
ಮೇಕೆದಾಟು ಯೋಜನೆ ವಿರುದ್ಧ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಮರು ಪರಿಶೀಲನಾ ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಮತ್ತೆ ತನ್ನ ವಿರೋಧವನ್ನು ಬಲವಾಗಿ ಪ್ರಕಟಿಸಿದೆ.
ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ 'ಮೇಕೆದಾಟು ಸಮತೋಲನ ಜಲಾಶಯ' ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತಮಿಳುನಾಡಿನ ಮರು ಪರಿಶೀಲನಾ ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಮತ್ತೆ ತನ್ನ ವಿರೋಧವನ್ನು ಬಲವಾಗಿ ಪ್ರಕಟಿಸಿದೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಕರ್ನಾಟಕಕ್ಕೆ ಈ ಯೋಜನೆಗೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ವಿಜಯ್, ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಮೇಕೆದಾಟು ಯೋಜನೆ ಸುಪ್ರೀಂಕೋರ್ಟ್‌ನ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ. ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವ ಮೂಲಕ ಕರ್ನಾಟಕವು ಕೆಳ ಹಂತದ ರಾಜ್ಯವಾಗಿರುವ ತಮಿಳುನಾಡಿನ ನೀರಿನ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಯೋಜನೆಯ ಕುರಿತು ಇತ್ತೀಚೆಗೆ ನೀಡಿರುವ ಹೇಳಿಕೆಗಳ ಬಗ್ಗೆಯೂ ತಮಿಳುನಾಡು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ.
ಕಾನೂನು ಹೋರಾಟದ ಸಿದ್ಧತೆ
ಮುಖ್ಯಮಂತ್ರಿ ವಿಜಯ್ ರಾಜ್ಯದ ಹಿರಿಯ ಅಧಿಕಾರಿಗಳು ಮತ್ತು ಕಾನೂನು ತಜ್ಞರೊಂದಿಗೆ ತುರ್ತು ಸಭೆ ನಡೆಸಿದರು. ರಾಜ್ಯದ ಹಕ್ಕುಗಳನ್ನು ಎತ್ತಿಹಿಡಿಯುವುದು ಮತ್ತು ರೈತರ ಹಿತಾಸಕ್ತಿಯನ್ನು ಕಾಪಾಡುವುದು ನಮ್ಮ ಆದ್ಯತೆ. ಸುಪ್ರೀಂ ಕೋರ್ಟ್‌ನ ತೀರ್ಪಿನ ಆಧಾರದ ಮೇಲೆ ಮತ್ತು ಕಾನೂನು ತಜ್ಞರ ಸಲಹೆಯಂತೆ, ಈ ಯೋಜನೆಯನ್ನು ತಡೆಯಲು ತಕ್ಷಣವೇ ಅಗತ್ಯವಿರುವ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸರ್ಕಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ತಮಿಳುನಾಡು ಸರ್ಕಾರವು ಹಿಂದೆ 2018ರ ನ.30 ಮತ್ತು 2022ರ ಜೂ.7 ರಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಯೋಜನೆಯನ್ನು ವಿರೋಧಿಸಿ ಅರ್ಜಿಗಳನ್ನು ಸಲ್ಲಿಸಿತ್ತು. ಇದೀಗ ಮತ್ತೆ ಕಾನೂನು ಸಮರಕ್ಕೆ ಸಿದ್ಧತೆ ನಡೆಸಲಾಗಿದೆ.
ಸುಪ್ರೀಂ ಕೋರ್ಟ್‌ನ ನಿಲುವು
2025ರ ನ.13 ರಂದು ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ತಮಿಳುನಾಡು ಸರ್ಕಾರ ಉಲ್ಲೇಖಿಸಿದೆ. ಮೇಕೆದಾಟು ಯೋಜನೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಕೇಂದ್ರ ಜಲ ಆಯೋಗವು ಮಾತ್ರ ಈ ಯೋಜನೆಯು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪಿನ ವ್ಯಾಪ್ತಿಗೆ ಬರುತ್ತದೆಯೇ ಇಲ್ಲವೇ ಎಂಬುದನ್ನು ನಿರ್ಧರಿಸಬಲ್ಲದು ಎಂದು ನ್ಯಾಯಾಲಯ ತಿಳಿಸಿತ್ತು. ಇದಾದ ನಂತರ ಪ್ರಕರಣವನ್ನು ನ್ಯಾಯಾಲಯವು ಮುಕ್ತಾಯಗೊಳಿಸಿತ್ತು. ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ. ಯೋಜನೆಯಿಂದ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಭೂಮಿಯನ್ನು ಗುರುತಿಸಲಾಗುತ್ತಿದೆ. ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಡಿಪಿಆರ್ ಸಲ್ಲಿಸಲಾಗುವುದು. ಒಮ್ಮೆ ಕೇಂದ್ರದ ಅನುಮೋದನೆ ಸಿಕ್ಕ ನಂತರ, ಭೂಮಿ ಪೂಜೆ ನೆರವೇರಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ನದಿ ನೀರಿನ ಹಂಚಿಕೆ ವಿವಾದವು ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಪುದುಚೇರಿ ನಡುವಿನ ದಶಕಗಳ ಹಳೆಯ ಸಮಸ್ಯೆಯಾಗಿದೆ. ಇದು ತಮಿಳುನಾಡು ಮತ್ತು ಕರ್ನಾಟಕದಲ್ಲಿ ಅತ್ಯಂತ ಭಾವನಾತ್ಮಕ ಮತ್ತು ಸೂಕ್ಷ್ಮ ವಿಷಯವಾಗಿದೆ. ಈ ಹಿಂದೆ ಹಲವು ಬಾರಿ ಈ ವಿವಾದವು ಎರಡು ರಾಜ್ಯಗಳ ನಡುವೆ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮತ್ತು ಆಸ್ತಿ-ಪಾಸ್ತಿ ಹಾನಿಗೆ ಕಾರಣವಾಗಿದೆ. ಈಗ ಮೇಕೆದಾಟು ವಿಚಾರದಲ್ಲಿ ವಿಜಯ್ ಅವರ ಹಸ್ತಕ್ಷೇಪದಿಂದ ವಿವಾದವು ಮತ್ತೊಮ್ಮೆ ಭುಗಿಲೇಳುವ ಆತಂಕ ಉಂಟಾಗಿದೆ.
ಮುಂದಿನ ದಿನಗಳು ನಿರ್ಣಾಯಕ
ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ಕರ್ನಾಟಕವು ತನ್ನ ಪ್ರಸ್ತಾವನೆಗಳನ್ನು ಹೇಗೆ ಮಂಡಿಸುತ್ತದೆ ಎಂಬುದು ಕುತೂಹಲ ಮೂಡಿಸಿದೆ. ಕರ್ನಾಟಕವು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯವನ್ನು ಮುಂದಿಟ್ಟುಕೊಂಡು ಯೋಜನೆಯನ್ನು ಸಮರ್ಥಿಸಿಕೊಳ್ಳುತ್ತಿದ್ದರೆ, ತಮಿಳುನಾಡು ರೈತರ ಸಂಕಷ್ಟವನ್ನು ಮುಂದಿಟ್ಟು ವಿರೋಧಿಸುತ್ತಿದೆ. ಕೇಂದ್ರ ಜಲ ಆಯೋಗದ ಅನುಮೋದನೆ ಮತ್ತು ಸುಪ್ರೀಂ ಕೋರ್ಟ್‌ನ ಮುಂದಿನ ಆದೇಶಗಳು ಈ ಯೋಜನೆಯ ಭವಿಷ್ಯವನ್ನು ನಿರ್ಧರಿಸಲಿವೆ.

