ಬೆಂಗಳೂರು ಹೊರತುಪಡಿಸಿ 5 ನಗರಗಳಲ್ಲಿ ಕೈಗಾರಿಕಾ ಅಭಿವೃದ್ಧಿ; ಸಿಎಂ ಡಿಕೆಶಿ ಸೂಚನೆ
x

ಬೆಂಗಳೂರು ಹೊರತುಪಡಿಸಿ 5 ನಗರಗಳಲ್ಲಿ ಕೈಗಾರಿಕಾ ಅಭಿವೃದ್ಧಿ; ಸಿಎಂ ಡಿಕೆಶಿ ಸೂಚನೆ

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ರಾಜ್ಯದ ಇತರ ನಗರಗಳಲ್ಲೂ ಕೈಗಾರಿಕೆಗಳ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದರು.


ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ಬೆಂಗಳೂರು ಹೊರತುಪಡಿಸಿ ಮೂಲಸೌಕರ್ಯ ಹೊಂದಿರುವ ಐದು ಸೂಕ್ತ ನಗರಗಳನ್ನು ಗುರುತಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ರಾಜ್ಯದ ಇತರ ನಗರಗಳಲ್ಲೂ ಕೈಗಾರಿಕೆಗಳ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದರು.

ಹೂಡಿಕೆದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ ವಿಶೇಷ ರಿಯಾಯಿತಿ ಹಾಗೂ ಸೌಲಭ್ಯಗಳನ್ನು ಒದಗಿಸುವ ಮೂಲಕ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶವಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಹೊಂದಿರುವ ಐದು ನಗರಗಳನ್ನು ಗುರುತಿಸಿ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಏಕಗವಾಕ್ಷಿ ಅನುಮೋದನೆ ವ್ಯವಸ್ಥೆ ಮತ್ತಷ್ಟು ಬಲಪಡಿಸಲು ಸೂಚನೆ

ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಅನುಮೋದನೆ ಪ್ರಕ್ರಿಯೆಯನ್ನು ಮತ್ತಷ್ಟು ಸರಳ ಹಾಗೂ ವೇಗಗೊಳಿಸುವ ಅಗತ್ಯವಿದೆ ಎಂದು ಸಿಎಂ ಹೇಳಿದರು. ಏಕಗವಾಕ್ಷಿ ಅನುಮೋದನೆ ವ್ಯವಸ್ಥೆಯಲ್ಲಿ ಒಳಗೊಂಡಿರುವ ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಸಚಿವರೊಂದಿಗೆ ಚರ್ಚಿಸುವುದಾಗಿಯೂ ಅವರು ತಿಳಿಸಿದರು. ಪ್ರಸ್ತುತ ಏಕಗವಾಕ್ಷಿ ವ್ಯವಸ್ಥೆಯಲ್ಲಿ 22 ಇಲಾಖೆಗಳು ಹಾಗೂ 119 ಸೇವೆಗಳನ್ನು ಸಂಯೋಜಿಸಲಾಗಿದ್ದು, ಡಿಜಿಟಲ್ ಮತ್ತು ಸಮಯೋಚಿತ ಅನುಮೋದನೆಗೆ ಹೆಚ್ಚಿನ ಒತ್ತು ನೀಡಲಾಗಿದೆ.

ನೀತಿ ಆಯೋಗದ ಹೂಡಿಕೆದಾರ ಸ್ನೇಹಿ ಸೂಚ್ಯಂಕದಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದ್ದು, ರಾಜ್ಯದ ಸ್ಥಾನವನ್ನು ಇನ್ನಷ್ಟು ಉತ್ತಮಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಆಂಧ್ರ ಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು ಹಾಗೂ ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳು ಹೂಡಿಕೆ ಆಕರ್ಷಿಸಲು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಹೂಡಿಕೆದಾರರು ಕರ್ನಾಟಕದಿಂದ ನಿರೀಕ್ಷಿಸುತ್ತಿರುವ ಸುಧಾರಣೆಗಳು ಮತ್ತು ಸೌಲಭ್ಯಗಳ ಬಗ್ಗೆಯೂ ಸಮಾಲೋಚನೆ ನಡೆಯಿತು.

ಉತ್ಪಾದನಾ ವಲಯದಲ್ಲಿ 5.58 ಲಕ್ಷ ಕೋಟಿ ರೂ. ಹೂಡಿಕೆ

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕವು ತಯಾರಿಕಾ ವಲಯದಲ್ಲಿ 5.58 ಲಕ್ಷ ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ಮೂಲಕ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸೆಮಿಕಂಡಕ್ಟರ್, ಏರೋಸ್ಪೇಸ್ ಮತ್ತು ಡಿಫೆನ್ಸ್, ಕ್ಲೀನ್ ಮೊಬಿಲಿಟಿ, ಸೆಲ್ ಉತ್ಪಾದನೆ ಸೇರಿದಂತೆ ವಿವಿಧ ಉದಯೋನ್ಮುಖ ವಲಯಗಳಲ್ಲಿ ಹೂಡಿಕೆ ಸೆಳೆಯಲು ರಾಜ್ಯ ಸರ್ಕಾರ ವಿಶೇಷ ಉತ್ತೇಜನ ನೀಡುತ್ತಿದೆ ಎಂದು ವಿವರಿಸಿದರು.

ರಾಜ್ಯದ ಉತ್ಪಾದನಾ ವಲಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ಉತ್ಪಾದನಾ ಮಂಥನ’ ಸಮಾಲೋಚನಾ ಸಭೆಯಲ್ಲಿ ಸುಮಾರು 80 ಸಿಇಒಗಳೊಂದಿಗೆ ಚರ್ಚೆ ನಡೆಸಲಾಗಿತ್ತು. ಸಭೆಯಲ್ಲಿ ಬಂದ 55 ಸಲಹೆಗಳ ಪೈಕಿ ಈಗಾಗಲೇ 35 ಸಲಹೆಗಳನ್ನು ಬಗೆಹರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More
Next Story