
ಅಂಚೆಪಾಳ್ಯದ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಚಿರತೆ ಕಾಣಿಸಿಕೊಂಡಿದೆ.
ಅಂಚೆಪಾಳ್ಯದಲ್ಲಿ ಆನೆ ಬಳಿಕ ಚಿರತೆ ಪ್ರತ್ಯಕ್ಷ
ಆನೆಯನ್ನು ಪತ್ತೆಹಚ್ಚಿದ ಬಳಿಕ ಸುರಕ್ಷಿತವಾಗಿ ಅರಣ್ಯ ಪ್ರದೇಶದತ್ತ ಕಳುಹಿಸಲಾಗಿದೆ. ಇದೀಗ ಅದೇ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.
ನಗರ ಹೊರವಲಯದ ಅರಣ್ಯ ಪ್ರದೇಶಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ವನ್ಯಜೀವಿಗಳ ಓಡಾಟ ಮುಂದುವರಿದಿದ್ದು, ಅಂಚೆಪಾಳ್ಯದಲ್ಲಿ ಇದೀಗ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸೋಮವಾರ ಆನೆ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದ ಪ್ರದೇಶದ ಸಮೀಪದಲ್ಲೇ ಚಿರತೆ ಸಂಚರಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಚೆಪಾಳ್ಯದ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಚಿರತೆ ಕಾಣಿಸಿಕೊಂಡಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಚಿರತೆ ಓಡಾಡುತ್ತಿರುವುದನ್ನು ಗಮನಿಸಿ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈಗಾಗಲೇ ಆನೆ ದಾಳಿಯಿಂದ ಬೆಚ್ಚಿಬಿದ್ದಿರುವ ನಿವಾಸಿಗಳು, ಅದೇ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾತ್ರಿ ಮತ್ತು ಮುಂಜಾನೆ ಸಮಯದಲ್ಲಿ ಸಂಚರಿಸಲು ಆತಂಕ ವ್ಯಕ್ತಪಡಿಸಿದ್ದಾರೆ. ವನ್ಯಜೀವಿಗಳ ನಿರಂತರ ಓಡಾಟದಿಂದ ಅರಣ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಆನೆಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ
ಇದರ ನಡುವೆ, ಅಂಚೆಪಾಳ್ಯದಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಒಂಟಿ ಕಾಡಾನೆಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಘಟನೆ ಬಳಿಕ ವಿಶೇಷ ತಂಡ ರಚಿಸಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಲಾಗಿತ್ತು.
ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ. ಚಕ್ರಪಾಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಬೆಂಗಳೂರು ದಕ್ಷಿಣ ಉಪ ವಿಭಾಗ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ರಾಮನಗರ ಆನೆ ಕಾರ್ಯಪಡೆ ಹಾಗೂ ವಿವಿಧ ವನ್ಯಜೀವಿ ವಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಆನೆಯನ್ನು ಪತ್ತೆಹಚ್ಚಿದ ಬಳಿಕ ಸುರಕ್ಷಿತವಾಗಿ ಅರಣ್ಯ ಪ್ರದೇಶದತ್ತ ಹಿಮ್ಮೆಟ್ಟಿಸಲಾಯಿತು. ಇದೀಗ ಅದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಕ್ರಮಗಳತ್ತ ಗಮನಹರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

