ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ; ಒಬ್ಬನ ಬಂಧನ
x

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ; ಒಬ್ಬನ ಬಂಧನ

ಕಗ್ಗಲೀಪುರ ಸಮೀಪದ ತಾತಗುಣಿ ಬಳಿ ಪತ್ತೆಯಾದ ಅನುಮಾನಸ್ಪದ ಬ್ಯಾಗ್‌ನಲ್ಲಿ ಜಿಲೆಟಿನ್ ಕಡ್ಡಿಗಳು ಸಿಕ್ಕಿವೆ. ಬೆಂಗಳೂರು ನಗರ ಮತ್ತು ರಾಮನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೋರಮಂಗಲದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.


ಬೆಂಗಳೂರಿನ ವಿವಿಧ ಕಾ ರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ಭದ್ರತೆಯ ಆತಂಕ ಮೂಡಿಸಿದೆ.

ಭಾನುವಾರ ಬೆಳಿಗ್ಗೆ ಎಚ್‌ಎಎಲ್‌ ವಿಮಾನ ನಿಲ್ದಾಣದ ಆವರಣದಲ್ಲಿ ಬಿಜೆಪಿ ಆಯೋಜಿಸಿದ್ದ ವಿಜಯೋತ್ಸವ ಹಾಗೂ ಅಭಿನಂದನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿ, ನಂತರ ಆರ್ಟ್‌ ಆಫ್‌ ಲೀವಿಂಗ್ ಆಶ್ರಮದ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ ಎಚ್ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದು ಹೈದರಾಬಾದ್‌ಗೆ ತೆರಳಬೇಕಿತ್ತು.

ಆದರೆ, ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಾತಗುಣಿ ಬಳಿ ಪತ್ತೆಯಾದ ಅನುಮಾನಸ್ಪದ ಬ್ಯಾಗ್‌ನಲ್ಲಿ ಜಿಲೆಟಿನ್ ಕಡ್ಡಿಗಳು ಸಿಕ್ಕಿವೆ. ಕೂಡಲೇ ಅಲರ್ಟ್‌ ಆದ ಬೆಂಗಳೂರು ನಗರ ಮತ್ತು ರಾಮನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೋರಮಂಗಲದಲ್ಲಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯ ಹಿನ್ನೆಲೆ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಗರದ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ನಂತರ ಅವರು ರಸ್ತೆ ಮಾರ್ಗವಾಗಿ ಕೆಂಗೇರಿ-ನೈಸ್ ರಸ್ತೆ ಮೂಲಕ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಹೈದರಾಬಾದ್‌ಗೆ ಪ್ರಯಾಣಿಸಬೇಕಿತ್ತು. ಈ ಹಿನ್ನೆಲೆಯಲ್ಲಿ ಮೋದಿ ಸಂಚರಿಸುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

ತಾತಗುಣಿಯಲ್ಲಿ ಪತ್ತೆಯಾದ ಸ್ಫೋಟಕ

ಸಂಚಾರ ಮಾರ್ಗದ ತಪಾಸಣೆ ನಡೆಸುತ್ತಿದ್ದ ವೇಳೆ ಕಗ್ಗಲೀಪುರ ಸಮೀಪದ ತಾತಗುಣಿ ಎಂಬಲ್ಲಿ ರಸ್ತೆ ಬದಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿದೆ. ಕೂಡಲೇ ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ, ಬ್ಯಾಗ್ನಲ್ಲಿ ಸ್ಫೋಟಕ ಜಿಲೆಟಿನ್ ಕಡ್ಡಿಗಳಿರುವುದು ದೃಢಪಟ್ಟಿದೆ. ಪ್ರಧಾನಿಯವರ ಭದ್ರತಾ ಶಿಷ್ಟಾಚಾರದ ನಡುವೆಯೇ ಈ ರೀತಿ ಸ್ಫೋಟಕ ಪತ್ತೆಯಾಗಿರುವುದು ಭದ್ರತಾ ಲೋಪದ ಅನುಮಾನಗಳನ್ನು ಹುಟ್ಟುಹಾಕಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣವೇ ತಾಂತ್ರಿಕ ತನಿಖೆ ಕೈಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಲೊಕೇಶನ್ ಆಧರಿಸಿ ಕಾರ್ಯಾಚರಣೆ ನಡೆಸಿದ ರಾಮನಗರ ಮತ್ತು ಬೆಂಗಳೂರು ನಗರ ಪೊಲೀಸರು, ಕೋರಮಂಗಲದ ಮನೆಯೊಂದರಲ್ಲಿ ಅಡಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಈ ಸ್ಫೋಟಕಗಳನ್ನು ಅಲ್ಲಿಗೆ ತಂದಿದ್ದೇಕೆ? ಇದರ ಹಿಂದೆ ಯಾರಿದ್ದಾರೆ? ಎಂಬ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಯುತ್ತಿದೆ.

ಪ್ರಧಾನಿ ಸುರಕ್ಷಿತ

ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿಯೇ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ಭದ್ರತೆಯ ದೃಷ್ಟಿಯಿಂದ ಅವರ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದ್ದು, ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಅವರು ಹೆಲಿಕಾಪ್ಟರ್ ಮೂಲಕ ತೆರಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.

"ಅನುಮಾನಾಸ್ಪದವಾಗಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ನಿಜ. ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಇದು ಭೀತಿ ಹುಟ್ಟಿಸಲು ಮಾಡಿದ ಕೃತ್ಯವೇ ಅಥವಾ ಬೇರೆ ಉದ್ದೇಶವಿದೆಯೇ ಎಂಬುದು ತನಿಖೆಯ ನಂತರವಷ್ಟೇ ತಿಳಿಯಲಿದೆ. ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ," ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Read More
Next Story