ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್
x

ಸದ್ಯದ ಪ್ರಕರಣದಲ್ಲೂ ಬೆದರಿಕೆಯ ಮೂಲದ ಕುರಿತು ಪರಿಶೀಲನೆ ನಡೆಯುತ್ತಿದ್ದು, ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ.

ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ವಿಮಾನ ಟೇಕ್‌ಆಫ್‌ಗೆ ಸಿದ್ಧವಾಗುತ್ತಿದ್ದ ಸಂದರ್ಭದಲ್ಲಿ ಸಿಬ್ಬಂದಿಗೆ ಬೆದರಿಕೆ ಪತ್ರ ಸಿಕ್ಕಿತ್ತು. ಕೂಡಲೇ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ.


Click the Play button to hear this message in audio format

ರಾಜ್ಯದಲ್ಲಿ ಇತ್ತೀಚೆಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಬಂದಿದೆ. ಲಖನೌದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನಕ್ಕೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತಕ್ಷಣ ಕಟ್ಟೆಚ್ಚರ ವಹಿಸಿದ್ದಾರೆ.

ಲಖನೌದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನ 6E-231ಕ್ಕೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ ಬಾಂಬ್ ಥ್ರೆಟ್ ಅಸೆಸ್ಮೆಂಟ್ ಕಮಿಟಿ ಸಭೆ ನಡೆಸಿ ಮುಂದಿನ ಕ್ರಮಗಳ ಕುರಿತು ಚರ್ಚಿಸಿದೆ.

ವಿಮಾನ ಮತ್ತು ಟರ್ಮಿನಲ್ ಪ್ರದೇಶದಲ್ಲಿ ತಪಾಸಣೆ

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ವಿಮಾನ ಹಾಗೂ ಟರ್ಮಿನಲ್ ಸುತ್ತಮುತ್ತ ತೀವ್ರ ತಪಾಸಣೆ ನಡೆಸಿದ್ದಾರೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಘಟನೆಯಿಂದ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ಹಿಂದೆಯೂ ಇಂಡಿಗೋ ವಿಮಾನಕ್ಕೆ ಬೆದರಿಕೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಎದುರಾಗುತ್ತಿರುವುದು ಇದೇ ಮೊದಲಲ್ಲ. ಕೆಲ ದಿನಗಳ ಹಿಂದೆ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲೂ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿತ್ತು.

ವಿಮಾನ ಟೇಕ್‌ಆಫ್‌ಗೆ ಸಿದ್ಧವಾಗುತ್ತಿದ್ದ ಸಂದರ್ಭದಲ್ಲಿ ಸಿಬ್ಬಂದಿಗೆ ಬೆದರಿಕೆ ಪತ್ರ ಸಿಕ್ಕಿತ್ತು. ಕೂಡಲೇ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದರು.

ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ

ಪ್ರಸ್ತುತ ಪ್ರಕರಣದಲ್ಲೂ ಬೆದರಿಕೆಯ ಮೂಲ ಮತ್ತು ಅದರ ಗಂಭೀರತೆಯನ್ನು ಪರಿಶೀಲಿಸಲಾಗುತ್ತಿದೆ. ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಮುಂದುವರಿಸಿದ್ದಾರೆ.

Read More
Next Story