
ಎಚ್‌ಎಸ್‌ಆರ್ ಲೇಔಟ್‌ನಲ್ಲೂ ಸ್ಮಾರ್ಟ್ ಪಾರ್ಕಿಂಗ್ ಜಾರಿ: ದ್ವಿಚಕ್ರ ವಾಹನಕ್ಕೆ 15, ಕಾರಿಗೆ 30 ರೂ.
ಎಚ್‌ಎಸ್‌ಆರ್ ಲೇಔಟ್‌ನ 12 ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ ಒಟ್ಟು 18.02 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.
ಬೆಂಗಳೂರು ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ವಾಹನಗಳ ನಿಲುಗಡೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮಹತ್ವದ ಹೆಜ್ಜೆಯಿಟ್ಟಿದೆ. ಈಗಾಗಲೇ ಜಯನಗರದಲ್ಲಿ ಯಶಸ್ವಿಯಾಗಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿರುವ ಪಾಲಿಕೆ, ಇದೀಗ ಎಚ್‌ಎಸ್‌ಆರ್ ಲೇಔಟ್‌ನ ಪ್ರಮುಖ ವಾಣಿಜ್ಯ ರಸ್ತೆಗಳಲ್ಲೂ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸ್ಮಾರ್ಟ್ ಪಾರ್ಕಿಂಗ್ ನಿರ್ವಹಣಾ ವ್ಯವಸ್ಥೆಯನ್ನು ಪರಿಚಯಿಸಲು ಮುಂದಾಗಿದೆ.
ಎಚ್‌ಎಸ್‌ಆರ್ ಲೇಔಟ್‌ನ 12 ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ ಒಟ್ಟು 18.02 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ರಸ್ತೆಬದಿಯಲ್ಲಿ ಅಸ್ತವ್ಯಸ್ತವಾಗಿ ವಾಹನಗಳನ್ನು ನಿಲುಗಡೆ ಮಾಡುವುದನ್ನು ತಡೆಗಟ್ಟುವುದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಹಾಗೂ ಪಾದಚಾರಿಗಳ ಸುರಕ್ಷತೆಗೆ ಆದ್ಯತೆ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಸಾವಿರಾರು ವಾಹನಗಳ ನಿಲುಗಡೆಗೆ ಅವಕಾಶ:
ಯೋಜನೆಯ ಅಡಿಯಲ್ಲಿ ಒಟ್ಟು 3,355 ದ್ವಿಚಕ್ರ ವಾಹನಗಳು ಹಾಗೂ 627ಕ್ಕೂ ಹೆಚ್ಚು ಕಾರುಗಳ ನಿಲುಗಡೆಗೆ ವ್ಯವಸ್ಥಿತ ಪಾರ್ಕಿಂಗ್ ಸ್ಥಳಗಳನ್ನು ಮೀಸಲಿಡಲಾಗುತ್ತಿದೆ. ಇದರ ಜೊತೆಗೆ ಸೈಕಲ್‌ಗಳು ಮತ್ತು ಆಟೋರಿಕ್ಷಾಗಳಿಗೂ ಪ್ರತ್ಯೇಕ ನಿಲುಗಡೆ ಸ್ಥಳಗಳನ್ನು ಕಲ್ಪಿಸಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಾಹನಗಳ ಹತ್ತುವಿಕೆ ಮತ್ತು ಇಳಿಯುವಿಕೆಗೆ ಪ್ರತ್ಯೇಕ ಜಾಗವನ್ನು ಗುರುತಿಸಲಾಗುತ್ತಿದ್ದು, ಅಂಗವಿಕಲರು ಹಾಗೂ ತುರ್ತು ಸೇವಾ ವಾಹನಗಳಿಗೂ ಮೀಸಲಾದ ಪಾರ್ಕಿಂಗ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.
ಎಐ ಕ್ಯಾಮೆರಾ ನಿಗಾ:
ನೂತನ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಇವು ವಾಹನಗಳ ನಿಲುಗಡೆಯನ್ನು ನೈಜ ಸಮಯದಲ್ಲಿ ಮೇಲ್ವಿಚಾರಣೆ ಮಾಡಲಿವೆ. ಇದರಿಂದ ಯಾವ ರಸ್ತೆಯಲ್ಲಿ ಎಷ್ಟು ವಾಹನಗಳು ನಿಲುಗಡೆಯಾಗಿವೆ ಎಂಬ ನಿಖರ ಮಾಹಿತಿ ಲಭ್ಯವಾಗುವುದರ ಜೊತೆಗೆ, ಪಾರ್ಕಿಂಗ್ ನಿಯಮ ಉಲ್ಲಂಘಿಸುವವರನ್ನು ಸುಲಭವಾಗಿ ಪತ್ತೆಹಚ್ಚಿ ಕ್ರಮ ಜರುಗಿಸಲು ಸಾಧ್ಯವಾಗಲಿದೆ. ನಗದು ವಹಿವಾಟಿನಲ್ಲಿ ನಡೆಯಬಹುದಾದ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಪಾರ್ಕಿಂಗ್ ಶುಲ್ಕವನ್ನು ಸಂಪೂರ್ಣವಾಗಿ ಡಿಜಿಟಲ್ ಪಾವತಿ ಮೂಲಕವೇ ಸಂಗ್ರಹಿಸಲಾಗುತ್ತದೆ.
ವಾಹನಗಳ ನಿಲುಗಡೆ ಶುಲ್ಕ ವಿವರ:
ಪಾರ್ಕಿಂಗ್ ನಿರ್ವಹಣೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಪಾಲಿಕೆ ನಿಗದಿಪಡಿಸಿರುವ ದರದಂತೆ, ದ್ವಿಚಕ್ರ ವಾಹನಗಳಿಗೆ ಪ್ರತಿ ಗಂಟೆಗೆ 15 ರೂಪಾಯಿ ಹಾಗೂ ಕಾರುಗಳಿಗೆ ಪ್ರತಿ ಗಂಟೆಗೆ 30 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ.
ಖಾಸಗಿ ಸಂಸ್ಥೆಗೆ ನಿರ್ವಹಣೆ ಹೊಣೆ:
ಸ್ಪರ್ಧಾತ್ಮಕ ಟೆಂಡರ್ ಪ್ರಕ್ರಿಯೆಯ ಮೂಲಕ 'ಪಾರ್ಕ್‌ಲ್ಯಾನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್' ಸಂಸ್ಥೆಯನ್ನು ಈ ಯೋಜನೆಯ ಅನುಷ್ಠಾನ, ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅವರ ಸಮ್ಮುಖದಲ್ಲಿ ಸಂಚಾರ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಸಂಸ್ಥೆಯ ಪ್ರತಿನಿಧಿಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಸಂದರ್ಭದಲ್ಲಿ ಮುಖ್ಯ ಎಂಜಿನಿಯರ್‌ಗಳಾದ ಬಸವರಾಜ್ ಕಬಾಡೆ, ಮಾಲತಿ ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್ ಜನಾರ್ದನ್ ಉಪಸ್ಥಿತರಿದ್ದರು.

