x

ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ

ನೀಟ್ ಅಕ್ರಮದ ವಿರುದ್ಧ CJP ನಡೆಸುತ್ತಿರುವ ಪ್ರತಿಭಟನೆ ಇದೀಗ ನಾನಾ ತಿರುವುಗಳನ್ನು ತಗೆದುಕೊಂಡಿದೆ.


Click the Play button to hear this message in audio format

ನೀಟ್ ಪರೀಕ್ಷೆಯ ಅಕ್ರಮವನ್ನು ಖಂಡಿಸಿ ಸಂಸತ್ತಿನ ಉಭಯ ಸದನಗಳಲ್ಲಿ (ಲೋಕಸಭೆ ಮತ್ತು ರಾಜ್ಯಸಭೆ) ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದವು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷಗಳು ಚರ್ಚೆಗೆ ಸಹಕರಿಸಲಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರು. ಈ ಗದ್ದಲದಿಂದಾಗಿ ಇಡೀ ದಿನದ ಸಂಸತ್ ಕಲಾಪವನ್ನು ಹಲವು ಬಾರಿ ಮುಂದೂಡಬೇಕಾಯಿತು.

ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು

ಸದನದ ಕಲಾಪದ ವೇಳೆ ನಿಯಮಾವಳಿಗಳನ್ನು ಮೀರಿ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಲೋಕಸಭಾ ಸ್ಪೀಕರ್ ಅಮಾನತುಗೊಳಿಸಿದರು.

ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ

ದೆಹಲಿ, ಹೈದರಾಬಾದ್, ಬಿಹಾರ, ಪಶ್ಚಿಮ ಬಂಗಾಳ, ಗುಜರಾತ್ ಹಾಗೂ ಪಾಟ್ನಾ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು. ಹೈದರಾಬಾದ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಕೋಲು-ದೊಣ್ಣೆಗಳಿಂದ ಹೊಡೆದಾಟ ನಡೆದು ವಾತಾವರಣ ಉದ್ವಿಗ್ನಗೊಂಡಿತ್ತು. ನಿನ್ನೆ ನಡೆದ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಬಂಧನ ಮತ್ತು ಅವರಿಗೆ ಗಾಯವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಸಿಜೆಪಿ ಕಾರ್ಯಕರ್ತರು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಮೊದಲ ದಿನ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ನಡೆಸಿದ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗವನ್ನು ಪ್ರಶ್ನಿಸಿ ಸಿಜೆಪಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಆದರೆ, ಸಿಜೆಐ ನೇತೃತ್ವದ ಪೀಠವು ಈ ಅರ್ಜಿಯ ತುರ್ತು ವಿಚಾರಣೆಯನ್ನು ನಿರಾಕರಿಸಿದೆ.

ರಾಜಕೀಯ ಸ್ವರೂಪ ಪಡೆದ ಹೋರಾಟ

ಸೋನು ಮಾಂಚು ಅವರ ಉಪವಾಸ ಸತ್ಯಾಗ್ರಹ ಮತ್ತು ಸಿಜೆಪಿ ಆರಂಭಿಸಿದ ಈ ಹೋರಾಟಕ್ಕೆ ಈಗ ಕಾಂಗ್ರೆಸ್ ಹಾಗೂ ಇತರ ಪ್ರತಿಪಕ್ಷಗಳು ಬೆಂಬಲ ಸೂಚಿಸುವುದರೊಂದಿಗೆ, ಪ್ರತಿಭಟನೆಯು ಬೃಹತ್ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ನೀಟ್ ಅಕ್ರಮದ ಬಗ್ಗೆ ಕೇಂದ್ರ ಸರ್ಕಾರ ಮುಂದೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಸದ್ಯ ತೀವ್ರ ಕುತೂಹಲ ಮೂಡಿಸಿದೆ.

Read More
Next Story