
ಲಕ್ನೋ ಅಗ್ನಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಅಲಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಉಷಾ ಮೆಹ್ರಾ ಮಾರ್ಗದಲ್ಲಿರುವ ಮೂರಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ 3 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್‌ನಲ್ಲಿ ಸೋಮವಾರ ಮಧ್ಯಾಹ್ನ ಮೂರು ಅಂತಸ್ತಿನ ವಾಣಿಜ್ಯ ಸಂಕೀರ್ಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕವಿದೆ.
ಮೃತರೆಲ್ಲರೂ 20 ರಿಂದ 24 ವರ್ಷದವರಾಗಿದ್ದು, ಉದ್ಯೋಗದ ಕನಸು ಹೊತ್ತು ತರಬೇತಿಗೆ ಆಗಮಿಸಿದ್ದರು. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಅಲಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಉಷಾ ಮೆಹ್ರಾ ಮಾರ್ಗದಲ್ಲಿರುವ ಮೂರಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ 3 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಕಟ್ಟಡದ ನೆಲಮಹಡಿಯಲ್ಲಿ ಸಾಕುಪ್ರಾಣಿಗಳ ಮಾರಾಟ ಮಳಿಗೆ ಇದ್ದರೆ, ಮೇಲಿನ ಮಹಡಿಯಲ್ಲಿ 'ಅನಿಮೇಷನ್ ಮತ್ತು ಕಂಪ್ಯೂಟರ್ ತರಬೇತಿ ಕೇಂದ್ರ' ಕಾರ್ಯನಿರ್ವಹಿಸುತ್ತಿತ್ತು. ಆರಂಭದಲ್ಲಿ ಇದು ಕೋಚಿಂಗ್ ಸೆಂಟರ್ ಎನ್ನಲಾಯಿತಾದರೂ ನಂತರ ಅದು ಅನಿಮೇಷನ್ ತರಬೇತಿ ಕೇಂದ್ರ ಎಂದು ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಖಚಿತಪಡಿಸಿದ್ದಾರೆ.
ಮೊದಲ ಮಹಡಿಯಿಂದ ಜಿಗಿದ ಯುವಕರು
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ದಟ್ಟವಾದ ಕಪ್ಪು ಹೊಗೆ ಇಡೀ ಕಟ್ಟಡವನ್ನು ಆವರಿಸಿಕೊಂಡಿತು. ಇದರಿಂದ ಕಂಗಾಲಾದ ವಿದ್ಯಾರ್ಥಿಗಳು ಪ್ರಾಣ ಉಳಿಸಿಕೊಳ್ಳಲು ಕಿರುಚಾಡುತ್ತಾ ಮೊದಲ ಮಹಡಿಯ ಕಿಟಕಿ ಮತ್ತು ರೇಲಿಂಗ್ಗಳಿಂದ ಕೆಳಗೆ ಜಿಗಿದಿದ್ದಾರೆ. ಈ ಭೀಕರ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಳಗೆ ಬಿದ್ದ ಹಲವರಿಗೆ ತೀವ್ರವಾದ ಮೂಳೆ ಮುರಿತ ಹಾಗೂ ಗಾಯಗಳಾಗಿವೆ.
ಗೋಡೆ ಒಡೆದು ಒಳನುಗ್ಗಿದ ರಕ್ಷಣಾ ಪಡೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ 14 ವಾಹನಗಳು ಹಾಗೂ ಹೈಡ್ರಾಲಿಕ್ ಪ್ಲಾಟ್ಫಾರ್ಮ್ ಬಳಸಿ ಕಾರ್ಯಾಚರಣೆ ಆರಂಭಿಸಲಾಯಿತು. ಆದರೆ, ಇಡೀ ಕಟ್ಟಡದಲ್ಲಿ ದಟ್ಟವಾದ ವಿಷಗಾಳಿ ತುಂಬಿದ್ದರಿಂದ ಒಳಗೆ ಹೋಗುವುದು ಅಸಾಧ್ಯವಾಗಿತ್ತು. ಅಂತಿಮವಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್ಡಿಆರ್ಎಫ್ ತಂಡಗಳು ಪಕ್ಕದ ಕಟ್ಟಡದ ಗೋಡೆ ಒಡೆದು, ಅದರ ಮೂಲಕ ಅನಿಮೇಷನ್ ಸೆಂಟರ್ನ ಒಳಗೆ ಪ್ರವೇಶಿಸಿ ಒಂದೊಂದೇ ಕೋಣೆ ಜಾಲಾಡಿದರು.
ಪ್ರಧಾನಿ ಮೋದಿ, ಸಿಎಂ ಯೋಗಿ ತೀವ್ರ ಸಂತಾಪ
ಭೀಕರ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಕ್ಷಣವೇ ತನಿಖೆಗೆ ಆದೇಶಿಸಿದ್ದು, ಗಾಯಾಳುಗಳಿಗೆ ಉಚಿತ ಮತ್ತು ಗುಣಮಟ್ಟದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕಿಟ್ನಿಂದಾಗಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

