ದೇವರಾಜ ಅರಸು ಮೊಮ್ಮಗ, ಕಾಂಗ್ರೆಸ್‌ ನಾಯಕ ಸೂರಜ್ ಹೆಗ್ಡೆ ಹೃದಯಾಘಾತದಿಂದ ವಿಧಿವಶ
x

ದೇವರಾಜ ಅರಸು ಮೊಮ್ಮಗ, ಕಾಂಗ್ರೆಸ್‌ ನಾಯಕ ಸೂರಜ್ ಹೆಗ್ಡೆ ಹೃದಯಾಘಾತದಿಂದ ವಿಧಿವಶ

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ದೇವರಾಜ ಅರಸು ಅವರ ಮೊಮ್ಮಗನ ಅಗಲಿಕೆಗೆ ಸಿಎಂ ಕಂಬನಿ ಮಿಡಿದಿದ್ದಾರೆ.


ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ಸೋಮವಾರ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗರಾಗಿದ್ದು, ಕಾಂಗ್ರೆಸ್ ಪಕ್ಷದ ಯುವ ಹಾಗೂ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಸೋಮವಾರ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಸೂರಜ್ ಹೆಗ್ಡೆ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಭಾವನಾತ್ಮಕ ಶೋಕ ಸಂದೇಶ ನೀಡಿರುವ ಅವರು, ಸೂರಜ್ ಹೆಗ್ಡೆ ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದಿದ್ದಾರೆ.

“ಸೂರಜ್ ಹೆಗ್ಡೆ ಅವರ ಅಗಲಿಕೆಯ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ಆಘಾತವಾಗಿದೆ. ಇಷ್ಟು ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿ ವಹಿಸಿಕೊಂಡು, ಪಕ್ಷದ ಸಂಘಟನೆಯಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು" ಎಂದಿದ್ದಾರೆ.

ತಾತನ ಹಾದಿಯಲ್ಲಿ ಸಾಮಾಜಿಕ ನ್ಯಾಯದ ಹೋರಾಟ:

"ಸೂರಜ್ ಹೆಗ್ಡೆ ಅವರು ತಮ್ಮ ತಾತ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹಾದಿಯಲ್ಲೇ ನಡೆದು, ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸದಾ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಪಕ್ಷ ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿಸಿದ್ದ ಸೂರಜ್, ಪ್ರಸ್ತುತ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು.

"ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ," ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

Read More
Next Story