
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಹಾರ ಇಲಾಖೆ ದಾಳಿ ನಡೆಸಿ 8.80 ಕೋಟಿ ರೂ. ಮೌಲ್ಯದ 32,384 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಜಪ್ತಿ ಮಾಡಿದ್ದು, 266 ಮಂದಿಯನ್ನು ಬಂಧಿಸಿದೆ.
8.80 ಕೋಟಿ ರೂ. ಮೌಲ್ಯದ ಅನ್ನಭಾಗ್ಯ ಅಕ್ಕಿ ಜಪ್ತಿ; 266 ಮಂದಿ ಬಂಧನ
ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಮಾರಾಟ ಮಾಡುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ ಇಲಾಖೆ ಅಧಿಕಾರಿಗಳು ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲದ ವಿರುದ್ಧ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಒಂದೇ ತಿಂಗಳಲ್ಲಿ ರಾಜ್ಯಾದ್ಯಂತ ದಾಳಿ ನಡೆಸಿರುವ ಅಧಿಕಾರಿಗಳು, ಒಟ್ಟು 15 ಕೋಟಿ ರೂ. ಮೌಲ್ಯದ ಅನ್ನಭಾಗ್ಯ ಅಕ್ಕಿ, ಅಡುಗೆ ಅನಿಲ ಸಿಲಿಂಡರ್ ಹಾಗೂ ಪೆಟ್ರೋಲ್ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ 266 ಮಂದಿಯನ್ನು ಬಂಧಿಸಲಾಗಿದೆ.
8.80 ಕೋಟಿ ರೂ. ಮೌಲ್ಯದ ಅಕ್ಕಿ ವಶಕ್ಕೆ
ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಮಾರಾಟ ಮಾಡುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ ಇಲಾಖೆ ಅಧಿಕಾರಿಗಳು ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಬರೋಬ್ಬರಿ 8.80 ಕೋಟಿ ರೂ. ಮೌಲ್ಯದ 32,384 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಜಪ್ತಿಯಾದ ವಸ್ತುಗಳ ಪೈಕಿ ಅತಿ ಹೆಚ್ಚು ಮೌಲ್ಯ ಹೊಂದಿರುವುದು ಅನ್ನಭಾಗ್ಯ ಅಕ್ಕಿಯಾಗಿದೆ.
6.17 ಕೋಟಿ ರೂ. ಮೌಲ್ಯದ ವಾಹನ, ಇಂಧನ ಜಪ್ತಿ
ಅಕ್ರಮ ಸಾಗಣೆ ಹಾಗೂ ಮಾರಾಟಕ್ಕೆ ಬಳಸುತ್ತಿದ್ದ 6.17 ಕೋಟಿ ರೂ. ಮೌಲ್ಯದ 220 ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇದರ ಜೊತೆಗೆ 1,817 ಎಲ್ಪಿಜಿ ಸಿಲಿಂಡರ್ಗಳು ಹಾಗೂ 14,258 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟಾರೆ ಸುಮಾರು 15 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮೌಲ್ಯದ ಅಕ್ಕಿ ಜಪ್ತಿ?
ಜಿಲ್ಲಾವಾರು ಕಾರ್ಯಾಚರಣೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು ಮೌಲ್ಯದ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಕೋಲಾರದಲ್ಲಿ 3.81 ಕೋಟಿ ರೂ., ಬೆಳಗಾವಿಯಲ್ಲಿ 1.57 ಕೋಟಿ ರೂ., ಕಲಬುರಗಿಯಲ್ಲಿ 1.49 ಕೋಟಿ ರೂ. ಮೌಲ್ಯದ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ವಿಜಯಪುರ ಜಿಲ್ಲೆಯಲ್ಲಿ 1.02 ಕೋಟಿ ರೂ. ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ 91.62 ಲಕ್ಷ ರೂ. ಮೌಲ್ಯದ ಅನ್ನಭಾಗ್ಯ ಅಕ್ಕಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಡ ಕುಟುಂಬಗಳಿಗೆ ವಿತರಿಸಬೇಕಾದ ಉಚಿತ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವುದನ್ನು ತಡೆಯಲು ಆಹಾರ ಇಲಾಖೆ ಕಾರ್ಯಾಚರಣೆ ಮುಂದುವರಿಸಿದೆ.

