
ದಸರಾ ರಜೆಯಲ್ಲೂ ಸೆಮಿಸ್ಟರ್ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ
ದಸರಾ ಹಬ್ಬದ ವೇಳೆ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸುವುದನ್ನು ವಿರೋಧಿಸಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ದಸರಾ ಹಬ್ಬದ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರು ಪರೀಕ್ಷೆಗಳನ್ನು ಬಹಿಷ್ಕರಿಸಿ, ಕಾಲೇಜಿನ ಮುಖ್ಯ ದ್ವಾರದ ಎದುರು ಪ್ರತಿಭಟನೆ ನಡೆಸಿದ್ದಾರೆ.
ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಅಕ್ಟೋಬರ್ 28ರವರೆಗೆ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಕರಾವಳಿಯ ಪ್ರಮುಖ ಹಬ್ಬವಾದ ಮಂಗಳೂರು ದಸರಾ ಆಚರಣೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಪರೀಕ್ಷೆಗಳನ್ನು ಆಯೋಜಿಸಿರುವುದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.
ದಸರಾ ರಜೆ ನೀಡದೆ ಪರೀಕ್ಷೆ ನಡೆಸುತ್ತಿರುವುದರಿಂದ ಹಬ್ಬದ ಆಚರಣೆಗಳಲ್ಲಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಆಕ್ಷೇಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಪರೀಕ್ಷೆಗಳನ್ನು ಬಹಿಷ್ಕರಿಸಿ ಕಾಲೇಜಿನ ಮುಂಭಾಗದಲ್ಲಿ ಧರಣಿ ನಡೆಸಿದ್ದಾರೆ. ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಬಲ ನೀಡಿದೆ.
ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಆಗ್ರಹ
ಪರೀಕ್ಷೆಗಳನ್ನು ಮುಂದೂಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮೊದಲೇ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಡೆಗಣಿಸಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ಆಡಳಿತ ಮಂಡಳಿಯ ಕ್ರಮವನ್ನು ಖಂಡಿಸಿದ್ದಾರೆ. ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಂಟಾಗಿರುವ ಸಮಸ್ಯೆಯನ್ನು ಪರಿಹರಿಸಿ, ಪರೀಕ್ಷೆಗಳನ್ನು ಮುಂದೂಡಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿವೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಲಾಗಿದೆ.
ಕಾಲೇಜು ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ಆಕ್ರೋಶ
ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಕಾಲೇಜಿನ ಮುಖ್ಯ ದ್ವಾರದ ಎದುರು ಪ್ರತಿಭಟನೆ ಮುಂದುವರಿಸಿದ್ದಾರೆ. ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಸರಾ ಹಬ್ಬದ ಆಚರಣೆ ಮತ್ತು ಪರೀಕ್ಷೆಗಳ ನಡುವಿನ ಸಂಘರ್ಷಕ್ಕೆ ಕಾಲೇಜು ಆಡಳಿತ ಮಂಡಳಿ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ. ಪರೀಕ್ಷೆಗಳ ಮುಂದೂಡಿಕೆ ಕುರಿತು ಆಡಳಿತ ಮಂಡಳಿಯ ಅಧಿಕೃತ ನಿರ್ಧಾರ ಪ್ರಕಟವಾಗಬೇಕಿದೆ.

