
DK Shivakumar Oath Taking Live: ನೊಣವಿನಕೆರೆ ಅಜ್ಜಯ್ಯನ ಹೆಸರಿನಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕಾರ
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಹಲವು ಸಚಿವರೂ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೊಡ್ಡಾಲಹಳ್ಳಿ ಕೆಂಪೇಗೌಡ (ಡಿ.ಕೆ.) ಶಿವಕುಮಾರ್ ಅವರು ಬುಧವಾರ ಸಂಜೆ 4.05ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಲೋಕಭವನದಲ್ಲಿ ಭರದ ಸಿದ್ಧತೆಗಳು ನಡೆದಿವೆ. ಲೋಕಭವನದ ಆವರಣದಲ್ಲಿರುವ ಗ್ಲಾಸ್ ಹೌಸ್‌ನಲ್ಲಿ ಈ ಭವ್ಯ ಸಮಾರಂಭ ಆಯೋಜನೆಗೊಂಡಿದೆ.
ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುಮಾರು 11 ರಿಂದ 14 ಜನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಹಿಂದೆ ವಿಧಾನ ಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಸಲು ಯೋಜಿಸಲಾಗಿತ್ತು. ಆದರೆ ಭಾರಿ ಸಂಖ್ಯೆಯಲ್ಲಿ ಜನ ಸೇರುವುದರಿಂದ ಉಂಟಾಗಬಹುದಾದ ಸಂಚಾರ ದಟ್ಟಣೆಯ ಆತಂಕದಿಂದಾಗಿ, ಕೊನೆಯ ಕ್ಷಣದಲ್ಲಿ ಕಾರ್ಯಕ್ರಮದ ಸ್ಥಳವನ್ನು ಲೋಕಭವನಕ್ಕೆ ಬದಲಾಯಿಸಲಾಗಿದೆ. ನೂತನ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ವಿಧಾನ ಸೌಧದಲ್ಲಿರುವ ಸಿಎಂ ಕಚೇರಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ.
ಈ ಐತಿಹಾಸಿಕ ಸಮಾರಂಭಕ್ಕೆ ರಾಷ್ಟ್ರೀಯ ನಾಯಕರ ದಂಡೇ ಹರಿದುಬರಲಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ಕೇವಲ ರಾಜಕೀಯ ನಾಯಕರು ಮಾತ್ರವಲ್ಲದೆ, ದೊಡ್ಡಾಲಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಪೌರಕಾರ್ಮಿಕರು, ಕಾರ್ಮಿಕರು, ದಲಿತ ಹಾಗೂ ಹಿಂದುಳಿದ ವರ್ಗಗಳ ಮುಖಂಡರು, ಮಹಿಳಾ ನಾಯಕಿಯರು, ಸಾಹಿತಿಗಳು, ನಟರು ಮತ್ತು ಉದ್ಯಮಿಗಳಿಗೂ ವಿಶೇಷ ಆಹ್ವಾನ ನೀಡಲಾಗಿದೆ.
ಧಾರ್ಮಿಕ ವಲಯದ ಪ್ರಮುಖರಿಗೂ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಗಿದ್ದು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಆರ್ಚ್‌ಬಿಷಪ್ ಡಾ. ಪೀಟರ್ ಮಚಾದೋ ಮತ್ತು ಹಜರತ್ ಹಫೀಜ್ ಡಾ. ಸಯದ್ ಮೊಹಮ್ಮದ್ ಅಲಿ ಅಲ್ ಹುಸೇನ್ ಸೇರಿದಂತೆ ಸುಮಾರು 55ಕ್ಕೂ ಹೆಚ್ಚು ಧರ್ಮಗುರುಗಳು ಭಾಗವಹಿಸಲಿದ್ದಾರೆ. ಇವರಿಗಾಗಿ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ವಿಐಪಿಗಳು ಹಾಗೂ ಶಾಸಕರಿಗಾಗಿ ತೋಟದ ಆವರಣದಲ್ಲಿ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.
Live Updates
- 3 Jun 2026 10:58 AM IST
ಕನಕಪುರದಲ್ಲಿ ಹಬ್ಬದ ವಾತಾವರಣ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ತವರು ಕ್ಷೇತ್ರವಾದ ಕನಕಪುರದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ಬೆಂಗಳೂರಿನ ಲೋಕ ಭವನದಲ್ಲಿ ನಡೆಯಲಿರುವ ಈ ಐತಿಹಾಸಿಕ ಸಮಾರಂಭಕ್ಕಾಗಿ ಕನಕಪುರ ವಿಧಾನಸಭಾ ಕ್ಷೇತ್ರದಾದ್ಯಂತ ಮತ್ತು ಡಿ.ಕೆ. ಶಿವಕುಮಾರ್ ಅವರ ನಿವಾಸದ ಸುತ್ತಮುತ್ತ ಬೃಹತ್ ಬ್ಯಾನರ್‌ಗಳು ಹಾಗೂ ಕಟೌಟ್‌ಗಳನ್ನು ಅಳವಡಿಸಿ ಸಿಂಗರಿಸಲಾಗಿದೆ. ನೆಚ್ಚಿನ ನಾಯಕ ರಾಜ್ಯದ ಚುಕ್ಕಾಣಿ ಹಿಡಿಯುತ್ತಿರುವುದನ್ನು ಸಂಭ್ರಮಿಸಲು ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾತುರರಾಗಿದ್ದಾರೆ.
- 3 Jun 2026 10:51 AM IST
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ: ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ
ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯ ಐಜಿಐ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನ ಲೋಕಭವನದಲ್ಲಿ ಇಂದು ಸಂಜೆ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ಹಿರಿಯ ನಾಯಕರು ಹಾಗೂ ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
- 3 Jun 2026 10:51 AM IST
ಡಿ.ಕೆ. ಶಿವಕುಮಾರ್ ಸಿಎಂ ಆಗಿ ಇಂದು ಪ್ರಮಾಣ ವಚನ: ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬಂದ್
ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಅಥವಾ ಬದಲಾಯಿಸಲಾಗಿದೆ. ಮುಖ್ಯವಾಗಿ ಬಸವೇಶ್ವರ ವೃತ್ತದಿಂದ ಬಿಆರ್‌ವಿ ಜಂಕ್ಷನ್‌ವರೆಗಿನ ರಾಜ್ ಭವನ್ ರಸ್ತೆ, ಕೆ.ಆರ್. ವೃತ್ತದಿಂದ ಬಾಳೇಕುಂದ್ರಿ ವೃತ್ತದವರೆಗಿನ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಲೋಕಭವನದ ಕಡೆಗೆ ಸಂಪರ್ಕಿಸುವ ರಸ್ತೆಗಳಲ್ಲಿ ಮಧ್ಯಾಹ್ನದಿಂದಲೇ ಸಾಮಾನ್ಯ ವಾಹನಗಳ ಓಡಾಟಕ್ಕೆ ಬ್ರೇಕ್ ಬಿದ್ದಿದೆ. ಅಷ್ಟೇ ಅಲ್ಲದೆ, ಮುನ್ನೆಚ್ಚರಿಕಾ ಕ್ರಮವಾಗಿ ಮಧ್ಯಾಹ್ನ 12 ರಿಂದ ರಾತ್ರಿ 10 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯೊಳಗೆ ಭಾರಿ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ವಾಹನ ಸವಾರರ ಅನುಕೂಲಕ್ಕಾಗಿ ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದು, ನಗರದ ಮಧ್ಯಭಾಗದಲ್ಲಿ ಪ್ರಯಾಣಿಸುವವರು ಶಿವಾಜಿನಗರ, ಕನ್ನಿಂಗ್‌ಹ್ಯಾಮ್ ರಸ್ತೆ, ನೃಪತುಂಗ ರಸ್ತೆ, ಶಿವಾನಂದ ಜಂಕ್ಷನ್ ಮತ್ತು ಹೊರವರ್ತುಲ ರಸ್ತೆಯನ್ನು ಬಳಸುವಂತೆ ಕೋರಲಾಗಿದೆ. ಕಬ್ಬನ್ ರಸ್ತೆಯಿಂದ ಲೋಕಭವನದ ಕಡೆಗೆ ಹೋಗುವವರು ಬಿಆರ್‌ವಿ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಶಿವಾಜಿನಗರದ ಮೂಲಕ ಸಾಗಬಹುದು. ಇನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಹೆಬ್ಬಾಳ ಕಡೆಗೆ ಸಂಚರಿಸುವವರು ಕನ್ನಿಂಗ್‌ಹ್ಯಾಮ್ ರಸ್ತೆ ಮತ್ತು ವಸಂತನಗರದ ಮೂಲಕ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಲು ಸಲಹೆ ನೀಡಲಾಗಿದೆ.
- 3 Jun 2026 10:35 AM IST
ರಾಜ್‌ಭವನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ರಾಜಧಾನಿ ಬೆಂಗಳೂರಿನ ರಾಜ್‌ಭವನದಲ್ಲಿ (ಲೋಕ ಭವನ) ಅದ್ಧೂರಿ ಸಿದ್ಧತೆಗಳೊಂದಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ನಗರದ ಪ್ರಮುಖ ಆಡಳಿತ ಕೇಂದ್ರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಮಾರಂಭವು ಸುಸೂತ್ರವಾಗಿ ನೆರವೇರುವಂತೆ ಪೊಲೀಸ್ ಇಲಾಖೆ ಸರ್ಪಗಾವಲು ಹಾಕಿದೆ.
ರಾಜ್‌ಭವನದ ಗ್ಲಾಸ್ ಹೌಸ್‌ನಲ್ಲಿ ಈ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿರುವುದರಿಂದ ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶಕ್ಕೆ ಕಟ್ಟುನಿಟ್ಟಿನ ಮಿತಿ ಹೇರಲಾಗಿದೆ. ಕೇವಲ ಆಮಂತ್ರಣ ಪತ್ರಿಕೆ ಮತ್ತು ವಿಶೇಷ ಪಾಸ್ ಹೊಂದಿರುವ ಗಣ್ಯರು, ಶಾಸಕರು ಹಾಗೂ ನಿಯೋಜಿತ ಅಧಿಕಾರಿಗಳಿಗೆ ಮಾತ್ರ ಒಳಪ್ರವೇಶಿಸಲು ಅನುಮತಿ ನೀಡಲಾಗಿದೆ. ಭಾರಿ ಜನಸ್ತೋಮ ಸೇರುವುದರಿಂದ ಉಂಟಾಗಬಹುದಾದ ಸಂಚಾರ ದಟ್ಟಣೆ ಮತ್ತು ಸಾರ್ವಜನಿಕ ಮುಜುಗರವನ್ನು ತಪ್ಪಿಸಲು ಈ ಬಾರಿ ಕಾರ್ಯಕ್ರಮವನ್ನು ಸರಳವಾಗಿ ಆಯೋಜಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್‌ಭವನದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.



