KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 13 ಕಡೆ ಇಡಿ ದಾಳಿ
x

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 13 ಕಡೆ ಇಡಿ ದಾಳಿ

ಇಡಿ ದಾಳಿ ವೇಳೆ ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಹಾಗೂ ಡಿಜಿಟಲ್ ದಾಖಲೆಗಳನ್ನು ತನಿಖಾ ತಂಡ ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.


ಕೆಪಿಎಸ್‌ಸಿ (KPSC) ಅಕ್ರಮ ನೇಮಕಾತಿ ಹಾಗೂ ಹಣಕಾಸು ವ್ಯವಹಾರಗಳ ಆರೋಪಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಶಿವಶಂಕರಪ್ಪ ಸಾಹುಕಾರ್‌ ನಿವಾಸ ಸೇರಿದಂತೆ ರಾಜ್ಯಾದ್ಯಂತ ಒಟ್ಟು 13 ಕಡೆ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ಭವ್ಯ ನಿವಾಸದ ಮೇಲೆಯೂ ದಾಳಿ ನಡೆಸಿರುವ ಅಧಿಕಾರಿಗಳು, ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.

13 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ

ಶಿವಶಂಕರಪ್ಪ ಸಾಹುಕಾರ್ ಅವರ ಮನೆ, ಕಚೇರಿಗಳು ಹಾಗೂ ಅವರಿಗೆ ಸೇರಿದ ಪ್ರಮುಖ ಆಸ್ತಿ-ಪಾಸ್ತಿ ಮತ್ತು ಹಣಕಾಸು ವ್ಯವಹಾರಗಳ ಕುರಿತು ಇಡಿ ತನಿಖೆ ತೀವ್ರಗೊಳಿಸಿದೆ. ದಾಳಿ ವೇಳೆ ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಹಾಗೂ ಡಿಜಿಟಲ್ ದಾಖಲೆಗಳನ್ನು ತನಿಖಾ ತಂಡ ವಶಕ್ಕೆ ಪಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬಂಧನ ಭೀತಿ: ಹೈಕೋರ್ಟ್ ಮೆಟ್ಟಿಲೇರಿದ ಸಾಹುಕಾರ್

ನೇಮಕಾತಿ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಶಿವಶಂಕರಪ್ಪ ಸಾಹುಕಾರ್, ಬಂಧನದಿಂದ ತಪ್ಪಿಸಿಕೊಳ್ಳಲು ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ಕೋರ್ಟ್‌ನಲ್ಲಿ ವಾದ-ಪ್ರತಿವಾದ

ಶಿವಶಂಕರಪ್ಪ ಅವರು ತನಿಖೆಗೆ ಸಂಪೂರ್ಣ ಸಹಕರಿಸಲಿದ್ದು, ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಅವರ ಪರ ವಕೀಲರು ವಾದಿಸಿದರು. ಆದರೆ ಆರೋಪಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅವರ ವಿಚಾರಣೆ ಅತ್ಯಗತ್ಯ ಎಂದು ತನಿಖಾ ಸಂಸ್ಥೆ ಹೈಕೋರ್ಟ್‌ಗೆ ತಿಳಿಸಿದೆ.

ಎರಡೂ ಕಡೆಯ ವಾದ ಆಲಿಸಿರುವ ಹೈಕೋರ್ಟ್ ಮುಂದಿನ ದಿನಗಳಲ್ಲಿ ವಿಚಾರಣೆ ಮುಂದುವರಿಸಲಿದ್ದು, ರಾಜ್ಯ ರಾಜಕೀಯ ಹಾಗೂ ಆಡಳಿತ ರಂಗದಲ್ಲಿ ಈ ಇಡಿ ದಾಳಿ ತೀವ್ರ ಕುತೂಹಲ ಮೂಡಿಸಿದೆ.

Read More
Next Story