
ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್ ರಾವ್ ಮಾಫಿ ಸಾಕ್ಷಿ ಆದೇಶ ಎತ್ತಿಹಿಡಿದ ಹೈಕೋರ್ಟ್
ಪ್ರದೋಷ್ ರಾವ್ ಅವರನ್ನು ಪ್ರಶ್ನಿಸುವ ಸಂಪೂರ್ಣ ಹಕ್ಕು ದರ್ಶನ್ ಪರ ವಕೀಲರಿಗೆ ಇರಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಹೈಕೋರ್ಟ್ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
ವಿಚಾರಣೆ ವೇಳೆ ಪ್ರದೋಷ್ ರಾವ್ ಅವರನ್ನು ಪ್ರಶ್ನಿಸುವ ಸಂಪೂರ್ಣ ಹಕ್ಕು ದರ್ಶನ್ ಪರ ವಕೀಲರಿಗೆ ಇದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಪ್ರದೋಷ್ ಪರ ಹಿರಿಯ ವಕೀಲ ಕೆ. ದಿವಾಕರ್ ವಾದ ಮಂಡಿಸಿ, ದರ್ಶನ್ ಪರ ವಕೀಲರು ವಿಚಾರಣೆಯನ್ನು ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
10ನೇ ಆರೋಪಿ ವಿನಯ್ ಕೂಡ ಮಾಫಿ ಸಾಕ್ಷಿಗೆ ಅರ್ಜಿ ಸಲ್ಲಿಸಿದ್ದರೂ ಆತನನ್ನು ಬಿಟ್ಟು ಪ್ರದೋಷ್ ಅರ್ಜಿಯನ್ನು ಮಾತ್ರ ಪರಿಗಣಿಸಲಾಗಿದೆ ಎಂದು ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿದರು.
ಜೈಲಿನಿಂದ ಪ್ರದೋಷ್ ತನ್ನ ಪತ್ನಿಯೊಂದಿಗೆ ಮಾತನಾಡಿರುವ ವಿಚಾರದ ಕುರಿತು ವಾದ-ಪ್ರತಿವಾದಗಳು ನಡೆದವು. ಇದೆಲ್ಲವನ್ನೂ ಆಲಿಸಿದ ನ್ಯಾಯಪೀಠ, ಪ್ರದೋಷ್ ರಾವ್ ಅಪ್ರೂವರ್ ಆಗುತ್ತೇನೆ ಎಂದು ದೂರವಾಣಿಯಲ್ಲಿ ಮಾತನಾಡಿದರೆ ತಪ್ಪೇನು?, ಗಂಡ-ಹೆಂಡತಿ ಪರಸ್ಪರ ಅಭಿಪ್ರಾಯ ಕೇಳಿದರೆ ತಪ್ಪೇನಿದೆ?, ಬೇರೆಯವರ ಚಿತಾವಣೆ ದಾಖಲೆ ಇದ್ದರೆ ಅದು ಬೇರೆ ವಿಚಾರ" ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲದೆ, 10ನೇ ಆರೋಪಿಯ ಅರ್ಜಿ ವಿಚಾರವನ್ನು ಆತನೇ ಹೇಳಬೇಕೆ ಹೊರತು ನೀವು ವಾದಿಸುವಂತಿಲ್ಲ ಎಂದು ನ್ಯಾಯಮೂರ್ತಿ ಸೂಚಿಸಿದರು.
ಹಿನ್ನೆಲೆ ಏನು?
ಚಿತ್ರದುರ್ಗದ ರೇಣುಕಾಸ್ವಾಮಿ 2024ರ ಜೂನ್ನಲ್ಲಿ ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡಗೆ ಇನ್ಸ್ಟಾಗ್ರಾಮ್ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದಾರೆಂಬ ಆರೋಪವಿತ್ತು. ಈ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್ಗೆ ಕರೆತಂದು ಬರ್ಬರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್, ಸಾಕ್ಷ್ಯ ನಾಶಪಡಿಸಲು ಹಾಗೂ ಹಣಕಾಸಿನ ವ್ಯವಹಾರಕ್ಕೆ ನೆರವಾಗಿದ್ದ ಆರೋಪ ಎದುರಿಸುತ್ತಿದ್ದಾರೆ. ತಾನು ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆಯನ್ನು ನ್ಯಾಯಾಲಯದ ಮುಂದೆ ಬಹಿರಂಗ ಮಾಡುತ್ತೇನೆ ಎಂದು ತಿಳಿಸಿ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಅದನ್ನು ಸಿಸಿಹೆಚ್ ಕೋರ್ಟ್ ಪುರಸ್ಕರಿಸಿತ್ತು. ಇದೀಗ ಹೈಕೋರ್ಟ್ ಕೂಡ ವಿಚಾರಣಾ ನ್ಯಾಯಾಲಯದ ತೀರ್ಪಿಗೆ ಅನುಮೋದನೆ ನೀಡಿರುವುದರಿಂದ ದರ್ಶನ್ ಕಾನೂನು ತಂಡಕ್ಕೆ ಮತ್ತಷ್ಟು ತೊಡಕುಂಟಾದಂತಾಗಿದೆ.

