ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ; ಕನ್ನಡ ಕಡ್ಡಾಯ ಆದೇಶದ ವಿರುದ್ಧ ಪ್ರತಿಭಟನೆ
x
ಬೆಳಗಾವಿಯಲ್ಲಿ ಎಂಇಎಸ್‌ ಕಾರ್ಯಕರ್ತರು ಕನ್ನಡ ಕಡ್ಡಾಯ ಆದೇಶ ವಿರೋಧಿ ಪ್ರತಿಭಟನೆ ನಡೆಸಿದರು

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ; ಕನ್ನಡ ಕಡ್ಡಾಯ ಆದೇಶದ ವಿರುದ್ಧ ಪ್ರತಿಭಟನೆ

ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ನಗರದ ಎಸ್ಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.


ಗಡಿನಾಡು ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಸಾರ್ವಜನಿಕ ಸ್ಥಳಗಳು ಹಾಗೂ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ಆದೇಶ ವಿರೋಧಿಸಿ ಎಂಇಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಸರ್ಕಾರದ ಆದೇಶದ ಪ್ರತಿಯನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಇದ್ದರೂ ಲೆಕ್ಕಿಸದ ಎಂಇಎಸ್ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನೆಯ ಸಂದರ್ಭದಲ್ಲಿ ಎಂಇಎಸ್ ಕಾರ್ಯಕರ್ತರು, ಕರ್ನಾಟಕ ಸರ್ಕಾರದ ದಾದಾಗಿರಿ ಇಲ್ಲಿ ನಡೆಯುವುದಿಲ್ಲ ಎಂದು ಹರಿಹಾಯ್ದಿದ್ದಾರೆ.

ಬೆಳಗಾವಿ, ಖಾನಾಪುರ, ನಿಪ್ಪಾಣಿ, ಕಾರವಾರ, ಬೀದರ್ ಹಾಗೂ ಭಾಲ್ಕಿ ಪ್ರದೇಶಗಳು ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕು. ಅಲ್ಲದೆ, ಗಡಿ ಭಾಗದ ಸರ್ಕಾರಿ ಕಚೇರಿಗಳಲ್ಲಿ ಮರಾಠಿ ಭಾಷೆಯಲ್ಲೇ ನಾಮಫಲಕ ಹಾಕಬೇಕು. ಪ್ರತಿಯೊಂದು ಸರ್ಕಾರಿ ದಾಖಲೆಯನ್ನು ಮರಾಠಿಯಲ್ಲೇ ನೀಡಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಎಂಇಎಸ್ ವಿರುದ್ಧ ಕರವೇ ಸಮರ

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ನಡೆದ ಎಂಇಎಸ್‌ ಪುಂಡಾಟಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ನಗರದ ಎಸ್ಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಕರವೇ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ತಲುಪುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್ ಹಾಕಿದರು. ಈ ವೇಳೆ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.

"ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಗಡಿಯಲ್ಲಿ ಶಾಂತಿ ಕದಡುತ್ತಿರುವ ಎಂಇಎಸ್ ಮತ್ತು ಶಿವಸೇನೆಯನ್ನು ರಾಜ್ಯದಲ್ಲಿ ತಕ್ಷಣವೇ ಕಾನೂನಾತ್ಮಕವಾಗಿ ನಿಷೇಧಿಸಬೇಕು. ಸರ್ಕಾರಿ ಆದೇಶದ ಪ್ರತಿ ಹರಿದು ಹಾಕಿದ ದೇಶದ್ರೋಹಿಗಳನ್ನು ತಕ್ಷಣವೇ ಬಂಧಿಸಿ ಜೈಲಿಗಟ್ಟಬೇಕು." ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಆಗ್ರಹಿಸಿದರು.

ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ

ಪ್ರತಿಭಟನೆಯ ನಂತರ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಡಳಿತದ ಪರವಾಗಿ ಬೆಳಗಾವಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಎಂಇಎಸ್ ನಾಯಕರನ್ನು ತಕ್ಷಣವೇ ರಾಜ್ಯದಿಂದ ಗಡಿಪಾರು ಮಾಡಬೇಕು. ಇಂತಹ ಪುಂಡಾಟಿಕೆಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

Read More
Next Story