
ಲಕ್ನೋ ಅಗ್ನಿ ದುರಂತ: 15 ವಿದ್ಯಾರ್ಥಿಗಳ ಸಾವು, ನಾಲ್ವರು ಅಧಿಕಾರಿಗಳ ಅಮಾನತು
ಅಗ್ನಿ ದುರಂತದಲ್ಲಿ15 ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದು, ಆಡಳಿತ ಯಂತ್ರದ ನಿರ್ಲಕ್ಷ್ಯ ಕಂಡು ಬಂದಿದೆ. ಭದ್ರತಾ ವೈಫಲ್ಯಗಳ ತನಿಖೆಗಾಗಿ ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ನಡೆದ ಭೀಕರ ಅಗ್ನಿ ಅವಘಡವು ಬೆಚ್ಚಿಬೀಳಿಸಿದ್ದು, ಅನಿಮೇಷನ್ ಕೋಚಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಈ ಅಗ್ನಿ ದುರಂತದಲ್ಲಿ 16ರಿಂದ 25 ವರ್ಷದೊಳಗಿನ ಕನಿಷ್ಠ 15 ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದು, ಘಟನೆಯು ಆಡಳಿತ ಯಂತ್ರದ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ಲಕ್ನೋದ ಪುರಾನಿಯಾ ಪ್ರದೇಶದ ಅಂಗಡಿಯೊಂದರ ಮೇಲಿನ ಮಹಡಿಯಲ್ಲಿ ಅನಿಮೇಷನ್ ಕೋಚಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿತ್ತು. ಸೋಮವಾರ ಮಧ್ಯಾಹ್ನ ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಕವಾಗಿ ಹಬ್ಬಿದ್ದರಿಂದ ಕೋಚಿಂಗ್ ಸೆಂಟರ್‌ನಲ್ಲಿದ್ದ ವಿದ್ಯಾರ್ಥಿಗಳು ಸಿಲುಕಿಕೊಂಡರು. ಬೆಂಕಿ ಮತ್ತು ದಟ್ಟವಾದ ಹೊಗೆಯಿಂದ ಉಸಿರುಗಟ್ಟಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ ಒಟ್ಟು 15 ಮಂದಿ ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಲಕ್ನೋದ ಪ್ರತಿಷ್ಠಿತ ಕಿಂಗ್ ಜಾರ್ಜ್ಸ್ ಮೆಡಿಕಲ್ ಯೂನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಧಿಕಾರಿಗಳ ಅಮಾನತು - ಬಂಧನ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರವು ತ್ವರಿತವಾಗಿ ಕ್ರಮ ಕೈಗೊಂಡಿದೆ. ಲಕ್ನೋ ಅಭಿವೃದ್ಧಿ ಪ್ರಾಧಿಕಾರ, ಅಗ್ನಿಶಾಮಕ ದಳ ಮತ್ತು ವಿದ್ಯುತ್ ಇಲಾಖೆಯ ನಾಲ್ವರು ಉನ್ನತ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕೋಚಿಂಗ್ ಸೆಂಟರ್ ನಿರ್ವಹಣೆಯಲ್ಲಿನ ಲೋಪಗಳು ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಗಾಗಿ ಇವರು ಜವಾಬ್ದಾರರಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಅಲಿಗಂಜ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಆರು ಮಂದಿಯ ವಿರುದ್ಧ ಎಫ್‌ಐಆರ್ ಹಾಕಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಉತ್ತರ ಪ್ರದೇಶ ಅಗ್ನಿಶಾಮಕ ಸೇವಾ ಕಾಯ್ದೆಯ ಅಡಿಯಲ್ಲಿ ಈ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ವಿಶೇಷ ತಂಡ ರಚನೆ
ಈ ದುರಂತದ ಹಿಂದಿನ ನಿಖರ ಕಾರಣಗಳು ಮತ್ತು ಭದ್ರತಾ ವೈಫಲ್ಯಗಳ ತನಿಖೆಗಾಗಿ ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ರಚಿಸಲಾದ ವಿಶೇಷ ತನಿಖಾ ತಂಡ ಈ ಘಟನೆಯನ್ನು ಎಲ್ಲಾ ಆಯಾಮಗಳಿಂದ ಪರಿಶೀಲಿಸಲಿದೆ. ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮೃತ್ ಅಭಿಜಿತ್, ಲಕ್ನೋ ವಲಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಈ ತಂಡವು ಘಟನಾ ಸ್ಥಳವನ್ನು ಪರಿಶೀಲಿಸಿ, ಸಂಬಂಧಪಟ್ಟ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಕೇವಲ ಏಳು ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಆದೇಶಿಸಿದೆ. ವರದಿಯ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ನಿರ್ಲಕ್ಷ್ಯದ ಪರಮಾವಧಿ
ಪ್ರಾಥಮಿಕ ವರದಿಗಳ ಪ್ರಕಾರ, ಕೋಚಿಂಗ್ ಸೆಂಟರ್ ಇರುವ ಕಟ್ಟಡವು ಅಗತ್ಯವಿರುವ ಅಗ್ನಿಶಾಮಕ ಸುರಕ್ಷತಾ ಪ್ರಮಾಣಪತ್ರಗಳನ್ನು ಹೊಂದಿರಲಿಲ್ಲ. ಅಲ್ಲದೆ, ಇಕ್ಕಟ್ಟಾದ ಸ್ಥಳದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ತರಗತಿ ನಡೆಸುತ್ತಿದ್ದುದು ಮತ್ತು ತುರ್ತು ನಿರ್ಗಮನ ದ್ವಾರಗಳಿಲ್ಲದಿರುವುದು ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಅನಿಲ ಸೋರಿಕೆಯಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ರಾಜ್ಯದ ಎಲ್ಲಾ ಕೋಚಿಂಗ್ ಸೆಂಟರ್‌ಗಳು ಮತ್ತು ಶೈಕ್ಷಣಿಕ ಸಂಸ್ಥೆಗಳು ಅಗ್ನಿಶಾಮಕ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವ ಯಾವುದೇ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಅವರು ಎಚ್ಚರಿಸಿದ್ದಾರೆ.

