
ರಾಮನಗರದಿಂದ ಉಧಮ್‌ಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸು ಕಗೋರ್ಟ್ ಗ್ರಾಮದ ಸಮೀಪವಿರುವ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದೆ.
Udhampur Bus Accident | ಉಧಮ್‌ಪುರ ಭೀಕರ ಬಸ್ ಅಪಘಾತ: ಕಂದಕಕ್ಕೆ ಉರುಳಿದ ಬಸ್, 15 ಜನರ ದುರ್ಮರಣ
ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 15 ಜನರು ಮೃತಪಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 15 ಪ್ರಯಾಣಿಕರು ಮೃತಪಟ್ಟು ಹಲವರಿಗೆ ಗಂಭೀರ ಗಾಯಗೊಂಡಿದ್ದಾರೆ. ರಾಮನಗರದಿಂದ ಉಧಮ್‌ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಕಗೋರ್ಟ್ ಗ್ರಾಮದ ಸಮೀಪವಿರುವ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಈ ಅವಘಡ ಸಂಭವಿಸಿದೆ.
ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಈ ಅಪಘಾತ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಕಂದಕಕ್ಕೆ ಬಿದ್ದ ಬಸ್ಸಿನಿಂದ ಮೃತದೇಹಗಳನ್ನು ಮತ್ತು ಗಾಯಾಳುಗಳನ್ನು ಹೊರತೆಗೆಯಲು ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಏರ್‌ಲಿಫ್ಟ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ.
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಈ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ಉಧಮ್‌ಪುರ ಜಿಲ್ಲಾಧಿಕಾರಿ ಮಿಂಗಾ ಶೇರ್ಪಾ ಅವರೊಂದಿಗೆ ಮಾತನಾಡಿ, ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿರುವ ಅವರು, ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

