x

ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಪಿಂಕ್‌ ಲೈನ್‌ ಮೆಟ್ರೋ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್‌ ಲೈನ್ ಉದ್ಘಾಟಿಸಲಿದ್ದಾರೆ. 7.5 ಕಿ.ಮೀ. ಉದ್ದದ ಮಾರ್ಗ ಲೋಕಾರ್ಪಣೆಯೊಂದಿಗೆ ದೇಶದ ಎರಡನೇ ಅತಿದೊಡ್ಡ ಮೆಟ್ರೋ ಜಾಲ ಹೊಂದಿದ ನಗರವಾಗಿ ಬೆಂಗಳೂರು ಹೊರಹೊಮ್ಮಲಿದೆ.


ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್‌ ಲೈನ್‌ ರೈಲು ಮಾರ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಈ ಮೂಲಕ ಬೆಂಗಳೂರು ಮೆಟ್ರೋ ಜಾಲ ಮತ್ತಷ್ಟು ವಿಸ್ತರಣೆಯಾಗಲಿದ್ದು, ದೇಶದಲ್ಲೇ ಎರಡನೇ ಅತಿದೊಡ್ಡ ಮೆಟ್ರೋ ಜಾಲ ಹೊಂದಿರುವ ನಗರ ಎಂಬ ಹೆಗ್ಗಳಿಕೆಗೆ ಬೆಂಗಳೂರು ಪಾತ್ರವಾಗಲಿದೆ. ಇದುವರೆಗೆ ಎರಡನೇ ಸ್ಥಾನದಲ್ಲಿದ್ದ ಮುಂಬೈ ನಗರವನ್ನು ಬೆಂಗಳೂರು ಹಿಂದಿಕ್ಕಲಿದೆ.

ದೆಹಲಿ ಬಳಿಕ ಅತಿ ದೊಡ್ಡ ಮೆಟ್ರೋ ಜಾಲ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನಕ್ಕೇರಲಿದೆ. ದೆಹಲಿ ಮೆಟ್ರೋ ಜಾಲ 374.5 ಕಿ.ಮೀ. ಉದ್ದವಿದ್ದರೆ, ಪಿಂಕ್‌ ಲೈನ್‌ ಉದ್ಘಾಟನೆಯ ಬಳಿಕ ಬೆಂಗಳೂರಿನ ನಮ್ಮ ಮೆಟ್ರೋ ಜಾಲ 103.6 ಕಿ.ಮೀ.ಗೆ ವಿಸ್ತರಣೆಯಾಗಲಿದೆ. ಮುಂಬೈ ಮೆಟ್ರೋ ಜಾಲ 102 ಕಿ.ಮೀ. ಉದ್ದ ಹೊಂದಿದೆ. ಕೋಲ್ಕತ್ತಾ, ಹೈದರಾಬಾದ್‌, ಚೆನ್ನೈ ಮತ್ತು ಅಹಮದಾಬಾದ್‌ ನಂತರದ ಸ್ಥಾನಗಳಲ್ಲಿವೆ.

7.5 ಕಿ.ಮೀ. ಉದ್ದದ ಮಾರ್ಗಕ್ಕೆ ಚಾಲನೆ

ಪ್ರಧಾನಿ ಮೋದಿ ಅವರು ಎಸ್‌ಜಿ ಪಾಳ್ಯ ಮೆಟ್ರೋ ನಿಲ್ದಾಣದಿಂದ ಕಾಳೇನ ಅಗ್ರಹಾರವರೆಗಿನ 7.5 ಕಿ.ಮೀ. ಉದ್ದದ ಪಿಂಕ್‌ ಲೈನ್‌ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಈ ಮಾರ್ಗದಲ್ಲಿ ಕಾಳೇನ ಅಗ್ರಹಾರ, ಹುಳಿಮಾವು, ಬಿಳೇಕಹಳ್ಳಿ, ಐಐಎಂಬಿ, ಎನ್‌ಎಸ್‌ ಪಾಳ್ಯ, ಜೆಪಿ ನಗರ 4ನೇ ಹಂತ, ಜಯದೇವ ಮತ್ತು ಎಸ್‌ಜಿ ಪಾಳ್ಯ ನಿಲ್ದಾಣಗಳು ಸೇರಿದಂತೆ ಒಟ್ಟು ಆರು ನಿಲ್ದಾಣಗಳಿವೆ ಎಂದು ಪ್ರಕಟಿತ ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗುವುದರಿಂದ ದಕ್ಷಿಣ ಬೆಂಗಳೂರಿನ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ವಿಶೇಷವಾಗಿ ಬನ್ನೇರುಘಟ್ಟ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಪರ್ಕ ವ್ಯವಸ್ಥೆ ಸುಧಾರಿಸಲಿದೆ.

ಮೋದಿ ಕಾರ್ಯಕ್ರಮದ ವೇಳಾಪಟ್ಟಿ

ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10.05ಕ್ಕೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಜಿಗಣಿ ಸಮೀಪದ ಪ್ರಶಾಂತಿ ಕುಟೀರಂನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.40ಕ್ಕೆ ಎಸ್‌ಜಿ ಪಾಳ್ಯ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, 12.45ಕ್ಕೆ ಪಿಂಕ್‌ ಲೈನ್‌ ಉದ್ಘಾಟಿಸಲಿದ್ದಾರೆ. ನಂತರ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಐಐಎಂಬಿ ಸಭಾಂಗಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಬಳಿಕ ಹೆಲಿಕಾಪ್ಟರ್‌ ಮೂಲಕ ಮೈಸೂರಿಗೆ ತೆರಳಿ, ಅಲ್ಲಿ ಮಧ್ಯಾಹ್ನ 3.30ಕ್ಕೆ ಭಾರತ್‌ ವ್ಯಾನ್‌ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಮೈಸೂರು ಕಾಸ್ಮಾಸ್‌ ತಾರಾಲಯವನ್ನು ಉದ್ಘಾಟಿಸಿ, ಸಂಜೆ 6.05ಕ್ಕೆ ದೆಹಲಿಗೆ ವಾಪಸಾಗಲಿದ್ದಾರೆ. ಪಿಂಕ್‌ ಲೈನ್‌ ಉದ್ಘಾಟನೆಯೊಂದಿಗೆ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಮತ್ತೊಂದು ಮಹತ್ವದ ಸೇರ್ಪಡೆಯಾಗಲಿದ್ದು, ಮೋದಿ ಸ್ವಾಗತಕ್ಕೆ ಎಸ್‌ಜಿ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

Read More
Next Story