20 ದಿನಗಳಿಂದ ಉಪವಾಸದಲ್ಲಿದ್ದ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು
x

ಸೋನಮ್ ವಾಂಗ್‌ಚುಕ್‌

20 ದಿನಗಳಿಂದ ಉಪವಾಸದಲ್ಲಿದ್ದ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


Click the Play button to hear this message in audio format

ನೀಟ್ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಖ್ಯಾತ ಪರಿಸರ ಮತ್ತು ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ಅವರನ್ನು ಶನಿವಾರ ಮುಂಜಾನೆ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಅವರ ಹೋರಾಟದ 21ನೇ ದಿನವಾಗಿದ್ದು, ಆರೋಗ್ಯ ಸ್ಥಿತಿ ತೀವ್ರವಾಗಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇಂದು (ಜುಲೈ 18) ಬೆಳಗಿನ ಜಾವ ಸೋನಮ್ ವಾಂಗ್‌ಚುಕ್ ಅವರು ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರೊಂದಿಗೆ ಕುಳಿತಿದ್ದಾಗ, ನಾಗರಿಕ ಉಡುಪಿನಲ್ಲಿದ್ದ (ಸಿವಿಲ್ ಡ್ರೆಸ್) ದೆಹಲಿ ಪೊಲೀಸರು ಹಠಾತ್ತನೆ ಸ್ಥಳಕ್ಕೆ ಆಗಮಿಸಿದರು. ಅಲ್ಲಿ ಪರದೆಗಳನ್ನು ಕಟ್ಟಿ, ಸುತ್ತಲಿದ್ದವರಿಗೆ ಏನು ನಡೆಯುತ್ತಿದೆ ಎಂದು ತಿಳಿಯುವ ಮುನ್ನವೇ ವಾಂಗ್ಚುಕ್ ಅವರನ್ನು ಅತ್ಯಂತ ವೇಗವಾಗಿ ಅಲ್ಲಿಂದ ಕರೆದೊಯ್ದರು.

ಈ ಸಂದರ್ಭದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಕಾರ್ಯಕರ್ತರು ಪೊಲೀಸರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಆದರೂ ಪೊಲೀಸರು ಯಾವುದೇ ಗಲಾಟೆಗೆ ಅವಕಾಶ ನೀಡದೆ ಶಾಂತಿಯುತವಾಗಿ 59 ವರ್ಷದ ವಾಂಗ್ಚುಕ್ ಅವರನ್ನು ವಾಹನದಲ್ಲಿ ಕೂರಿಸಿಕೊಂಡು ಸ್ಥಳದಿಂದ ನಿರ್ಗಮಿಸಿದರು. ಸೋನಂ ವಾಂಗ್ಚುಕ್ ಅವರ ಪ್ರಾಣ ಅತ್ಯಂತ ಅಮೂಲ್ಯವಾಗಿದ್ದು, ಅವರ ಆರೋಗ್ಯದ ಸ್ಥಿತಿಯನ್ನು ಪ್ರತಿದಿನ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕು ಮತ್ತು ಅಗತ್ಯ ಬಿದ್ದರೆ ತಕ್ಷಣವೇ ವೈದ್ಯಕೀಯ ಹಸ್ತಕ್ಷೇಪ ಮಾಡಬೇಕು ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗಷ್ಟೇ ನೀಡಿದ್ದ ಕಟ್ಟುನಿಟ್ಟಿನ ಆದೇಶದನ್ವಯವೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮೈಕ್ ಮೂಲಕ ಸಾರ್ವಜನಿಕ ಪ್ರಕಟಣೆ ಹೊರಡಿಸಿದರು.

ಕಳೆದ ಕೆಲವು ದಿನಗಳಿಂದ ಬಿಡುಗಡೆಯಾಗಿದ್ದ ವೈದ್ಯಕೀಯ ಬುಲೆಟಿನ್‌ಗಳು ಸೋನಂ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ತೀವ್ರ ಕಳವಳ ಮೂಡಿಸಿದ್ದವು. ನಿರಂತರ ಉಪವಾಸದಿಂದಾಗಿ ಅವರು ಈಗಾಗಲೇ ಸುಮಾರು 8 ಕೆಜಿಗಿಂತಲೂ ಹೆಚ್ಚು ತೂಕ ಕಳೆದುಕೊಂಡಿದ್ದು, ಅವರ ಶಾರೀರಿಕ ಸ್ಥಿತಿ ಗಂಭೀರವಾಗಿತ್ತು. ಹೈಕೋರ್ಟ್‌ನಲ್ಲಿ ಈ ಕುರಿತ ವಿಚಾರಣೆ ನಡೆಯುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ದೆಹಲಿ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಅವರಿಗೆ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

Read More
Next Story