
ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ರಿಲೀಫ್- ಅಕ್ರಮ ಆಸ್ತಿ ಪ್ರಕರಣದಲ್ಲಿ ಹೈಕೋರ್ಟ್ ವಿಚಾರಣೆಗೆ ತಡೆ
ತಮ್ಮ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸದ್ಯ ಹೈಕೋರ್ಟ್ ವಿಚಾರಣೆಯನ್ನು ಮುಂದುವರಿಸದಂತೆ ಸೂಚಿಸಿದೆ.
ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ರಿಲೀಫ್ ನೀಡಿದೆ. ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಮುಂದಿನ ವಿಚಾರಣೆ ನಡೆಸದಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವರದಿಯನ್ನು ಸದ್ಯಕ್ಕೆ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸದಂತೆ ಕೇಂದ್ರ ತನಿಖಾ ದಳ (CBI) ಹಾಗೂ ಜಾರಿ ನಿರ್ದೇಶನಾಲಯಕ್ಕೆ (ED) ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಾಲಯದ ಮುಂದೆ ಮಂಡಿಸಿದ ವಾದಗಳನ್ನು ಆಲಿಸಿದ ಬಳಿಕ ಪೀಠ, ಕರ್ನಾಟಕ ಮೂಲದ ಎಸ್. ವಿಗ್ನೇಶ್ ಶಿಶಿರ್, ಸಿಬಿಐ ಹಾಗೂ ಇಡಿಗೆ ನೋಟಿಸ್ ಜಾರಿ ಮಾಡಿದೆ.
ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸದ್ಯ ಹೈಕೋರ್ಟ್ ವಿಚಾರಣೆಯನ್ನು ಮುಂದುವರಿಸದಂತೆ ಸೂಚಿಸಿದೆ.
ಇದರೊಂದಿಗೆ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ತಾತ್ಕಾಲಿಕವಾಗಿ ಅವರಿಗೆ ಪರಿಹಾರ ದೊರೆತಂತಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಹಾಗೂ ನೋಟಿಸ್‌ಗೆ ಪ್ರತಿಕ್ರಿಯೆಗಳ ಬಳಿಕ ಸುಪ್ರೀಂ ಕೋರ್ಟ್‌ನ ಮುಂದಿನ ಕ್ರಮ ನಿರ್ಧಾರವಾಗಲಿದೆ.

