
ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 6 ಮಂದಿಗೆ ಗಾಯ
ರಾಯಚೂರು ಮೂಲದ ಕರಿಲಿಂಗಪ್ಪ ಕುಟುಂಬ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ದಂಪತಿ ಹಾಗೂ ಮಕ್ಕಳು ಗಾಯಗೊಂಡಿದ್ದಾರೆ.
ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಬೆಳಗಿನ ಜಾವ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಯಚೂರು ಮೂಲದ ಕುಟುಂಬ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕರಿಲಿಂಗಪ್ಪ ಕೂಲಿ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ಸುಮಾರು 6 ಗಂಟೆಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ದಂಪತಿ ಹಾಗೂ ಮಕ್ಕಳು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಕರಿಲಿಂಗಪ್ಪ (40), ಲಕ್ಷ್ಮಮ್ಮ (43), ಚೈತ್ರಾ (11), ಬಸವ (9) ಹಾಗೂ 3 ವರ್ಷದ ಗೀತಾ ಮತ್ತು ಗಿರಿಜಾ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಲಕ್ಷ್ಮಮ್ಮ ಹಾಗೂ ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ಬಳಿಕ ಗಾಯಗೊಂಡ ಆರು ಮಂದಿಯನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

