x

ಕ್ರೈಸ್ತರು ಭಯೋತ್ಪಾದಕರಲ್ಲ: ಆರ್ಚ್‌ ಬಿಷಪ್‌ ಡಾ. ಪೀಟರ್‌ ಮಚಾದೊ

ಬಿಜೆಪಿ ಸರ್ಕಾರ ಜಾರಿಗೆ ತಂದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವಂತೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಕಾಯ್ದೆ ಹಿಂಪಡೆಯಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.


Click the Play button to hear this message in audio format

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ಈವರೆಗೂ ಹಿಂಪಡೆಯದಿರುವುದಕ್ಕೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಕಾಯ್ದೆಯನ್ನು ಹಿಂಪಡೆಯಬೇಕು. ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಾದರೂ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ದ ಫೆಡರಲ್‌ ಕರ್ನಾಟಕದ ಜೊತೆ ಮಾತನಾಡಿರುವ ಕ್ರಿಶ್ಚಿಯನ್ ಸಮುದಾಯದ ಮುಖಂಡರು, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದ ಮತಾಂತರ ನಿಷೇಧ ಕಾಯ್ದೆಯಿಂದ ಕ್ರಿಶ್ಚಿಯನ್ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಲವಂತದ ಮತಾಂತರ ನಡೆದರೆ ಅದನ್ನು ತಡೆಯಲು ಈಗಾಗಲೇ ಸಾಕಷ್ಟು ಕಾನೂನುಗಳು ಮತ್ತು ನಿಯಮಗಳಿವೆ. ಅಂತಹ ಪ್ರಕರಣಗಳು ಕಂಡುಬಂದರೆ ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲೇ ಕ್ರಮ ಕೈಗೊಳ್ಳಬಹುದು. ಅದನ್ನು ಬಿಟ್ಟು ಇಡೀ ಕ್ರಿಶ್ಚಿಯನ್ ಸಮುದಾಯವನ್ನು ಅನುಮಾನದಿಂದ ನೋಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯಲ್ಲಿನ ಕಠಿಣ ನಿಯಮಗಳ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಲವಂತದ ಮತಾಂತರ ಆರೋಪಕ್ಕೆ 10 ವರ್ಷಗಳವರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿ ದಂಡ ಹಾಗೂ ಮತಾಂತರಕ್ಕೂ ಮುನ್ನ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಆರು ತಿಂಗಳ ಪ್ರಕ್ರಿಯೆ ಅನುಸರಿಸುವಂತಹ ನಿಯಮಗಳು ಮಾನವ ಹಕ್ಕುಗಳಿಗೆ ವಿರುದ್ಧವಾಗಿವೆ ಎಂದು ದೂರಿದ್ದಾರೆ.

ಬಿಜೆಪಿ ಸರ್ಕಾರ ಈ ಕಾಯ್ದೆ ಜಾರಿಗೆ ತರುವ ಸಂದರ್ಭದಲ್ಲಿ ಸಮುದಾಯದ ಮುಖಂಡರು ವಿರೋಧ ವ್ಯಕ್ತಪಡಿಸಿ, ಇಂತಹ ಕಾನೂನಿನ ಅಗತ್ಯವಿಲ್ಲ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದ್ದರೂ ಸರ್ಕಾರ ಅದಕ್ಕೆ ಸ್ಪಂದಿಸಲಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಕ್ಷಣವೇ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಭರವಸೆ ನೀಡಿತ್ತು. ಆದರೆ, ಮೂರು ವರ್ಷ ಕಳೆದರೂ ಆ ಭರವಸೆ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದಾಗ ವಿಧಾನಪರಿಷತ್ತಿನಲ್ಲಿ ಅಗತ್ಯ ಸಂಖ್ಯಾಬಲ ಇಲ್ಲದ ಕಾರಣ ಕಾಯ್ದೆ ಹಿಂಪಡೆಯುವ ಪ್ರಕ್ರಿಯೆಗೆ ಅಡ್ಡಿಯಾಗುತ್ತಿದೆ ಎಂಬ ಉತ್ತರ ನೀಡಲಾಗಿತ್ತು. ಇದೀಗ ಮೇಲ್ಮನೆಯಲ್ಲಿ ಸಂಖ್ಯಾಬಲದ ಪರಿಸ್ಥಿತಿ ಬದಲಾಗಿರುವುದರಿಂದ ಕಾಯ್ದೆ ಹಿಂಪಡೆಯಲು ಅವಕಾಶವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವಂತೆ ಸರ್ಕಾರವನ್ನು ಮತ್ತೊಮ್ಮೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಈ ಉದ್ದೇಶದಿಂದಲೇ ಸಮುದಾಯದ ವತಿಯಿಂದ ಶಾಂತಿ ಸಭೆಗಳನ್ನು ನಡೆಸಿ, ಜನರಿಗೆ ತಮ್ಮ ಬೇಡಿಕೆಗಳನ್ನು ತಿಳಿಸಲಾಗುತ್ತಿದೆ ಎಂದಿದ್ದಾರೆ.

ಅಲ್ಲದೆ, ಕೆಲವೇ ಕೆಲವು ಘಟನೆಗಳನ್ನು ಮುಂದಿಟ್ಟುಕೊಂಡು ಇಡೀ ಕ್ರಿಶ್ಚಿಯನ್ ಸಮುದಾಯಕ್ಕೆ ಕೆಟ್ಟ ಹೆಸರು ತರುವುದು ಸರಿಯಲ್ಲ. ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಸಮುದಾಯವನ್ನೇ ಹೊಣೆಗಾರರನ್ನಾಗಿ ಮಾಡಬಾರದು. ಕ್ರಿಶ್ಚಿಯನ್ನರನ್ನು ಅಪಾಯಕಾರಿ ವ್ಯಕ್ತಿಗಳಂತೆ ಬಿಂಬಿಸುವುದು ಮತ್ತು ಅವರ ಮೇಲೆ ಅನಗತ್ಯ ನಿರ್ಬಂಧಗಳನ್ನು ಹೇರುವುದು ನ್ಯಾಯಸಮ್ಮತವಲ್ಲ ಎಂದು ಅವರು ಹೇಳಿದ್ದಾರೆ.

Read More
Next Story