
ಹಲ್ದಿಯಾ ರಿಫೈನರಿಯಲ್ಲಿ ಬೆಂಕಿ ಅವಘಡ; ನಾಫ್ತಾ ಪೈಪ್‌ಲೈನ್ ಸ್ಫೋಟ, 15 ಮಂದಿ ಗಾಯ
ಪಶ್ಚಿಮ ಬಂಗಾಳದ ಹಲ್ದಿಯಾ ರಿಫೈನರಿಯಲ್ಲಿ ನಾಫ್ತಾ ಪೈಪ್‌ಲೈನ್‌ಗೆ ಭೀಕರ ಬೆಂಕಿ ಹೊತ್ತಿಕೊಂಡು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ.
ಪಶ್ಚಿಮ ಬಂಗಾಳದ ಹಲ್ದಿಯಾ ರಿಫೈನರಿಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ನಾಫ್ತಾ ಸಾಗಿಸುತ್ತಿದ್ದ ಪೈಪ್‌ಲೈನ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಇಂದು ಬೆಳಗ್ಗೆ 4 ರಿಂದ 5 ಗಂಟೆಯ ನಡುವಿನ ಅವಧಿಯಲ್ಲಿ ಪೈಪ್‌ಲೈನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಕೆಲವೇ ಕ್ಷಣಗಳಲ್ಲಿ ಬೆಂಕಿಯ ಜ್ವಾಲೆಗಳು ವ್ಯಾಪಕವಾಗಿ ಹರಡಿದ್ದು, ಸ್ಥಳದಲ್ಲಿದ್ದ ಹಲವು ಕಾರ್ಮಿಕರು ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
Haldia, West Bengal: A fire broke out in a naphtha pipeline at the Haldia Refinery. Several workers sustained burn injuries after the blaze erupted and were rushed to Haldia Sub-Divisional Hospital for treatment. Some of the injured are reported to be in critical condition. The… pic.twitter.com/zuKReRz54a
— IANS (@ians_india) June 30, 2026
ಅಗ್ನಿ ಅವಘಡದ ದೃಶ್ಯಗಳಲ್ಲಿ ದಟ್ಟ ಕಪ್ಪು ಹೊಗೆ ಆಕಾಶದತ್ತ ಆವರಿಸಿರುವುದು ಕಂಡುಬಂದಿದ್ದು, ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಹಾಗೂ ಕಾರ್ಖಾನೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಾಳುಗಳನ್ನು ತಕ್ಷಣವೇ ರಕ್ಷಿಸಿ ಹಲ್ದಿಯಾ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
ಇದೀಗ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ಮುಂದುವರಿಸಿದ್ದು, ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತ ಹೇಗೆ ಸಂಭವಿಸಿತು ಎಂಬ ಬಗ್ಗೆ ಕಾರ್ಖಾನೆ ಆಡಳಿತ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದನ್ನು ಪರಿಶೀಲಿಸುತ್ತಿದ್ದಾರೆ.

