಂತರ್ ಮಂತರ್‌ನಲ್ಲಿ ಮೂರನೇ ದಿನವೂ ಧರಣಿ ಮುಂದುವರಿಸಿದ್ದಾರೆ. ಸಂಸತ್ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗ ಮಾಡಿದ್ದರು. ಈ ವೇಳೆ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂದು ಸಿಜೆಪಿ ಆರೋಪಿಸಿದೆ. ಆದರೆ ಭದ್ರತಾ ವ್ಯವಸ್ಥೆಯನ್ನು ಉಲ್ಲಂಘಿಸಲು ಪ್ರತಿಭಟನಾಕಾರರು ಯತ್ನಿಸಿದ್ದರಿಂದ ಕ್ರಮ ಕೈಗೊಳ್ಳಬೇಕಾಯಿತು ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಇನ್ನೊಂದೆಡೆ, ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ರಾಹುಲ್ ಗಾಂಧಿ ವಿರುದ್ಧ ನಡೆಸಿದ ವಾಗ್ದಾಳಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಮಾಡಿದ್ದ ಆರೋಪಗಳಿಗೆ ಉತ್ತರಿಸಲು ನಡ್ಡಾ ನಡೆಸಿದ ಸುದ್ದಿಗೋಷ್ಠಿ ಕೇವಲ ವಿಷಯಾಂತರದ ಪ್ರಯತ್ನವಾಗಿದ್ದು, ಇದು ಕೇಂದ್ರ ಸರ್ಕಾರದ ಹೆಚ್ಚುತ್ತಿರುವ ಆತಂಕದ ಸಂಕೇತ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಜೈರಾಮ್ ರಮೇಶ್, ನಡ್ಡಾ ಅವರು ಬಾಲಿಶ ಆರೋಪಗಳನ್ನು ಮಾಡುವುದನ್ನು ಬಿಟ್ಟು ಮೊದಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವೈಫಲ್ಯಗಳನ್ನು ಒಪ್ಪಿಕೊಳ್ಳಬೇಕು ಎಂದು ಟೀಕಿಸಿದ್ದಾರೆ.

