ಚುನಾವಣಾ ಆಯೋಗದ ಕಾರ್ಯವೈಖರಿ ವಿರುದ್ಧ CWC ಸಭೆಯಲ್ಲಿ ಮೂರು ನಿರ್ಣಯಗಳು ಅಂಗೀಕಾರ
x

ಚುನಾವಣಾ ಆಯೋಗದ ಕಾರ್ಯವೈಖರಿ ವಿರುದ್ಧ CWC ಸಭೆಯಲ್ಲಿ ಮೂರು ನಿರ್ಣಯಗಳು ಅಂಗೀಕಾರ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು, ಪ್ರಸ್ತುತ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದ್ದು, ದೇಶಾದ್ಯಂತ ಆಯೋಗದ ವಿರುದ್ಧ ದೊಡ್ಡ ಮಟ್ಟದ ಹೋರಾಟಕ್ಕೆ ವೇದಿಕೆ ಸಿದ್ಧಪಡಿಸಿದೆ.


Click the Play button to hear this message in audio format

ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪಕ್ಷವು ಇದೀಗ ನೇರ ಸಮರ ಸಾರಿದೆ. ದೆಹಲಿಯ ಇಂದಿರಾ ಭವನದಲ್ಲಿ ನಡೆದ ಪಕ್ಷದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯು, ಪ್ರಸ್ತುತ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದ್ದು, ದೇಶಾದ್ಯಂತ ಆಯೋಗದ ವಿರುದ್ಧ ದೊಡ್ಡ ಮಟ್ಟದ ಹೋರಾಟಕ್ಕೆ ವೇದಿಕೆ ಸಿದ್ಧಪಡಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು. ಸಭೆಯು ಸಂಪೂರ್ಣವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಷಯದ ಮೇಲೆ ಕೇಂದ್ರೀಕೃತವಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಚುನಾವಣಾ ಆಯೋಗವು ಆಡಳಿತಾರೂಢ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ನೇರ ಆರೋಪ ಮಾಡಿದರು.

ಸಿಡಬ್ಲ್ಯೂಸಿ ಸಭೆಯ ಮೂರು ಪ್ರಮುಖ ನಿರ್ಣಯಗಳು

ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್, ತನ್ನ ಸಭೆಯಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಮರೆತು ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಪಾರದರ್ಶಕವಾಗಿಲ್ಲ ಮತ್ತು ಇದು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು ಬಳಸಲಾಗುತ್ತಿದೆ ಎಂದು ಆರೋಪಿಸಿ, ಈ ಪ್ರಕ್ರಿಯೆಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ನಿರ್ಣಯಿಸಲಾಗಿದೆ. ಕಳೆದ ಕೆಲವು ಅವಧಿಯಲ್ಲಿ ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಥವಾ ಅಸಮರ್ಪಕ ಕಾರಣಗಳಿಗಾಗಿ ತೆಗೆದುಹಾಕಲಾದ ಸುಮಾರು 13 ಕೋಟಿ 30 ಲಕ್ಷ ಮತದಾರರ ಹೆಸರುಗಳನ್ನು ತಕ್ಷಣವೇ ಪಟ್ಟಿಗೆ ಮರುಸೇರ್ಪಡೆಗೊಳಿಸಬೇಕು ಎಂಬುದು ಕಾಂಗ್ರೆಸ್‌ನ ಪ್ರಮುಖ ನಿರ್ಣಯವಾಗಿದೆ.

ಚುನಾವಣಾ ಆಯೋಗದ ಮುಂದಿರುವ ಐದು ಬೇಡಿಕೆಗಳು

ಮತದಾರರ ಪಟ್ಟಿಯ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಕಾಂಗ್ರೆಸ್ ಐದು ಬೇಡಿಕೆಗಳನ್ನು ಮುಂದಿಟ್ಟಿದೆ. ಮತದಾರರ ಪಟ್ಟಿಯಲ್ಲಿ ಸೇರಿಸಲಾದ ಮತ್ತು ಕೈಬಿಡಲಾದ ಎಲ್ಲಾ ವ್ಯಕ್ತಿಗಳ ಹೆಸರು ಮತ್ತು ಕಾರಣಗಳ ದತ್ತಾಂಶವನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಬೇಕು. ಯಾರ ಮತಗಳನ್ನು ಅಳಿಸಲಾಗಿದೆಯೋ, ಅಂತಹ ಮತದಾರರಿಗೆ ನೇರವಾಗಿ ಮಾಹಿತಿ ನೀಡಿ, ಅವರು ಆಕ್ಷೇಪಣೆ ಸಲ್ಲಿಸಲು ಅಥವಾ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು. ಎಲ್ಲಾ ರಾಜಕೀಯ ಪಕ್ಷಗಳಿಗೆ ಸಮಾನ ಸ್ವರೂಪದ ಮತದಾರರ ಪಟ್ಟಿಯ ದತ್ತಾಂಶವನ್ನು ಸಮಯಕ್ಕೆ ಸರಿಯಾಗಿ ಒದಗಿಸಬೇಕು. ಮತದಾರರ ಪಟ್ಟಿಯಲ್ಲಿ ಆಗಿರುವ ಗಂಭೀರ ಲೋಪದೋಷಗಳ ಬಗ್ಗೆ ನಿಷ್ಪಕ್ಷಪಾತ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು. ಚುನಾವಣಾ ಆಯೋಗದ ನಿರ್ಧಾರಗಳು, ಪ್ರಕ್ರಿಯೆಗಳು ಮತ್ತು ದತ್ತಾಂಶ ನಿರ್ವಹಣೆಯಲ್ಲಿ ಶೇ.100 ರಷ್ಟು ಪಾರದರ್ಶಕತೆ ಇರಬೇಕು ಎಂಬುದಾಗಿ ಸಭೆಯಲ್ಲಿ ಒತ್ತಾಯಿಸಲಾಗಿದೆ.

ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣಾ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಆತ್ಮವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಆಯೋಗವು ಆಡಳಿತ ಪಕ್ಷದ ಅಣತಿಯಂತೆ ಕೆಲಸ ಮಾಡುತ್ತಿದೆ. ಮತದಾರರ ಪಟ್ಟಿಯಲ್ಲಿನ ಏರುಪೇರುಗಳು ಮತ್ತು ಲಕ್ಷಾಂತರ ಹೆಸರುಗಳ ಡಿಲೀಟ್, ಸಣ್ಣ ಪಕ್ಷಗಳಿಗೆ ಅಥವಾ ವಿರೋಧ ಪಕ್ಷಗಳಿಗೆ ಹೊಡೆತ ನೀಡುತ್ತಿದೆ. ನಾವು ಸಂವಿಧಾನದ ಮೂಲ ಮಂತ್ರವನ್ನು ರಕ್ಷಿಸಲು ಬದ್ಧರಾಗಿದ್ದೇವೆ, ನಮ್ಮ ಈ ಹೋರಾಟವು ಸಂಸತ್ತಿನಿಂದ ಬೀದಿಯವರೆಗೆ ಮುಂದುವರಿಯಲಿದೆ ಹೇಳಿದರು.

Read More
Next Story