ಬರ ಪರಿಹಾರ ಸಿಗದಿದ್ದರೆ ದೆಹಲಿ ಚಲೋ: ಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ
x

ಬರ ಪರಿಹಾರ ಸಿಗದಿದ್ದರೆ ದೆಹಲಿ ಚಲೋ: ಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಮಸೂದೆಯಿಂದ ರಾಜ್ಯಕ್ಕೆ ಆಗುವ ಅನ್ಯಾಯ ಕುರಿತು ದೆಹಲಿಯಲ್ಲಿ ಕೇರಳ, ತೆಲಂಗಾಣ ಸಿಎಂ ಜತೆ ಸೇರಿ ಚರ್ಚೆ ನಡೆಸಲಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.


Click the Play button to hear this message in audio format

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಈವರೆಗೂ ಒಂದು ರೂಪಾಯಿ ನೆರವನ್ನೂ ನೀಡಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಕೇಂದ್ರದಿಂದ ನ್ಯಾಯಯುತ ಪರಿಹಾರ ಪಡೆಯಲು ಎಲ್ಲಾ ರೀತಿಯ ಹೋರಾಟಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಬೆಳಗಾವಿ ವಿಧಾನಮಂಡಲ ಅಧಿವೇಶನ ಮುಕ್ತಾಯವಾಗುವ ಒಳಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರವನ್ನು ಬಿಡುಗಡೆ ಮಾಡದೇ ಇದ್ದರೆ, ಅಧಿವೇಶನ ಮುಗಿದ ತಕ್ಷಣವೇ ʻದೆಹಲಿ ಚಲೋʼ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಂದು ವೇಳೆ ಕೇಂದ್ರ ಸರ್ಕಾರವು ಬರ ಪರಿಹಾರ ನೀಡಲು ವಿಫಲವಾದರೆ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ" ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ರಾಜ್ಯದ ಬರ ಪರಿಸ್ಥಿತಿಯ ಕುರಿತು ಚರ್ಚಿಸಲು ನಮ್ಮ ಸರ್ವಪಕ್ಷ ನಿಯೋಗದ ಭೇಟಿಗೆ ಸಮಯ ನೀಡುವಂತೆ ಪ್ರಧಾನಮಂತ್ರಿಗಳಿಗೂ ಈಗಾಗಲೇ ಮನವಿ ಮಾಡಲಾಗಿದೆ. ಮಾಧ್ಯಮಗಳ ಎದುರೇ ಈ ವಿಚಾರವನ್ನು ಪ್ರಧಾನಮಂತ್ರಿಗಳ ಮುಂದೆ ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು.

ಕನ್ನಡ ಧ್ವಜ ಮಾನ್ಯತೆ ಮತ್ತು ಮೀಸಲಾತಿ ಹೆಚ್ಚಳಕ್ಕೆ 9ನೇ ಅನುಸೂಚಿಯ ಬಲ

ರಾಜ್ಯದ ಅಸ್ಮಿತೆ ಮತ್ತು ಸಾಮಾಜಿಕ ನ್ಯಾಯದ ವಿಚಾರಗಳ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಮ್ಮ ರಾಜ್ಯ ಹಾಗೂ ಕನ್ನಡಿಗರ ಸ್ವಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ನೀಡುವ ವಿಚಾರವನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಮಾಡಲಾಗುವುದು ಎಂದು ಘೋಷಿಸಿದರು. ಇದೇ ವೇಳೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ನ್ಯಾಯಾಲಯದಲ್ಲಿ ಎದುರಾಗಿರುವ ಹಿನ್ನಡೆಯನ್ನು ತಪ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು. ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ, ಅದನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಬೇಕು ಎಂಬುದು ರಾಜ್ಯ ಸರ್ಕಾರದ ಒಮ್ಮತದ ತೀರ್ಮಾನವಾಗಿದೆ ಎಂದು ಅವರು ವಿವರಿಸಿದರು.

ಕ್ಷೇತ್ರ ಪುನರ್ವಿಂಗಡಣೆ ವಿರೋಧಿಸಿ ದೆಹಲಿಯಲ್ಲಿ ದಕ್ಷಿಣ ರಾಜ್ಯಗಳ ಸಿಎಂಗಳ ಸಭೆ

ಕೇಂದ್ರ ಸರ್ಕಾರ ತರಲು ಹೊರಟಿರುವ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಮಸೂದೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ತಮ್ಮ ದೆಹಲಿ ಪ್ರವಾಸದ ಉದ್ದೇಶವನ್ನು ವಿವರಿಸಿದರು. "ದೆಹಲಿಗೆ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಮಸೂದೆಯಿಂದ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಕುರಿತು ಭಾನುವಾರ ದೆಹಲಿಯಲ್ಲಿ ಕೇರಳ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಸೇರಿ ಮಹತ್ವದ ಚರ್ಚೆ ನಡೆಸಲಿದ್ದೇವೆ" ಎಂದರು.

ಈ ಪ್ರಕ್ರಿಯೆಯಿಂದ ಉತ್ತರ ಭಾರತದ ರಾಜ್ಯಗಳಲ್ಲಿ ಎಷ್ಟು ಲೋಕಸಭಾ ಸ್ಥಾನಗಳು ಹೆಚ್ಚಾಗಲಿವೆ ಮತ್ತು ದಕ್ಷಿಣ ಭಾರತದ ರಾಜ್ಯಗಳ ಪರಿಸ್ಥಿತಿ, ಸಾಧಕ-ಬಾಧಕಗಳು ಏನಾಗಲಿವೆ ಎಂಬುದರ ಕುರಿತು ಕೂಲಂಕಷವಾಗಿ ಸಮಾಲೋಚನೆ ನಡೆಸಲಾಗುವುದು. ಕೇಂದ್ರ ಸಚಿವ ಸಂಪುಟದಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದ್ದು, ಸದ್ಯಕ್ಕೆ ಮಾಧ್ಯಮಗಳ ವರದಿಯ ಮಾಹಿತಿ ಮಾತ್ರ ನಮಗೆ ಲಭ್ಯವಾಗಿದೆ. ಈ ಹಿಂದೆ ತಮಿಳುನಾಡಿನ ಡಿಎಂಕೆ ಪಕ್ಷ ಕರೆದಿದ್ದ ಸಭೆಯಲ್ಲೂ ತಾವು ಭಾಗವಹಿಸಿದ್ದನ್ನು ಸ್ಮರಿಸಿದ ಅವರು, ಬಿಜೆಪಿಯವರು ಕೇವಲ ತಮ್ಮ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಕ್ಷೇತ್ರ ಪುನರ್ವಿಂಗಡಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. "ಮಹಿಳಾ ಮೀಸಲಾತಿಗೆ ನಮ್ಮ ಸಂಪೂರ್ಣ ಒಪ್ಪಿಗೆಯಿದೆ. ಆದರೆ, ಕ್ಷೇತ್ರ ಪುನರ್ವಿಂಗಡಣೆಗೆ ನಮ್ಮ ಸ್ಪಷ್ಟ ವಿರೋಧವಿದೆ. ನಾವು ನಮ್ಮ ರಾಜ್ಯದ ಸಾರ್ವಭೌಮತ್ವ ಮತ್ತು ಹಿತಾಸಕ್ತಿಯನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತೇವೆ" ಎಂದು ದೃಢವಾಗಿ ಹೇಳಿದರು.

ದಕ್ಷಿಣ ರಾಜ್ಯಗಳ ಧ್ವನಿ ಅಡಗಿಸಲು ಸಾಧ್ಯವಿಲ್ಲ – ಕುಮಾರಸ್ವಾಮಿಗೆ ತಿರುಗೇಟು

ಎನ್‌ಡಿಎ ಸರ್ಕಾರವು ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ ಸಿಎಂ, ಇದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಘೋರ ಅನ್ಯಾಯವಾಗಲಿದ್ದು, ಈ ರಾಜ್ಯಗಳು ಸಂಸತ್ತಿನಲ್ಲಿ ಅಲ್ಪಸಂಖ್ಯಾತರಾಗುವ ಅಪಾಯವಿದೆ ಎಂದರು. ದೇಶದ ಆರ್ಥಿಕ ಪ್ರಗತಿಗೆ ದಕ್ಷಿಣ ಭಾರತದ ರಾಜ್ಯಗಳು ಅಪಾರ ಶಕ್ತಿ ತುಂಬುತ್ತಿವೆ. ಹೀಗಿರುವಾಗ ನಮ್ಮ ರಾಜ್ಯಗಳ ಹಿತಾಸಕ್ತಿಗಾಗಿ ನಾವು ಧ್ವನಿ ಎತ್ತೇ ಎತ್ತುತ್ತೇವೆ; ಯಾರಿಂದಲೂ ನಮ್ಮ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದರು. ಸಿದ್ದರಾಮಯ್ಯ ಅವರು ಹೇಳಿದಂತೆ, ಈ ಮಹತ್ವದ ವಿಚಾರವಾಗಿ ಕೇಂದ್ರ ಸರ್ಕಾರವು ಸರ್ವಪಕ್ಷ ಸಭೆ ಕರೆದು ಚರ್ಚೆ ಮಾಡುವ ನಿರೀಕ್ಷೆ ಇತ್ತು ಎಂದು ಅವರು ಅಭಿಪ್ರಾಯಪಟ್ಟರು. ಕನ್ನಡಿಗರ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಮಸೂದೆಗೆ ಬೆಂಬಲ ನೀಡುತ್ತಿದ್ದೇವೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಶಿವಕುಮಾರ್, "ಅವರ ಅಧಿಕಾರದ ಕಾಲದಲ್ಲಿ ಕನ್ನಡಿಗರು ಹಾಗೂ ಕರ್ನಾಟಕಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಅವರು ಮೊದಲು ಹೇಳಲಿ. ಸುಮ್ಮನೆ ಖಾಲಿ ಮಾತು ಆಡುವುದಲ್ಲ" ಎಂದು ಟಾಂಗ್ ನೀಡಿದರು.

ಆಶಾ ಕಾರ್ಯಕರ್ತೆಯರನ್ನು ಎತ್ತಿ ಕಟ್ಟುತ್ತಿರುವ ಎನ್‌ಡಿಎ ನಾಯಕರು

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮತ್ತು ಬೇಡಿಕೆಗಳ ಕುರಿತು ಪ್ರತಿಕ್ರಿಯಿಸಿದ ಸಿಎಂ, " ನಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಸಚಿವರು ಆಶಾ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿದ್ದಾರೆ" ಎಂದು ತಿಳಿಸಿದರು. ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಸಹಾಯ ಮಾಡಬೇಕು ಎಂದು ಎನ್‌ಡಿಎ ನಾಯಕರು ಎಂದಿಗೂ ಮುಂದೆ ಬರಲಿಲ್ಲ; ಬದಲಾಗಿ, ಈಗ ಆಶಾ ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ರಾಜಕೀಯ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಕೇವಲ 2 ಸಾವಿರ ರೂಪಾಯಿ ನೀಡುತ್ತಿರುವುದು ಬಿಟ್ಟರೆ ಬೇರೆ ಏನೂ ನೀಡುತ್ತಿಲ್ಲ. ಆಶಾ ಕಾರ್ಯಕರ್ತೆಯರ ಕಲ್ಯಾಣದ ವಿಚಾರದಲ್ಲಿ ರಾಜ್ಯ ಸರ್ಕಾರದ ಜವಾಬ್ದಾರಿ ಎಷ್ಟಿದೆಯೋ, ಕೇಂದ್ರ ಸರ್ಕಾರದ ಜವಾಬ್ದಾರಿಯೂ ಅಷ್ಟೇ ಇದೆ. ಆದಾಗ್ಯೂ, ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಕೊಟ್ಟಿರುವ ಮಾತನ್ನು ಖಂಡಿತವಾಗಿ ಉಳಿಸಿಕೊಳ್ಳುತ್ತದೆ ಎಂದು ಸಿಎಂ ಭರವಸೆ ನೀಡಿದರು.

Read More
Next Story