
ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಯಾತ್ರಿಕರಿದ್ದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.
ಉತ್ತರಪ್ರದೇಶದಲ್ಲಿ ಯಾತ್ರಿಕರಿದ್ದ ಬಸ್ ಪಲ್ಟಿ; ನಾಲ್ವರು ದುರ್ಮರಣ
ಬಸ್ ರಾಜಸ್ಥಾನದ ಬಂಗಾರ್‌ನಿಂದ ಬದಾಯುನ್ ಕಡೆಗೆ ತೆರಳುತ್ತಿತ್ತು. ಉತ್ತರಪ್ರದೇಶದ ಬಾಗ್‌ಪತ್‌ನ ಬಡಾಗಾಂವ್ ಕಟ್ ಸಮೀಪ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್ ಪಲ್ಟಿಯಾಗಿದೆ.
ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಬಾಗ್‌ಪತ್‌ನ ಬಡಾಗಾಂವ್ ಕಟ್ ಬಳಿ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಭವಿಸಿದೆ. ಬಸ್ ರಾಜಸ್ಥಾನದ ಬಂಗಾರ್‌ನಿಂದ ಬದಾಯುನ್ ಕಡೆಗೆ ತೆರಳುತ್ತಿತ್ತು. ಬಸ್‌ನಲ್ಲಿ ಸುಮಾರು 32 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಸಾವು, ಹಲವರಿಗೆ ಗಂಭೀರ ಗಾಯ
ಅಪಘಾತದ ಕುರಿತು ಸೋಮವಾರ ಮುಂಜಾನೆ ಸುಮಾರು 12.30ಕ್ಕೆ 112 ತುರ್ತು ಸೇವೆಗೆ ಮಾಹಿತಿ ಬಂದಿತ್ತು. ಮಾಹಿತಿ ದೊರೆತ ತಕ್ಷಣ ನಾಲ್ಕು ಪೊಲೀಸ್ ರೆಸ್ಪಾನ್ಸ್ ವಾಹನಗಳು, ಆಂಬ್ಯುಲೆನ್ಸ್‌ಗಳು ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಪಲ್ಟಿಯಾಗಿದ್ದ ಬಸ್‌ನಿಂದ ಗಾಯಾಳುಗಳನ್ನು ಹೊರತೆಗೆದು ಸಮೀಪದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ರವಾನಿಸಲಾಗಿದೆ.
ಬಾಗ್‌ಪತ್ ಪೊಲೀಸ್ ವರಿಷ್ಠಾಧಿಕಾರಿ ಸೂರಜ್ ಕುಮಾರ್ ರೈ ನಾಲ್ವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಮಾಹಿತಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಅಸ್ಮಿತಾ ಲಾಲ್ ಕೂಡ ನಾಲ್ವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಿದ್ದಾರೆ.

