
ಅಯೋಧ್ಯೆಯ ಶ್ರೀ ರಾಮ ಮಂದಿರ
ರಾಮಮಂದಿರ ದೇಣಿಗೆ ಅಕ್ರಮ ಆರೋಪ: ಅಖಿಲೇಶ್ vs ಬಿಜೆಪಿ ಹೈಡ್ರಾಮಾ!
ರಾಮಮಂದಿರದ ದೇಣಿಗೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಪ್ರಗತಿಯಲ್ಲಿದೆ. ಅಕ್ರಮದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೋ, ಅವರನ್ನು ಕಾನೂನಿನ ಕಟಕಟೆಗೆ ತಂದು ನಿಲ್ಲಿಸಲಾಗುವುದು ಎಂದು ಯುಪಿ ಡಿಸಿಎಂ ಬ್ರಜೇಶ್ ಪಾಠಕ್ ತಿಳಿಸಿದ್ದಾರೆ.
ಅಯೋಧ್ಯೆಯ ಭವ್ಯ ರಾಮಮಂದಿರದ ದೇಣಿಗೆ ನಿರ್ವಹಣೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದು, ಉತ್ತರ ಪ್ರದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಮತ್ತು ಎಸ್‌ಪಿ ನಾಯಕರ ನಡುವೆ ತೀವ್ರ ವಾಕ್ಸಮರ ಆರಂಭವಾಗಿದೆ. ರಾಮಮಂದಿರಕ್ಕೆ ಹರಿದುಬಂದ ಕೋಟ್ಯಂತರ ರೂಪಾಯಿ ದೇಣಿಗೆ ನಾಪತ್ತೆಯಾಗಿದೆ ಎಂದು ಗುಡುಗಿದ್ದಾರೆ.
ಅಖಿಲೇಶ್ ಯಾದವ್ ಅವರ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಎಸ್‌ಪಿ ಮುಖ್ಯಸ್ಥರನ್ನು "ಸನಾತನ ವಿರೋಧಿ" ಎಂದು ಕರೆದಿದ್ದಾರೆ. "ಸಮಾಜವಾದಿ ಪಕ್ಷದ ಮುಖ್ಯಸ್ಥರಿಗೆ ಕೇವಲ ರಾಮಮಂದಿರದ ದೇಣಿಗೆ ಬಗ್ಗೆ ಮಾತ್ರ ಪ್ರಶ್ನೆ ಮಾಡಲು ಸಾಧ್ಯವಾಗುತ್ತದೆ. ಅಯೋಧ್ಯೆ ಬಳಿ ಪ್ರಸ್ತಾವಿತ ಬಾಬರಿ ಮಸೀದಿಗೆ ಬಂದ ದೇಣಿಗೆಗಳ ಬಗ್ಗೆ ಅವರು ಎಂದಿಗೂ ತುಟಿ ಬಿಚ್ಚಿಲ್ಲ. ಇದು ಅವರು ಕೇವಲ ತಮ್ಮ ವೋಟ್ ಬ್ಯಾಂಕ್ ರಾಜಕಾರಣದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ ಎಂಬುದನ್ನು ಸಾಬೀತುಪಡಿಸುತ್ತದೆ." ಎಂದು ತಿಳಿಸಿದ್ದಾರೆ.
ರಾಮಮಂದಿರದ ದೇಣಿಗೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಪ್ರಗತಿಯಲ್ಲಿದೆ. ಯಾವುದೇ ರೀತಿಯ ದುಷ್ಕೃತ್ಯ ಅಥವಾ ಅಕ್ರಮದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೋ, ಅವರನ್ನು ಕಾನೂನಿನ ಕಟಕಟೆಗೆ ತಂದು ನಿಲ್ಲಿಸಲಾಗುವುದು. ಅಲ್ಲಿಯವರೆಗೆ ಅಖಿಲೇಶ್ ಯಾದವ್ ಅವರು ಕಾಯಬೇಕು ಎಂದು ಸಲಹೆ ನೀಡಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳೂ ನಾಪತ್ತೆ
ಇದಕ್ಕೂ ಮುನ್ನ ಲಕ್ನೋದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಅಖಿಲೇಶ್ ಯಾದವ್, ರಾಮಮಂದಿರದ ನಿಧಿ ನಿರ್ವಹಣೆಯಲ್ಲಿ ಪಾರದರ್ಶಕತೆ ಎಲ್ಲಿದೆ ಎಂದು ಪ್ರಶ್ನಿಸಿದ್ದರು. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಆರ್ಥಿಕ ವ್ಯವಹಾರಗಳ ತನಿಖೆಗೆ ಉತ್ತರ ಪ್ರದೇಶ ಸರ್ಕಾರವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ ಬೆನ್ನಲ್ಲೇ ಅಖಿಲೇಶ್ ಅವರ ಈ ಹೇಳಿಕೆ ಹೊರಬಿದ್ದಿದೆ. "ಜನರು ರಾಮಮಂದಿರಕ್ಕೆ ಬಂದ ದೇಣಿಗೆಗಳ ಸರಿಯಾದ ಲೆಕ್ಕಪತ್ರವನ್ನು ಕೇಳುತ್ತಿದ್ದಾರೆ. ಭಕ್ತರು ನೀಡಿದ ಕಾಣಿಕೆಗಳು ಮತ್ತು ಇತರ ನಿಧಿಗಳ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ," ಈ ವಿಷಯಕ್ಕೆ ಸಂಬಂಧಿಸಿದ ಪ್ರಮುಖ ಸಿಸಿಟಿವಿ ದೃಶ್ಯಾವಳಿಗಳು ಕೂಡ ಕಾಣೆಯಾಗಿವೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಹಣದ ಮೇಲೆ ಕಣ್ಣು
ಬಿಜೆಪಿ ಸರ್ಕಾರವು "ಧರ್ಮಕ್ಕಿಂತ ಹಣದ ಬಗ್ಗೆಯೇ ಹೆಚ್ಚು ಕಾಳಜಿ ವಹಿಸುತ್ತಿದೆ" ಎಂದು ಕಿಡಿಕಾರಿದ ಅವರು, ಸಾರ್ವಜನಿಕರು ಈಗ ರಾಜಕೀಯ ವಿಭಜನೆಗಿಂತ ಅಭಿವೃದ್ಧಿ, ಬೆಲೆ ಏರಿಕೆ ಮತ್ತು ಸಾಮಾಜಿಕ ಸಾಮರಸ್ಯದತ್ತ ಗಮನ ಹರಿಸುತ್ತಿದ್ದಾರೆ ಎಂದಿದ್ದಾರೆ.
ಕಣಕ್ಕಿಳಿದ ಎಸ್‌ಐಟಿ
ಈ ಇಡೀ ವಿವಾದದ ಸತ್ಯಾಸತ್ಯತೆಯನ್ನು ಹೊರತರಲು ಸದ್ಯ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದೆ. ದೂರುಗಳಿಗೆ ಸಂಬಂಧಿಸಿದಂತೆ ದೇವಾಲಯದ ಆಡಳಿತ ಮಂಡಳಿಯ ಪ್ರಮುಖರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದೆ. ಟ್ರಸ್ಟ್‌ನ ಆಂತರಿಕ ಲೆಕ್ಕಪರಿಶೋಧನೆಯಲ್ಲಿ ಯಾವುದೇ ಹಣ ಅಥವಾ ದೇಣಿಗೆ ನಾಪತ್ತೆಯಾಗಿರುವ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದೆ. ಸುಳ್ಳು ಮಾಹಿತಿಗಳು ಹರಡದಂತೆ ತಡೆಯಲು ಮತ್ತು ಸತ್ಯವನ್ನು ಸಾಬೀತುಪಡಿಸಲು ಸ್ವತಃ ಟ್ರಸ್ಟ್ ಕೋರಿಕೆಯ ಮೇರೆಗೆ ರಾಜ್ಯ ಸರ್ಕಾರ ಈ ಎಸ್‌ಐಟಿ ತನಿಖೆಗೆ ಆದೇಶಿಸಿದೆ.

