NEET PROTEST LIVE| ಪ್ರಧಾನಿ ಪೋಸ್ಟ್‌ಗೆ My Name Is Nothing ಎಂದ ಸಿಜೆಪಿ
x

NEET PROTEST LIVE| ಪ್ರಧಾನಿ ಪೋಸ್ಟ್‌ಗೆ 'My Name Is Nothing' ಎಂದ ಸಿಜೆಪಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದೆ. ಜಂತರ್ ಮಂತರ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿರುವ ಆರೋಪದ ನಡುವೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿದಿದೆ.


Click the Play button to hear this message in audio format

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆ ಗುರುವಾರ (ಜುಲೈ 23) 34ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಬುಧವಾರ ರಾತ್ರಿ ಜಂತರ್ ಮಂತರ್ ಸುತ್ತಮುತ್ತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಜೆಪಿ ಆರೋಪಿಸಿದ್ದು, ಸರ್ಕಾರ ಮತ್ತೊಮ್ಮೆ ಪ್ರತಿಭಟನಾಕಾರರ ಮೇಲೆ ಪೊಲೀಸ್ ದಮನಕ್ಕೆ ಸಿದ್ಧತೆ ನಡೆಸುತ್ತಿದೆಯೇ ಎಂದು ಪ್ರಶ್ನಿಸಿದೆ.

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಜಂತರ್ ಮಂತರ್‌ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಸರ್ಕಾರ ಮತ್ತೊಮ್ಮೆ ಕ್ರೂರ ದಮನಕ್ಕೆ ಮುಂದಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ ಪ್ರತಿಭಟನಾ ಸ್ಥಳದಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಹಾಗೂ ಅರೆಸೈನಿಕ ಪಡೆಗಳಿಗೆ ಮನವಿ ಮಾಡಿದ ಅವರು, ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಅಕ್ರಮ ಆದೇಶಗಳನ್ನು ಪಾಲಿಸಬೇಡಿ. ಜನರ ಪರ ನಿಲ್ಲುತ್ತೀರಾ ಅಥವಾ ಸರ್ವಾಧಿಕಾರಿ ಧೋರಣೆಯ ಪರ ನಿಲ್ಲುತ್ತೀರಾ ಎಂಬುದು ನಿಮ್ಮ ಪರೀಕ್ಷೆಯಾಗಿದೆ ಎಂದು ಹೇಳಿದ್ದಾರೆ.

ಸಿಜೆಪಿ ವಕ್ತಾರ ಸೌರವ್ ದಾಸ್ ಕೂಡ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಶಾಂತಿಯುತ ಪ್ರತಿಭಟನಾಕಾರರ ಮೇಲೆ ದಮನ ನಡೆಸುವ ಅಪಾಯವನ್ನು ಸರ್ಕಾರ ಕೈಗೊಳ್ಳಬಾರದು. ಪ್ರತಿಭಟನೆಯನ್ನು ನಿರ್ಲಕ್ಷಿಸುವುದರಿಂದ ಸರ್ಕಾರವೇ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Live Updates

  • 22 July 2026 10:15 AM IST

    ವಿದ್ಯಾರ್ಥಿಗಳ ಪ್ರತಿಭಟನೆಗೆ ನಟಿ ಪ್ರೀತಿ ಜಿಂಟಾ ಬೆಂಬಲ: ಅರಾಜಕ ಶಕ್ತಿಗಳಿಂದ ಹೈಜಾಕ್ ಆಗದಿರಲಿ ಎಂದ ಎಚ್ಚರಿಕೆ

    ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಾಲಿವುಡ್ ನಟಿ ಪ್ರೀತಿ ಜಿಂಟಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ಈ ಶಾಂತಿಯುತ ಪ್ರತಿಭಟನೆ ರಾಷ್ಟ್ರವಿರೋಧಿ ಶಕ್ತಿಗಳ ಕೈಗೆ ಸಿಲುಕಿ ತನ್ನ ಮೂಲ ಉದ್ದೇಶವನ್ನು ಕಳೆದುಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಪ್ರೀತಿ ಜಿಂಟಾ, ವಿದ್ಯಾರ್ಥಿಗಳಿಗೆ ಬೆಂಬಲ ನೀಡುವುದು ಹಾಗೂ ಯುವಜನರ ಭವಿಷ್ಯಕ್ಕೆ ಅನುಕೂಲವಾಗುವ ಶಿಕ್ಷಣ ಸುಧಾರಣೆಗಳನ್ನು ಆಗ್ರಹಿಸುವುದು ಅತ್ಯಂತ ಮುಖ್ಯ. ಆದರೆ, ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಗಳನ್ನು ರಾಷ್ಟ್ರವಿರೋಧಿ ಅಂಶಗಳು ಹೈಜಾಕ್ ಮಾಡಿ ಅರಾಜಕತೆ ಸೃಷ್ಟಿಸುವಂತಾಗಬಾರದು ಎಂದು ಹೇಳಿದ್ದಾರೆ.

    ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ಜೊತೆಗೆ ಪ್ರತಿಭಟನೆ ಶಾಂತಿಯುತವಾಗಿ ಮತ್ತು ತನ್ನ ಮೂಲ ಉದ್ದೇಶದೊಂದಿಗೆ ಮುಂದುವರಿಯಬೇಕು ಎಂಬುದು ತಮ್ಮ ಆಶಯ ಎಂದು ಅವರು ತಿಳಿಸಿದ್ದಾರೆ.

  • 22 July 2026 9:51 AM IST

    ದೆಹಲಿ ವಿದ್ಯಾರ್ಥಿ ಪ್ರತಿಭಟನೆಗೆ ಮಮತಾ ಬೆಂಬಲ: ಪೊಲೀಸ್ ಕ್ರಮ ಖಂಡನೆ

    ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ.

    ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು. ಅಕ್ಬರ್ ರಸ್ತೆ ಸಮೀಪ ವಿರೋಧ ಪಕ್ಷಗಳು ನಡೆಸುತ್ತಿರುವ ಧರಣಿಗೆ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಮಮತಾ ಬ್ಯಾನರ್ಜಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

    ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಮಂಗಳವಾರ ಪ್ರಧಾನಿ ನಿವಾಸದ ಹೊರಭಾಗದಲ್ಲಿ ಧರಣಿ ನಡೆಸಿದ್ದರು.

    ಇದೇ ವೇಳೆ, ಕೋಲ್ಕತ್ತಾದಲ್ಲಿಯೂ ಮಂಗಳವಾರ ರಾತ್ರಿ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಮಮತಾ ಆರೋಪಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ನ ಶಹೀದ್ ದಿನಾಚರಣೆಯ ಸಿದ್ಧತೆಯನ್ನು ಬಿಜೆಪಿ ಕಾರ್ಯಕರ್ತರು ಹಾಳು ಮಾಡಲು ಯತ್ನಿಸಿದ್ದು, ಸೂಚನಾ ಫಲಕಗಳನ್ನು ಧ್ವಂಸಗೊಳಿಸಿ, ವೇದಿಕೆಗೆ ಹಾನಿ ಉಂಟುಮಾಡಿ, ಮೈಕ್ರೋಫೋನ್ ತಂತಿಗಳನ್ನು ಕತ್ತರಿಸಿದ್ದಾರೆ. ಹಲವಾರು ಯುವಕರಿಗೆ ಬೆದರಿಕೆ ಹಾಕಿ ಗಾಯಗೊಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

  • 22 July 2026 9:42 AM IST

    ಸಿಜೆಪಿ ಪ್ರತಿಭಟನೆ ವೇಳೆ RAF ಯೋಧನ ಮೇಲೆ ಹಲ್ಲೆ ಆರೋಪ: ಎಫ್‌ಐಆರ್ ದಾಖಲು

    ಕಾಕ್ರೋಚ್‌ ಜನತಾ ಪಾರ್ಟಿ ನಡೆಸಿದ 'ಸಂಸತ್ ಚಲೋ' ಪ್ರತಿಭಟನೆಯ ವೇಳೆ ರಾಪಿಡ್ ಆಕ್ಷನ್ ಫೋರ್ಸ್ (RAF) ಯೋಧನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ, ಪ್ರತಿಭಟನಾಕಾರರ ಗುಂಪೊಂದು ಆರ್‌ಎಎಫ್‌ ಯೋಧನನ್ನು ಸುತ್ತುವರಿದು ಬೆನ್ನಟ್ಟಿದ ಬಳಿಕ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸೋಮವಾರ ಸಂಸತ್ ಕಡೆಗೆ ನಡೆದ ಸಿಜೆಪಿ ಮೆರವಣಿಗೆಯ ವೇಳೆ ಈ ಘಟನೆ ನಡೆದಿದ್ದು, ಪರೀಕ್ಷಾ ಅಕ್ರಮಗಳ ಬಗ್ಗೆ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಹಲ್ಲೆಯಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಿ ಕ್ರಮ ಕೈಗೊಳ್ಳಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • 22 July 2026 9:27 AM IST

    ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ಮುಂದುವರಿಕೆ: ವಿದ್ಯಾರ್ಥಿಗಳ ಕ್ಷಮೆ ಕೇಳಲಿ ಪ್ರಧಾನಿ ಮೋದಿ ಎಂದ ರಾಹುಲ್ ಗಾಂಧಿ

    ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕ್ರೋಚ್‌ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆ ಇಂದು ಕೂಡ ದೆಹಲಿಯ ಜಂತರ್ ಮಂತರ್‌ನಲ್ಲಿ ಮುಂದುವರಿದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿಗೆ ಹಲವು ವಿರೋಧ ಪಕ್ಷಗಳ ನಾಯಕರು ಬೆಂಬಲ ಸೂಚಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಮೂರನೇ ದಿನವೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ವಿರೋಧ ಪಕ್ಷಗಳು ಉಭಯ ಸದನಗಳಲ್ಲಿ ಪ್ರಸ್ತಾಪಿಸಲು ಸಜ್ಜಾಗಿವೆ.

    ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿ, "ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳ ಬಳಿ ಕ್ಷಮೆ ಯಾಚಿಸಬೇಕು" ಎಂದು ಆಗ್ರಹಿಸಿದ್ದಾರೆ.

  • 22 July 2026 8:36 AM IST

    ಪ್ರತಿಭಟನೆ ಮಧ್ಯೆ ಬರ್ಗರ್ ಸೇವನೆ ವಿವಾದ; ದಹಿಯಾ ನೀಡಿದ ಸಮರ್ಥನೆ

    ಪ್ರತಿಭಟನೆ ವೇಳೆ ಬರ್ಗರ್ ತಿನ್ನುತ್ತಿರುವ ವಿಡಿಯೋ ವೈರಲ್ ಆದ ಬಳಿಕ  ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಹುದ್ದೆಯಿಂದ ವಜಾಗೊಂಡ ವಿಜಯೇತಾ ದಹಿಯಾ, ತಮ್ಮ ವಿರುದ್ಧದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.

    ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ದಹಿಯಾ, "ಯಾರಿಗಾದರೂ ಹಸಿವಾದರೆ ಅವರು ಊಟ ಮಾಡುತ್ತಾರೆ. ಇದನ್ನು ಅನಗತ್ಯವಾಗಿ ದೊಡ್ಡ ವಿಷಯವನ್ನಾಗಿ ಮಾಡಲಾಗಿದೆ" ಎಂದು ಹೇಳಿದ್ದಾರೆ.

    ತಮ್ಮ ವಿರುದ್ಧ ನಡೆಯುತ್ತಿರುವ ಟೀಕೆ ಕೇವಲ ಪ್ರಚಾರ ಎಂದು ಹೇಳಿರುವ ಅವರು, ಪಕ್ಷ ಹಾಗೂ ಚಳವಳಿಗಾಗಿ ತಾವು ಸಲ್ಲಿಸಿರುವ ಸೇವೆಯೇ ತಮ್ಮ ಬಗ್ಗೆ ಮಾತನಾಡಬೇಕು ಎಂದು ಸಮರ್ಥಿಸಿಕೊಂಡಿದ್ದಾರೆ.

    ಸೋಮವಾರ ಸಂಸತ್ ಚಲೋ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಸಂಸತ್ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ದಹಿಯಾ ಬರ್ಗರ್ ತಿನ್ನುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಪಕ್ಷವು ಅವರನ್ನು ವಕ್ತಾರ ಹುದ್ದೆಯಿಂದ ವಜಾಗೊಳಿಸಿತ್ತು.

  • 22 July 2026 8:15 AM IST

    ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ ಪ್ರಧಾನ್ ವಾಗ್ದಾಳಿ

    ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಂಸತ್‌ಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮವನ್ನು ಖಂಡಿಸಿದ್ದರು. ಬಳಿಕ ಪೊಲೀಸರು ಪ್ರತಿಭಟನೆಯನ್ನು ತೆರವುಗೊಳಿಸಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು.

Read More
Next Story