x

ನೀಟ್‌ ಕದನ ತೀವ್ರ: ಪ್ರಧಾನಿ ಮೋದಿ ಏನಂದ್ರು? ನಡ್ಡಾ-CJP ಸಭೆ ವಿಫಲ, ಸಂಸತ್‌ನಲ್ಲಿ ವಿಪಕ್ಷಗಳ ರಂಪಾಟ

ಪ್ರಧಾನಿ ನರೇಂದ್ರ ಮೋದಿ ನೀಟ್ ವಿವಾದದ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಧಾನಿ ಹೇಳಿದ್ದಾರೆ.


ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತೊಂದು ಮಹತ್ವದ ಹಂತಕ್ಕೆ ತಲುಪಿದೆ. ಒಂದೆಡೆ ಪ್ರತಿಭಟನಾಕಾರರೊಂದಿಗೆ ಕೇಂದ್ರ ಸರ್ಕಾರ ನಡೆಸಿದ ಮಾತುಕತೆ ಯಾವುದೇ ಸ್ಪಷ್ಟ ಫಲಿತಾಂಶ ನೀಡಿಲ್ಲ ಎಂಬ ಆರೋಪ ಕೇಳಿಬಂದಿದ್ದರೆ, ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಈ ಪ್ರಕರಣದ ಕುರಿತು ಕಠಿಣ ಸಂದೇಶ ನೀಡಿದ್ದಾರೆ. ಇದರ ನಡುವೆಯೇ ಸಂಸತ್ತಿನ ಒಳಗೂ ಹೊರಗೂ ರಾಜಕೀಯ ಸಂಘರ್ಷ ತೀವ್ರಗೊಂಡಿದೆ.

ನಡ್ಡಾ-CJP ಸಭೆ ವಿಫಲ

ಜಂತರ್ ಮಂತರ್‌ನಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯ ನಡುವೆ ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಕಾಕ್‌ರೋಚ್ ಜನತಾ ಪಾರ್ಟಿ (CJP) ಪ್ರತಿನಿಧಿಗಳಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಆದರೆ ಸಭೆಯ ಬಳಿಕ ಅಶುತೋಷ್ ರಂಕಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಅವರು, "ಈ ಸಭೆಯಿಂದ ಯಾವುದೇ ಫಲ ಸಿಕ್ಕಿಲ್ಲ. ನಮ್ಮ ನಾಲ್ಕು ಗಂಟೆಗಳ ಅಮೂಲ್ಯ ಸಮಯ ವ್ಯರ್ಥವಾಯಿತು. ನಮ್ಮ ಚಳವಳಿಯ ಶಕ್ತಿಯನ್ನು ಸರ್ಕಾರ ಅರಿತು ಹತಾಶವಾಗಿದೆ. ಈಗ ಸುಳ್ಳು ಹೇಳುವುದನ್ನು ನಿಲ್ಲಿಸಿ" ಎಂದು ನಡ್ಡಾ ಅವರನ್ನು ಟೀಕಿಸಿದ್ದಾರೆ. ಅಂದರೆ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಮೊದಲ ಅಧಿಕೃತ ಮಾತುಕತೆಯೂ ಯಾವುದೇ ಸ್ಪಷ್ಟ ಪರಿಹಾರ ನೀಡಿಲ್ಲ ಎನ್ನುವುದು ಸಿಜೆಪಿಯ ಆರೋಪವಾಗಿದೆ.

ಪ್ರತಿಭಟನೆ ಹಿಂಪಡೆಯಲು ನಡ್ಡಾ ಮನವಿ

ಇನ್ನೊಂದೆಡೆ, ಸಭೆಯ ಬಳಿಕ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಸಿಜೆಪಿ ಬೆಂಬಲಿಗರಿಗೆ ಮನವಿ ಮಾಡಿದ್ದಾರೆ. "ಪ್ರತಿಭಟನೆ ಕೊನೆಗೊಳಿಸಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲು ಆಡಳಿತಕ್ಕೆ ಸಹಕರಿಸಿ. ನಿಮ್ಮ ಬೇಡಿಕೆಗಳ ಬಗ್ಗೆ ಸರ್ಕಾರ ಗಂಭೀರವಾಗಿ ಚರ್ಚೆ ನಡೆಸಲಿದೆ" ಎಂದು ಅವರು ತಿಳಿಸಿದ್ದಾರೆ. ಆದರೆ ಈ ಮನವಿಯನ್ನು ಸಿಜೆಪಿ ತಿರಸ್ಕರಿಸಿದ್ದು, ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

ಸಿಜೆಪಿ ಹಾಗೂ ಸಾವಿರಾರು ವಿದ್ಯಾರ್ಥಿಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಪ್ರಕ್ರಿಯೆಯಲ್ಲಿನ ಅಕ್ರಮಗಳು ಮತ್ತು ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿದಿರುವುದನ್ನು ಉಲ್ಲೇಖಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಈ ಹೋರಾಟಕ್ಕೆ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಬೆಂಬಲ ಸೂಚಿಸಿದ್ದು, ಅವರು 21 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಬಳಿಕ ನ್ಯಾಯಾಲಯದ ಆದೇಶದ ಮೇರೆಗೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರೂ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಆಸ್ಪತ್ರೆಯಲ್ಲಿಯೇ ತಮ್ಮ ಉಪವಾಸ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

'ಸಂಸತ್ ಚಲೋ' ವೇಳೆ ಉದ್ವಿಗ್ನತೆ

ಈ ನಡುವೆ ಸೋಮವಾರ ನಡೆದ 'ಸಂಸತ್ ಚಲೋ' ಪ್ರತಿಭಟನೆ ದೇಶದ ಗಮನ ಸೆಳೆಯಿತು. ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ಸಂಸತ್ತಿನತ್ತ ಮೆರವಣಿಗೆ ನಡೆಸಲು ಮುಂದಾದಾಗ ದೆಹಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆಯಲು ಯತ್ನಿಸಿದರು. ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಅಶ್ರುವಾಯು ಪ್ರಯೋಗ ಹಾಗೂ ಲಾಠಿಚಾರ್ಜ್ ನಡೆಸಲಾಯಿತು. ಪ್ರತಿಭಟನಾಕಾರರ ಆರೋಪದ ಪ್ರಕಾರ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮತ್ತೊಂದೆಡೆ, ದೆಹಲಿ ಪೊಲೀಸರ ಪ್ರಕಾರ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸುಮಾರು 70 ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

ಈ ಬೆಳವಣಿಗೆಗಳ ನಡುವೆಯೇ ಮಂಗಳವಾರ ನಡೆದ ಎನ್‌ಡಿಎ ಸಂಸದೀಯ ಪಕ್ಷದ 'ಮಂಗಳ ಮಿಲನ್' ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಟ್ ವಿವಾದದ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಮಾಹಿತಿ ಪ್ರಕಾರ, "ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು" ಎಂದು ಪ್ರಧಾನಿ ಹೇಳಿದ್ದಾರೆ. ಅಲ್ಲದೆ, "ಇಂತಹ ಪ್ರಶ್ನೆಪತ್ರಿಕೆ ಸೋರಿಕೆಗಳನ್ನು ತಡೆಯುವುದು ಸರ್ಕಾರದ ಮಾತ್ರವಲ್ಲ, ಇಡೀ ದೇಶದ ರಾಷ್ಟ್ರೀಯ ಜವಾಬ್ದಾರಿ" ಎಂದೂ ಅವರು ಒತ್ತಿ ಹೇಳಿದ್ದಾರೆ. ದೋಷರಹಿತ, ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ.

ಸಂಸತ್ತಿನಲ್ಲಿ ಪ್ರತಿಪಕ್ಷಗಳ ಆಕ್ರೋಶ

ಇದೇ ವೇಳೆ, ನೀಟ್ ವಿವಾದ ಸಂಸತ್ತಿನಲ್ಲೂ ಪ್ರತಿಧ್ವನಿಸಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಹಲವು ಪಕ್ಷಗಳ ನಾಯಕರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ಜಂತರ್ ಮಂತರ್ ಹಾಗೂ ಅದರ ಸುತ್ತಮುತ್ತ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಮತ್ತು ಬಲಪ್ರಯೋಗದ ಕುರಿತು ಸಂಸತ್ತಿನಲ್ಲಿ ತಕ್ಷಣ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಈ ವಿಚಾರವನ್ನು ಸದನದಲ್ಲಿ ಚರ್ಚೆಗೆ ತೆಗೆದುಕೊಳ್ಳದಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ (AAP) ಸೇರಿದಂತೆ ಹಲವು ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಒಳಗೇ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಪ್ರಜಾಪ್ರಭುತ್ವದ ಹಕ್ಕನ್ನು ಹತ್ತಿಕ್ಕಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದರೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಮಾತ್ರ ಪೊಲೀಸರು ಕೈಗೊಂಡಿದ್ದಾರೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

Read More
Next Story