x

ಸರ್ಕಾರಿ ಶಾಲೆ ಉಳಿಸಲು ಮಕ್ಕಳು ಪೋಷಕರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಆರಂಭ

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತುಕೊಡುವ ಯೋಜನೆ ವಿರೋಧಿಸಿ ಹಾಗು ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗು ಪೋಷಕರು ಬೆಂಗಳೂರಿನ ಪ್ರೀಡಂಪಾರ್ಕಿನಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.


Click the Play button to hear this message in audio format

ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳು ಅಥವಾ ವ್ಯಕ್ತಿಗಳಿಗೆ ದತ್ತು ನೀಡುವ ರಾಜ್ಯ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತವಾಗಿದ್ದು, ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಬೀದಿಗಿಳಿದಿದ್ದಾರೆ. ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಮತ್ತು ಸರ್ಕಾರಿ ಶಾಲೆಗಳನ್ನು ಸರ್ಕಾರವೇ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿ, ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ.

ಧರಣಿಯಲ್ಲಿ ನೂರಾರು ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದು, ಶಿಕ್ಷಣ ತಜ್ಞರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ‘ದ ಫೆಡರಲ್ ಕರ್ನಾಟಕ’ ಧರಣಿ ನಿರತರನ್ನು ಮಾತನಾಡಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಸರ್ಕಾರದ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ಏಕೆ ದತ್ತು ನೀಡಬೇಕು? ನಮ್ಮ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರವೇ ಹೊರಬೇಕು. ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಇದೆ. ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಬದಲು ಖಾಸಗಿಯವರಿಗೆ ಶಾಲೆಗಳನ್ನು ವಹಿಸಿದರೆ ನಾವು ಎಲ್ಲಿ ಓದಬೇಕು? ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಇನ್ನು ಪೋಷಕರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಇದ್ದರೂ ಸರ್ಕಾರ ಈ ಬಗ್ಗೆ ಸೂಕ್ತ ಗಮನಹರಿಸುತ್ತಿಲ್ಲ. ಶಾಲೆಗಳನ್ನು ಅಭಿವೃದ್ಧಿಪಡಿಸುವ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಖಾಸಗಿಯವರಿಗೆ ದತ್ತು ನೀಡುವ ಯೋಜನೆ ರೂಪಿಸಿದೆ ಎಂದು ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ವಹಿಸಬಾರದು. ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಧರಣಿಗೆ ಬೆಂಬಲ ಸೂಚಿಸಿದ ಶಿಕ್ಷಣ ತಜ್ಞರು ಕೂಡ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಡ ಮತ್ತು ದುರ್ಬಲ ವರ್ಗಗಳ ಮಕ್ಕಳಿಗೆ ಸರ್ಕಾರಿ ಶಾಲೆಗಳೇ ಪ್ರಮುಖ ಶಿಕ್ಷಣದ ಆಶ್ರಯವಾಗಿವೆ. ಇಂತಹ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಅಗತ್ಯವೇನಿದೆ? ಸರ್ಕಾರಿ ಶಾಲೆಗಳನ್ನು ನಡೆಸಲು ಸರ್ಕಾರಕ್ಕೆ ಅಸಮರ್ಥತೆಯೇ? ಹಾಗಿದ್ದರೆ ಸರ್ಕಾರದ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸುವ ಉದ್ದೇಶವೇನು? ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ನಿಯಂತ್ರಿಸಬೇಕಾದ ಸರ್ಕಾರವೇ ಸರ್ಕಾರಿ ಶಾಲೆಗಳನ್ನು ಖಾಸಗಿಯವರ ಕೈಗೆ ಒಪ್ಪಿಸಲು ಮುಂದಾಗಿರುವುದು ವಿಪರ್ಯಾಸ ಎಂದು ಅವರು ಟೀಕಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಅಗತ್ಯ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಕಲ್ಪಿಸಿದರೆ ಅವುಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಬಹುದು. ಹೀಗಿರುವಾಗ ಶಾಲೆಗಳನ್ನು ಖಾಸಗಿಯವರಿಗೆ ವಹಿಸುವ ಬದಲು ಸರ್ಕಾರವೇ ಸಂಪೂರ್ಣ ಜವಾಬ್ದಾರಿ ವಹಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ಸರ್ಕಾರಿ ಶಾಲೆಗಳ ಉಳಿವು, ಅಭಿವೃದ್ಧಿ ಹಾಗೂ ಶಿಕ್ಷಣದ ಹಕ್ಕಿನ ರಕ್ಷಣೆಗಾಗಿ ಆರಂಭವಾಗಿರುವ ಈ ಹೋರಾಟದಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

Read More
Next Story