x

Cockroach Protest|ಸಂಸತ್‌ ಮುತ್ತಿಗೆ: ದೆಹಲಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ; ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್

ಸಂಸತ್ತಿನ ಮುಂಗಾರು ಅಧಿವೇಶನವು ಆರಂಭವಾದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ರಾಜಕೀಯ ಕೋಲಾಹಲ ಉಂಟಾಗಿದೆ.


Click the Play button to hear this message in audio format

ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ರಾಜಧಾನಿ ದೆಹಲಿಯಲ್ಲಿ 'ಸಂಸತ್ ಚಲೋ' ಪ್ರತಿಭಟನೆ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು. ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮ ಆರೋಪ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಇದೇ ವೇಳೆ, ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಕೇಂದ್ರ ಸರ್ಕಾರವು ಸಿಜೆಪಿ ನಾಯಕರೊಂದಿಗೆ ಮಾತುಕತೆಗೆ ಮುಂದಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಸಿಜೆಪಿ ಪ್ರತಿನಿಧಿಗಳು ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಸಾವಿರಾರು ಪ್ರತಿಭಟನಾಕಾರರು

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ನೀಟ್ ಪರೀಕ್ಷೆಯ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಎಂಬ ಬೇಡಿಕೆಗಳೊಂದಿಗೆ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಕಳೆದ ಹಲವು ದಿನಗಳಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಮವಾರ ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಪ್ರತಿಭಟನಾಕಾರರು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನೂಕಾಟ-ತಳ್ಳಾಟ ನಡೆಯಿತು. ನಂತರ ಪೊಲೀಸರು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಲು ಕ್ರಮ ಕೈಗೊಂಡರು.

ನಿಷೇಧಾಜ್ಞೆ ನಡುವೆಯೂ ಮೆರವಣಿಗೆ ಯತ್ನ

'ಸಂಸತ್ ಚಲೋ' ಮೆರವಣಿಗೆಗೆ ಯಾವುದೇ ಅನುಮತಿ ನೀಡಿಲ್ಲ ಎಂದು ದೆಹಲಿ ಪೊಲೀಸರು ಈಗಾಗಲೇ ಸ್ಪಷ್ಟಪಡಿಸಿದ್ದರು. ನವದೆಹಲಿ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 163ರಡಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಮೆರವಣಿಗೆ ಅಥವಾ ಪ್ರತಿಭಟನೆ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪರಿಸ್ಥಿತಿ ಹದಗೆಡುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ದೆಹಲಿಯ ಕೆಲ ಪ್ರದೇಶಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ಐದು ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

ಭದ್ರತಾ ಕಾರಣಗಳಿಂದ ರಾಜೀವ್ ಚೌಕ್, ಜನಪಥ್, ಪಟೇಲ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಹಾಗೂ ಸೇವಾ ತೀರ್ಥ ಸೇರಿದಂತೆ ಐದು ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು.

ಇದರಿಂದ ಕಚೇರಿಗೆ ತೆರಳುತ್ತಿದ್ದ ಉದ್ಯೋಗಿಗಳು ಹಾಗೂ ಸಾವಿರಾರು ಪ್ರಯಾಣಿಕರು ಪರದಾಡಬೇಕಾಯಿತು. ವಿಶೇಷವಾಗಿ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಶಾಂತಿಯುತ ಪ್ರತಿಭಟನೆಗೆ ಸಿಜೆಪಿ ಮನವಿ

ಪ್ರತಿಭಟನೆಯ ನಡುವೆ ಸಿಜೆಪಿ ನಾಯಕರು ಕಾರ್ಯಕರ್ತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

"ಪೊಲೀಸರು ಎಲ್ಲೇ ತಡೆದರೂ ಶಾಂತಿ ಕಾಪಾಡಿ. ನಮ್ಮ ಹೋರಾಟ ಅಹಿಂಸೆಯ ಮಾರ್ಗದಲ್ಲಿಯೇ ಮುಂದುವರಿಯಲಿದೆ" ಎಂದು ಪಕ್ಷದ ನಾಯಕರು ಸಾಮಾಜಿಕ ಜಾಲತಾಣಗಳ ಮೂಲಕ ಕರೆ ನೀಡಿದರು.

ಜೆ.ಪಿ. ನಡ್ಡಾ ಜೊತೆ ಮಾತುಕತೆ

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಿದೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ.

ತಾವು ಹಾಗೂ ಅಶುತೋಷ್ ರಾಂಕಾ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಬೇಡಿಕೆಗಳ ಕುರಿತು ಚರ್ಚೆ ನಡೆಸಲಿದ್ದೇವೆ ಎಂದು ಅವರು ಎಕ್ಸ್‌ನಲ್ಲಿ ಪ್ರಕಟಿಸಿದ್ದಾರೆ.

"ನಮ್ಮ ಬೇಡಿಕೆಗಳು ಸ್ಪಷ್ಟವಾಗಿವೆ. ದೇಶದ ಯುವ ಸಮುದಾಯ ನಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತಿದೆ. ಸರ್ಕಾರ ಮಾತುಕತೆಗೆ ಮುಂದಾಗಿರುವುದು ಸಕಾರಾತ್ಮಕ ಬೆಳವಣಿಗೆ" ಎಂದು ಸೌರವ್ ದಾಸ್ ಹೇಳಿದ್ದಾರೆ.

ರಾಜಕೀಯ ಮಹತ್ವ ಪಡೆದ ಪ್ರತಿಭಟನೆ

ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನಡೆದ ಈ ಪ್ರತಿಭಟನೆ ರಾಷ್ಟ್ರ ರಾಜಕೀಯದಲ್ಲಿ ಮಹತ್ವ ಪಡೆದುಕೊಂಡಿದೆ. ಪ್ರತಿಭಟನೆಗೆ ಹಲವು ವಿರೋಧ ಪಕ್ಷಗಳ ನಾಯಕರು ಬೆಂಬಲ ವ್ಯಕ್ತಪಡಿಸಿರುವ ಬೆನ್ನಲ್ಲೇ ಸರ್ಕಾರ ಮಾತುಕತೆಗೆ ಮುಂದಾಗಿರುವುದು ಬೆಳವಣಿಗೆಗೆ ಹೊಸ ತಿರುವು ನೀಡಿದೆ.

ಈಗ ಸರ್ಕಾರ ಮತ್ತು ಸಿಜೆಪಿ ನಡುವಿನ ಮಾತುಕತೆಯ ಫಲಿತಾಂಶದ ಮೇಲೆ ಪ್ರತಿಭಟನೆಯ ಮುಂದಿನ ಹಂತ ನಿರ್ಧಾರವಾಗುವ ಸಾಧ್ಯತೆ ಇದೆ.

Read More
Next Story