
ಸರ್ಕಾರಿ ಶಾಲೆಗಳ ಪುನರುಜ್ಜೀವನ: ಜೂ.1 ರಿಂದ ರಾಜ್ಯದಲ್ಲಿ ಕೆಪಿಎಸ್ ಯುಗ ಆರಂಭ
ಪ್ರತಿ ಕೆಪಿಎಸ್ ಶಾಲೆಯಲ್ಲಿ 1,200 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡಲಾಗುತ್ತದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟು 800 ಶಾಲೆಗಳನ್ನು ಸಂಪೂರ್ಣವಾಗಿ ಸಿದ್ಧಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯವೈಖರಿ ಹಾಗೂ ಮುಂಬರುವ ಶೈಕ್ಷಣಿಕ ವರ್ಷದ ಗುರಿಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆಯನ್ನು ನಡೆಸಿದರು. ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಯ ವಿಸ್ತರಣೆ ಮಾಡುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಜೂನ್ 1ರಂದು ಶಿವಮೊಗ್ಗದಲ್ಲಿ ಈ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುವುದು. ಪ್ರತಿ ಕೆಪಿಎಸ್ ಶಾಲೆಯಲ್ಲಿ 1,200 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡಲಾಗುತ್ತದೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯುವುದು ಈ ಯೋಜನೆಯ ವಿಶೇಷತೆ. ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಒಟ್ಟು 800 ಶಾಲೆಗಳನ್ನು ಸಂಪೂರ್ಣವಾಗಿ ಸಿದ್ಧಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಲೆಗಳಿಗೆ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಶಾಲಾ ಬಸ್ ವ್ಯವಸ್ಥೆಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬುದನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಶಿಕ್ಷಕರ ನೇಮಕಾತಿ ಮತ್ತು ಬಲವರ್ಧನೆ
ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಅರ್ಹ ಶಿಕ್ಷಕರ ಅವಶ್ಯಕತೆಯನ್ನು ಮನಗಂಡಿರುವ ಸರ್ಕಾರ, 15 ಸಾವಿರ ಶಿಕ್ಷಕರ ಭರ್ತಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಆರ್ಥಿಕ ಇಲಾಖೆಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ. ಅಲ್ಲದೆ, ಪಠ್ಯಪುಸ್ತಕಗಳ ಜೊತೆಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸುವ ಬೇಡಿಕೆಯನ್ನು ಪರಿಶೀಲನೆ ನಡೆಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಭೂತಪೂರ್ವ ಫಲಿತಾಂಶ
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾಧನೆಯನ್ನು ಶ್ಲಾಘಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶಗಳು ಕಳೆದ ವರ್ಷಕ್ಕಿಂತ ಗಣನೀಯವಾಗಿ ಏರಿಕೆಯಾಗಿವೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಪ್ರಮಾಣ ಶೇ. 94.10ರಷ್ಟಿದ್ದು, ಕಳೆದ ವರ್ಷಕ್ಕಿಂತ ಶೇ. 14.06 ಹೆಚ್ಚಳವಾಗಿದೆ. ಅಚ್ಚರಿಯ ಸಂಗತಿಯೆಂದರೆ, ಶೇ. 100 ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 2,393ಕ್ಕೆ ಏರಿದೆ (ಕಳೆದ ವರ್ಷ ಇದು 766 ಇತ್ತು). ದ್ವಿತೀಯ ಪಿಯುಸಿ ಫಲಿತಾಂಶವು ಶೇ. 86.48ಕ್ಕೆ ತಲುಪಿದ್ದು, ಕಳೆದ ವರ್ಷಕ್ಕಿಂತ ಶೇ. 13ರಷ್ಟು ಸುಧಾರಣೆ ಕಂಡಿದೆ.
ವಿದ್ಯಾರ್ಥಿಗಳ ಸಾಮಾಜಿಕ ಹಿನ್ನೆಲೆಯ ಆಧಾರದ ಮೇಲೆ ಫಲಿತಾಂಶ ಸುಧಾರಣೆಯ ವಿಶ್ಲೇಷಣೆ ನಡೆಸಿದಾಗ, ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಕಾರ್ಯಕ್ರಮಗಳ ಫಲಿತಾಂಶ ಸ್ಪಷ್ಟವಾಗಿ ಕಾಣಿಸಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸಾಧನೆ ಶೇ. 18ರಷ್ಟು ಹೆಚ್ಚಳವಾಗಿದೆ. ಉಳಿದ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ವಿಭಾಗಗಳಲ್ಲೂ ಶೇ. 8ರಿಂದ ಶೇ. 18ರವರೆಗೆ ಗಮನಾರ್ಹ ಪ್ರಗತಿಯಾಗಿದೆ. ಅಚ್ಚರಿಯೆಂದರೆ, ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೇ. 94.80 ಮತ್ತು ನಗರದಲ್ಲಿ ಶೇ. 93.20 ಉತ್ತೀರ್ಣರಾಗಿದ್ದಾರೆ. ಪಿಯುಸಿಯಲ್ಲೂ ಗ್ರಾಮೀಣ ವಿದ್ಯಾರ್ಥಿಗಳು (ಶೇ. 87.62) ನಗರದ ವಿದ್ಯಾರ್ಥಿಗಳಿಗಿಂತ (ಶೇ. 85.95) ಉತ್ತಮ ಸಾಧನೆ ತೋರಿದ್ದಾರೆ.
ಫಲಿತಾಂಶ ಸುಧಾರಣೆ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಸುಧಾರಣೆಯ ಹಿಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯಾದ್ಯಂತ ಮುಖ್ಯಮಂತ್ರಿಗಳ ಸ್ಪಷ್ಟ ನಿರ್ದೇಶನದ ಮೇರೆಗೆ ಪೋಷಕರು-ಶಿಕ್ಷಕರ ಸಭೆಗಳನ್ನು ನಡೆಸಿ ಜಾಗೃತಿ ಮೂಡಿಸಲಾಗಿತ್ತು. ಕೊರತೆಯಿದ್ದ ಕಡೆ ಅತಿಥಿ ಶಿಕ್ಷಕರನ್ನು ನೇಮಿಸಿ ಬೋಧನೆಗೆ ಅನುವು ಮಾಡಿಕೊಡಲಾಗಿತ್ತು. ರಾಜ್ಯಮಟ್ಟದಲ್ಲಿ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಹೆಚ್ಚಿಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದುಳಿದಿರುವಿಕೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು ಎಂದು ಹೇಳಿದರು.

