
ಕಾವೇರಿ ಕಿಚ್ಚು: ಸಿಎಂ ಡಿಕೆಶಿ, ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಿಕೆ
ಆ. 3ರಂದು ತಮಿಳುನಾಡು ಸಿಎಂ ವಿಜಯ್ ಆಗಮಿಸಿದರೆ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದರು. ಹೀಗಾಗಿ ಭೇಟಿ ಮುಂದೂಡಿಕೆ ಮಾಡಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದ ರಾಜ್ಯದಲ್ಲಿ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಬಿಗುವಿನ ವಾತಾವರಣದ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ನಿಗದಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿಯನ್ನು ಮುಂದೂಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ, ಕಾವೇರಿ ನೀರು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಗಸ್ಟ್ 13ರಂದು ಕನ್ನಡಪರ ಸಂಘಟನೆಗಳು 'ಕರ್ನಾಟಕ ಬಂದ್'ಗೆ ಕರೆ ನೀಡಿವೆ.
ತಮಿಳುನಾಡು ಸಿಎಂ ಭೇಟಿ ಮುಂದೂಡಿಕೆಗೆ ಮನವಿ
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಪ್ರಸ್ತುತ ನಿರ್ಮಾಣವಾಗಿರುವ ಉದ್ವಿಗ್ನ ವಾತಾವರಣದಲ್ಲಿ ತಮಿಳುನಾಡು ಮುಖ್ಯಮಂತ್ರಿಯನ್ನು ಆಹ್ವಾನಿಸುವುದು ಸೂಕ್ತವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಜಯ್ ಅವರು ಸೌಹಾರ್ದಯುತ ಮಾತುಕತೆಗೆ ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಆದರೆ, ಪ್ರಸ್ತುತ ಸನ್ನಿವೇಶದಲ್ಲಿ ಅವರು ಆಗಮಿಸಿದರೆ ಪ್ರತಿಭಟನೆಕಾರರು ಮುತ್ತಿಗೆ ಹಾಕುವ ಹಾಗೂ ಘೋಷಣೆ ಕೂಗುವ ಸಾಧ್ಯತೆಗಳಿದ್ದು, ಅದು ವಿವಾದಕ್ಕೆ ಕಾರಣವಾಗಬಹುದು. ಹೀಗಾಗಿ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸದಂತೆ ವಿಜಯ್ ಅವರಿಗೆ ಮನವಿ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಕೆಆರ್‌ಎಸ್ ಜಲಾಶಯಕ್ಕೆ ಬಿಜೆಪಿ ಮುತ್ತಿಗೆ
ಮಳೆ ಕೊರತೆಯಿಂದಾಗಿ ರಾಜ್ಯದ ಕೃಷಿ ಚಟುವಟಿಕೆಗಳು ಕುಂಠಿತವಾಗಿರುವ ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿರೋಧ ಪಕ್ಷ ಬಿಜೆಪಿ ಹಾಗೂ ರೈತ ಸಂಘಟನೆಗಳು ಕೆಆರ್‌ಎಸ್ ಜಲಾಶಯಕ್ಕೆ ಬೃಹತ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿ.ಟಿ. ರವಿ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ಮತ್ತು ಡಿಎಆರ್ ತುಕಡಿಗಳನ್ನು ನಿಯೋಜಿಸಿ ಜಲಾಶಯದ ಪ್ರವೇಶ ಮಾರ್ಗಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಆಗಸ್ಟ್ 13ರಂದು ಕರ್ನಾಟಕ ಬಂದ್ ಘೋಷಣೆ
ಬೆಂಗಳೂರಿನಲ್ಲಿ ನಡೆದ ಕನ್ನಡಪರ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ಕಾವೇರಿ ಹೋರಾಟದ ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗಿದ್ದು, ಆಗಸ್ಟ್ 13ರಂದು ಅಖಂಡ 'ಕರ್ನಾಟಕ ಬಂದ್' ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ. ವಾಟಾಳ್ ನಾಗರಾಜ್ ಅವರು ಬಂದ್ ಅನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸಭೆಯಲ್ಲಿ ಕರವೇಯ ನಾರಾಯಣಗೌಡ ಬಣ, ಪ್ರವೀಣ್ ಶೆಟ್ಟಿ ಬಣ, ಶಿವರಾಮೇಗೌಡ, ಸಾರಾ ಗೋವಿಂದು ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರದ ಅಸಮರ್ಥತೆಯಿಂದಾಗಿ ನೀರು ತಮಿಳುನಾಡಿನ ಪಾಲಾಗುತ್ತಿದೆ ಎಂದು ಆರೋಪಿಸಿರುವ ಹೋರಾಟಗಾರರು, ಆ. 3ರಂದು ತಮಿಳುನಾಡು ಸಿಎಂ ವಿಜಯ್ ಆಗಮಿಸಿದರೆ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ. ಈ ಬಂದ್‌ನಿಂದಾಗಿ ಸಾರಿಗೆ, ವಾಣಿಜ್ಯ ಮಳಿಗೆಗಳು, ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಭಾನುವಾರ ಸರ್ವಪಕ್ಷ ಸಭೆ
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 4.5 ಟಿಎಂಸಿ ನೀರು ಬಿಡಲು ಆದೇಶಿಸಿರುವ ಹಿನ್ನೆಲೆಯಲ್ಲಿ, ಸಿಡಬ್ಲ್ಯೂಎಂಎ ಆದೇಶದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಮುಂದಿನ ಕಾನೂನು ಹಾಗೂ ಆಡಳಿತಾತ್ಮಕ ಹೆಜ್ಜೆಗಳ ಬಗ್ಗೆ ಚರ್ಚಿಸಲು ಭಾನುವಾರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಸರ್ವಪಕ್ಷ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿದ ಬಳಿಕವೇ ಸರ್ಕಾರ ಮುಂದಿನ ಅಧಿಕೃತ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

